ದಿನದ ಸುದ್ದಿ
ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ
ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್ನಲ್ಲೂ ಗೋಲ್ಮಾಲ್ ನಡೆದಿದೆ. ಬಳಿಕ ನೆಟ್ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ (26/06/2024) ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಆದೇಶಿಸಿದೆ.
ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ವಜಾ ಮಾಡಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿಗಳ ರವರ ಮುಖಾಂತರ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಗಳಿಗೆ ಇಂದು ಮನವಿ ಸಲ್ಲಿಸಿದರು.
ನೀಟ್-ಯುಜಿ ಹಾಗೂ ಯಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಕೊನೆ ಗಳಿಗೆಯಲ್ಲಿ ಏಕಾಏಕಿ ಪರೀಕ್ಷೆ ರದ್ದುಪಡಿಸಿದ್ದರಿಂದ ಎಲ್ಲೂ ಮತ್ತೊಂದು ಕಡೆ ಅಕ್ರಮದ ನಡೆಯುತ್ತಿರುವುದು ಶಂಕೆ ವ್ಯಕ್ತವಾಗುತ್ತಿದೆ. ಆದರೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ವಿಫಲಗೊಂಡಿದ್ದಾರೆ ಎಂಬದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಜೂನ್ 26 ರ ಭಾನುವಾರದಂದು ದೇಶದ 270 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿತ್ತು. 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಪರೀಕ್ಷೆ ಬರೆಯಬೇಕಿತ್ತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿದು ಬರುತ್ತಿದೆ. ನೀಟ್ – ಪಿಜಿ
ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿ ಕೇಂದ್ರ ಸರ್ಕಾರ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಎಲ್ಲ ವಿಫಲತೆ ಎಂದು ಕಾಣುತ್ತದೆ.
ಇದೇ ವೇಳೆ ಕೇಂದ್ರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದೆ. ಏಜೆನ್ಸಿಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಪರೀಕ್ಷಾ ಸುಧಾರಣೆಗಳನ್ನು ಶಿಫಾರಸು ಮಾಡಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು ಸ್ವಾಗತ ಆದರೆ ಪದೇ ಪದೇ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಈ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿವೆ. ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪದೇ ಪದೇ ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಆತ್ಮಸ್ಥೈರ್ಯ ಮತ್ತು ನೆಮ್ಮದಿ ಹಾಳಾಗಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ಕನಸುಗಳಿಗೆ ಪೆಟ್ಟು ಬಿದ್ದಿದೆ.
ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಇದರ ಜೊತೆಗೆ ಶೈಕ್ಷಣಿಕ ಸೀಟ್ ಹಂಚಿಕೆ ಮಾಡಲು ನೀಟ್ – ನೆಟ್ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕೆಂದು ಈ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಪರಿಷತ್ ಸಂಘಟನೆ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕಹಾಗೂ ಪುರಸಭಾ ಸದಸ್ಯ ಸಾಬೀರ್ ಜಯಸಿಂಹ. ಹರಿಹರ ತಾಲೂಕು ಗೌರವ ಸಂಚಾಲಕ ಭೋವಿ ಶಿವಣ್ಣ, ಪುರಸಭಾ ಸದಸ್ಯರಾದ ನಯಾಜ್ ಅಹಮದ್, ಶಬ್ಬೀರ್ ಖಾನ್,ಗೌಡ್ರ ಮಂಜಪ್ಪ ಹಾಗೂ ಅನ್ವರ್ ಸಾಬ್,ಕೆ ಪಿ ಗಂಗಾಧರ್, ಭಾನುವಳ್ಳಿ ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


