Connect with us

ದಿನದ ಸುದ್ದಿ

ಕೆಎಸ್‍ಆರ್‍ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸೊರಗಿದೆ ನಿಜ. ಒಟ್ಟಾರೆ 4 ಸಾವಿರ ಕೋಟಿ ಹಾನಿಗೊಳಗಾಗಿದೆ. ಹೀಗಂದ ಮಾತ್ರಕ್ಕೆ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ. ನೌಕರರ ಬದುಕನ್ನು ಬೀದಿಗೆ ಬರಲು ನಾನು ಬಿಡುವುದಿಲ್ಲವೆಂದು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕೆಎಸ್‍ಆರ್‍ಟಿಸಿ ನೌಕರರು ಇತ್ತೀಚೆಗೆ ನಡೆಸಿದ ಹೋರಾಟ ತಪ್ಪಲ್ಲ. ಆದರೆ ಸಮಯ, ಸಂದರ್ಭ ಗಮನದಲ್ಲಿಟ್ಟುಕೊಂಡು ಮಾಡಬೇಕಿತ್ತು. ಪ್ರತಿಭಟನೆಗೂ ಮುನ್ನ ನೋಟಿಸ್ ನೀಡಿ ಮಾಡಬೇಕು. ದಿಢೀರನೆ ಪ್ರತಿಭಟನೆಗೆ ನಿಲ್ಲುವುದು ಸರಿಯಲ್ಲ. ನೋಟಿಸ್ ನೀಡಿದ್ದರೆ ನಾನೇ ತಕ್ಷಣ ತಮ್ಮನ್ನು ಕರೆಸಿ ಸ್ಪಂದಿಸುತ್ತಿದ್ದೆ. ಕೊರೊನಾ ಹಿನ್ನೆಲೆಯಲ್ಲಿ ಸಹ ತಾವು ಕೇಳದಿದ್ದರೂ ನಾನು ಮುಖ್ಯಮಂತ್ರಿಗಳ ಮನವೊಲಿಸಿ ನಾಲ್ಕು ತಿಂಗಳ ವೇತನಕ್ಕೆ ವ್ಯವಸ್ಥೆ ಮಾಡಿದ್ದೆ. ತಾವು ತಮ್ಮ ಬೇಡಿಕೆಗಳಿಗೆ ಹೋರಾಟ ಮಾಡುವುದು ನಿಮ್ಮ ಹಕ್ಕಾದರೆ ನಾವು ಅದನ್ನು ಪೂರೈಸುವುದು ನಮ್ಮ ಕರ್ತವ್ಯ. ಆದರೆ ನಮ್ಮ ಚಾಲರು, ನಿರ್ವಾಹಕರೇ ತಮ್ಮ ಬಾಳಿಗೆ ಬೆಳಕಾದ ಬಸ್ಸಿಗೆ ಕಲ್ಲು ತೂರಿದ್ದು ಮನಸ್ಸಿಗೆ ಬೇಸರ ತಂದಿತು ಎಂದು ಖೇದ ವ್ಯಕ್ತಪಡಿಸಿದರು.

ಕಾಲ ಹೀಗೆಯೇ ಇರುವುದಿಲ್ಲ. ಅಭಿವೃದಿಯೆಡೆ ನಿಗಮ ಸಾಗಲಿದೆ. ಹಿಂದೆಲ್ಲ ಕೆಲವೇ ಕಂಪೆನಿಗಳ ವಾಹನಗಳು ನಮ್ಮಲ್ಲಿದ್ದವು. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅಂತರಾಷ್ಟ್ರೀಯ ವಾಹನಗಳು ಬರಲಿವೆ. ಎಲೆಕ್ಟ್ರಾನಿಕ್ ಬಸ್‍ಗಳನ್ನು ನಿಗಮದ ಮೂಲಕ ಓಡಿಸಲು ಒಪ್ಪಂದ ಮಾಡಲಾಗಿದೆ. ನಮ್ಮದೇ ಚಾಲಕರು/ನಿರ್ವಾಹಕರು ಈ ಬಸ್‍ಗಳನ್ನು ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಶೀಘ್ರದಲ್ಲಿ 4 ರಿಂದ 6 ಕಡೆ ತರಬೇತಿ ಕೇಂದ್ರಗಳನ್ನು ಆರಂಭಿಸಿ ತರಬೇತಿ ನೀಡಲಾಗುವುದು.

ವಾಯುಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ, ವಾಯುಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲೆಕ್ಟ್ರಾನಿಕ್ ಬಸ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. 1 ಬಸ್ ವೆಚ್ಚ ರೂ.2 ಕೋಟಿ ಇದ್ದು ಕೇಂದ್ರ ಸರ್ಕಾರ ರೂ.55 ಲಕ್ಷ ಸಬ್ಸಿಡಿ ನೀಡಲಿದೆ. ಸಬ್ಸಿಡಿಯಲ್ಲಿ ಖರೀದಿಸಿದ ಏಜೆನ್ಸಿ ಬಸ್ ಇಲಾಖೆಗೆ ನೀಡುವ ಒಪ್ಪಂದ ಮಾಡಿಕೊಳ್ಳಲಾಗುವುದು. ತರಬೇತಿ ಹೊಂದಿದ ನಮ್ಮ ಸಿಬ್ಬಂದಿಗಳು ಇದನ್ನು ನಿರ್ವಹಿಸುವರು ಎಂದರು.

ಉತ್ತಮ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ನೀಡುವಂತೆ, ಪ್ರತಿ ಲೀಟರ್‍ಗೆ ಹೆಚ್ಚು ಕಿ.ಮೀ ಓಡಿಸುವ ಚಾಲಕರಿಗೆ 11 ಗ್ರಾಂ ಬಂಗಾರದ ಪದಕ ನೀಡುವ ಯೋಜನೆ ಇದೆ. ಈ ನಿಟ್ಟಿನಲ್ಲಿ ಚಾಲಕರು ಉತ್ತಮ ಸೇವೆ ಸಲ್ಲಿಸಬೇಕು. ಸಿಬ್ಬಂದಿಗಳ 10 ಬೇಡಿಕೆಗಳ ಪೈಕಿ 9 ನ್ನು ಪೂರೈಸಲಾಗಿದೆ. ಯಾರೂ ಆತಂತಕ್ಕೆ ಈಡಾಗದೇ ಕರ್ತವ್ಯ ನಿರ್ವಹಿಸಬೇಕು ಎಂದರು.

ಇಲಾಖೆ ಹಾನಿ ಆಗಲು ಕಾರಣ ರಾಜಕೀಯ ಇಚ್ಚಾಶಕ್ತಿ ಕೊರತೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಆಗಬಹುದೆಂಬ ಆತಂಕ. ಡೀಸೆಲ್ ದರ, ಟೈರ್ ದರ, ಸಂಬಳ ಎಲ್ಲವೂ ಹೆಚ್ಚಾಗುತ್ತಿದೆ. ಆದರೆ ಆದಾಯ ಹೆಚ್ಚಿಸಲು ಆಗುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಆದಾಯವನ್ನು ಸರಿದೂಗಿಸುವ ಬಗ್ಗೆ ನನ್ನದೇ ಪರಿಕಲ್ಪನೆಯಿದ್ದು ಈ ಪ್ರಕಾರ 4 ನಿಗಮಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದರು.


ಜೀವನದಲ್ಲಿ ಮೂರು ಸಂಗತಿಗಳನ್ನು ಅರಿತು ಬಾಳಬೇಕು. ಹುಟ್ಟು ಸಾವು ಮತ್ತು ಅದರ ನಡುವಿನ ಬದುಕು. ಅಧಿಕಾರ, ಐಶ್ವರ್ಯ, ಆಯುಷ್ಯ ಯಾವುದೂ ಶಾಶ್ವತ ಅಲ್ಲ. ಆದರೆ ಜೀವನದ ಮೌಲ್ಯವನ್ನು ಅರಿತಾಗ ಮಾತ್ರ ನಾವು ಈ ನೆಲದ ಋಣ ತೀರಿಸಲು ಏನಾದರೂ ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯ. ನಾವು ಮಾಡುವ ಉತ್ತಮ ಕಾರ್ಯಗಳು ಮಾತ್ರ ಶಾಶ್ವತವಾಗಿರುತ್ತವೆ. ಈ ನಿಟ್ಟಿನಲ್ಲಿ ತಮ್ಮ ಸೇವೆಯಲ್ಲಿ ಅಪಘಾತ ಮತ್ತು ಅಪರಾಧ ಮಾಡದೇ ಬೆಳ್ಳಿ ಪದಕ ಗೌರವಕ್ಕೆ ಭಾಜನರಾದ ಚಾಲಕರಂತೆ ಇತರರೂ ತಾವು ಉತ್ತಮ ಸೇವೆ ಸಲ್ಲಿಸಬೇಕೆಂಬ ಮನೋಭಾವ ಹೊಂದಬೇಕು.

ಸಂಸದರಿಗೆ ಅಭಿನಂದನೆ : ಈ ಕಾರ್ಯಕ್ರಮ ಆಗುವುದಕ್ಕೆ ಕಾರಣಕರ್ತರು ಸಂಸದ ಜಿ.ಎಂ.ಸಿದ್ದೇಶ್ವರರವರು. ಮೈಸೂರಿಗೆ ಲಭಿಸಬೇಕಿದ್ದ ಸ್ಮಾರ್ಟ್‍ಸಿಟಿ ಯೋಜನೆಯನ್ನು ಕೇಂದ್ರದ ಮೇಲೆ ಒತ್ತಡ ತಂದು ದಾವಣಗೆರೆಗೆ ಲಭಿಸುವಂತೆ ಮಾಡಿದರು. ಇದೀಗ ಸ್ಮಾರ್ಟ್‍ಸಿಟಿಯಿಂದ ರೂ.90 ಕೋಟಿ ಮತ್ತು ಇಲಾಖೆಯಿಂದ 30 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣವಾಗುತ್ತಿರುವುದಕ್ಕೆ ನಾನು ಸಂಸದರನ್ನು ಅಭಿನಂದಿಸುತ್ತೇನೆ.

|ಲಕ್ಷ್ಮಣ ಸಂ.ಸವದಿ, ಸಾರಿಗೆ ಸಚಿವರು


ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದಲ್ಲಿ ಹೈಟೆಕ್ ಬಸ್‍ನಿಲ್ದಾಣವಾಗುತ್ತಿರುವುದು ಸಂತಸದ ವಿಚಾರ. ಆದರೆ ಬಸ್‍ಸ್ಟ್ಯಾಂಡ್ ಕೆಡವಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಕ್ಷಿಪ್ರವಾಗಿ ಕೆಲಸ ಮುಗಿಸಬೇಕೆಂದರು.

ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಒಟ್ಟು 9 ಎಕರೆ ಜಾಗದಲ್ಲಿ ಸ್ಮಾರ್ಟ್‍ಸಿಟಿಯ ರೂ.90 ಕೋಟಿ ಮತ್ತು ಸಾರಿಗೆ ಇಲಾಖೆಯ ರೂ.30 ಕೋಟಿ ಸೇರಿ ಒಟ್ಟು ರೂ.120 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲಿನಕ್ಷೆ ತಯಾರಿಸಲಾಗಿದೆ. ನೆಲಮಹಡಿ ಸೇರಿ ಒಟ್ಟು ಆರು ಮಹಡಿಗಳಲ್ಲಿ ನಿಲ್ದಾಣದ ನಿರ್ಮಾಣ ಆಗಲಿದೆ.

ಬಸ್ ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್, ಮಹಿಳಾ ವಿಶ್ರಾಂತಿ ಕೊಠಡಿಗಳು, ಶೌಚಾಲಗಳು, ಭದ್ರತಾ ಕೊಠಡಿ, ಸೋಲಾರ್ ಸೌಲಭ್ಯ, ವಾಹನಗಳ ಪಾರ್ಕಿಂಗ್, ಎಲಿವೇಟರ್‍ಗಳು, ಎಸ್ಕಲೇಟರ್‍ಗಳು, ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಎಲೆಕ್ಟ್ರಾನಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಸೌಲಭ್ಯ ಸಹ ಮಾಡಲಾಗುವುದು ಎಂದರು.

ಬೆಳ್ಳಿ ಪದಕ ಪ್ರದಾನ :ದಾವಣಗೆರೆ ವಿಭಾಗದಲ್ಲಿ 2018 ಮತ್ತು 2019 ನೇ ಸಾಲಿನಲ್ಲಿ ಸತತವಾಗಿ 5 ವರ್ಷ ಅಪಘಾತ/ಅಪರಾಧರಹಿತವಾಗಿ ಹಾಗೂ ಪ್ರತಿ ವರ್ಷ ಕನಿಷ್ಟ 200 ದಿನ ಹಾಜರಾತಿ ಹೊಂದಿ ಸೇವೆ ಸಲ್ಲಿಸಿದ ಒಟ್ಟು 27 ಚಾಲಕರು ಮತ್ತು ಚಾಲಕ/ನಿರ್ವಾಹಕರಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.

ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್‍ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending