ಬಹಿರಂಗ
ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕಕ್ಕೂ ಲಗ್ಗೆ ಇಟ್ಟ ಮತೀಯ ರಾಜಕಾರಣ
- ನಾ ದಿವಾಕರ
ಕರ್ನಾಟಕದ ಜಲಿಯನ್‌ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..?
ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು ಆಳ್ವಿಕೆಯಿಂದ ವಿಮೋಚನೆ ಪಡೆಯುವ ಮುನ್ನ ಭಾರತ ಆಂತರಿಕವಾಗಿ ಅನುಭವಿಸಿದ ತುಮುಲಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ, ಸಾಮಾಜಿಕ ಚೌಕಟ್ಟಿನಲ್ಲಿ ಮತ್ತು ರಾಜಕೀಯ ಭೂಮಿಕೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗುತ್ತದೆ.
ಗಾಂಧಿ ಅನುಸರಿಸಿದ ಅಹಿಂಸಾ ಮಾರ್ಗದ ಮೂಲಕವೇ ಭಾರತ ದಾಸ್ಯದಿಂದ ವಿಮೋಚನೆ ಪಡೆದಿದೆ ಎಂಬ ಸಾಮಾನ್ಯ ಗ್ರಹಿಕೆಯ ಹೊರತಾಗಿಯೂ ಸ್ವಾತಂತ್ರ್ಯ ಪೂರ್ವ ಇತಿಹಾಸದಲ್ಲಿ ಬ್ರಿಟೀಷ್ ವಸಾಹತುಶಾಹಿಯ ದಬ್ಬಾಳಿಕೆಗೆ ನೂರಾರು ಜೀವಗಳು ಬಲಿಯಾಗಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಸ್ವಾತಂತ್ರ್ಯದ ಹೊಸ್ತಿಲಲ್ಲೂ ಸಹ ಮತದ್ವೇಷ ಮತ್ತು ಮತಾಂಧತೆಗೆ ಗುರಿಯಾದ ಭಾರತ ಲಕ್ಷಾಂತರ ಸಾವು ನೋವುಗಳನ್ನು ಕಂಡಿದೆ.
ಸಾವಿರಾರು ಜನರ ತ್ಯಾಗ, ಬಲಿದಾನ, ನಿಸ್ವಾರ್ಥ ಹೋರಾಟದ ಪ್ರತಿಫಲವನ್ನು 1947ರ ಸ್ವಾತಂತ್ರ್ಯದಲ್ಲಿ ಕಾಣಬಹುದು. ರಾಜಕೀಯ ಸ್ವಾತಂತ್ರ್ಯ ಪಡೆಯುತ್ತಿದ್ದೇವೆ ಎಂಬ ಹೆಮ್ಮೆಯೊಂದಿಗೇ ಸಾಮಾಜಿಕ ಶೋಷಣೆ ಮತ್ತು ಸಾಂಸ್ಕೃತಿಕ ದಬ್ಬಾಳಿಕೆ ಸ್ವಾತಂತ್ರ್ಯಾನಂತರವೂ ಜೀವಂತವಾಗಿರುತ್ತದೆ ಎಂಬ ಆತಂಕದೊಡನೆಯೇ ಈ ದೇಶದ ಬಹುಸಂಖ್ಯಾತ ಶೋಷಿತ ಜನತೆ ಈ ಸಂಭ್ರಮಾಚರಣೆಯಲ್ಲಿ ತೊಡಗಿದ್ದನ್ನು ಅಲ್ಲಗಳೆಯಳಾಗುವುದಿಲ್ಲ. ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ನಡೆದ ಸುದೀರ್ಘ ಸಂಘರ್ಷದಲ್ಲಿ ಹಲವು ವಿಚಾರಧಾರೆಗಳು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿವೆ. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧಿ ನೇತೃತ್ವದ ಕಾಂಗ್ರೆಸ್ ಸಹ 1885 ರಿಂದ 1935ರವರೆಗಿನ ಯಾತ್ರೆಯಲ್ಲಿ ಹಲವು ರೂಪಾಂತರಗಳನ್ನು ಕಂಡು, ಸವಾಲುಗಳನ್ನೂ ಎದುರಿಸಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಸೌಮ್ಯ ಮಾರ್ಗ, ಮೃದು ಮಾರ್ಗ, ರಾಜೀ ಮಾರ್ಗ, ತೀವ್ರಗಾಮಿ ಮಾರ್ಗ ಮತ್ತು ಕ್ರಾಂತಿಕಾರಿ ಧೋರಣೆಗಳ ಹಲವು ವಿಚಾರಧಾರೆಗಳು ಈ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದ್ದನ್ನು ನಿರಾಕರಿಸಲಾಗುವುದಿಲ್ಲ.
ಈ ವಿಭಿನ್ನ ವಿಚಾರಧಾರೆ ಮತ್ತು ಹೋರಾಟದ ಮಾರ್ಗಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯಂತೆಯೇ ಭಿನ್ನ ಧೋರಣೆಗಳನ್ನು ವ್ಯಕ್ತಪಡಿಸಿವೆ. 1757ರ ಪ್ಲಾಸಿ ಕದನದಿಂದ 1947ರವರೆಗೆ, ನಂತರ 1961ರ ಗೋವಾ ವಿಮೋಚನೆಯವರೆಗಿನ ಹೋರಾಟದ ಹಾದಿಯಲ್ಲಿ ಲಕ್ಷಾಂತರ ಭಾರತೀಯರು ತಮ್ಮ ಸಾಂಸ್ಕೃತಿಕ ಅಥವಾ ಧಾರ್ಮಿಕ ಗಡಿರೇಖೆಗಳನ್ನು ಮರೆತು, ಅಖಂಡ ಭಾರತಕ್ಕಾಗಿ ಜೀವ ಸವೆಸಿದ್ದಾರೆ, ತೆತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಹೀಗೆ ವಿಭಿನ್ನ ಮತಧರ್ಮಗಳ ಅನುಯಾಯಿಗಳು, ಆದಿವಾಸಿಗಳು, ಬುಡಕಟ್ಟು ಸಮುದಾಯಗಳು, ಶೋಷಿತ ವರ್ಗಗಳು ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ವೀರೋಚಿತ ಹೋರಾಟಗಳನ್ನು ನಡೆಸಿವೆ. ಈ ಎರಡು ಶತಮಾನಗಳ ಇತಿಹಾಸದಲ್ಲೇ ಆಂತರಿಕವಾಗಿ ಜಾತಿ ಶೋಷಣೆಯ ವಿರುದ್ಧ, ಅಸ್ಪೃಶ್ಯತೆಯ ವಿರುದ್ಧ, ಸಾಮಾಜಿಕ ಅಸಮಾನತೆಗಳ ವಿರುದ್ಧ, ಊಳಿಗಮಾನ್ಯ ದಬ್ಬಾಳಿಕೆಯ ವಿರುದ್ಧ ಶೋಷಿತ ವರ್ಗಗಳ, ರೈತಾಪಿ ವರ್ಗಗಳ ವೀರೋಚಿತ ಹೋರಾಟಗಳನ್ನೂ ಕಾಣಬಹುದು. ಬಿರ್ಸಾ ಮುಂಡಾ ಹೋರಾಟದಿಂದ ತೆಲಂಗಾಣ ರೈತರ ಹೋರಾಟದವರೆಗೆ ಈ ಪರಂಪರೆ ವಿಸ್ತರಿಸುತ್ತದೆ.
ಈ ಹೋರಾಟಗಳ ನಡುವೆಯೇ ಬ್ರಿಟೀಷರೊಡನೆ ವೀರೋಚಿತವಾಗಿ ಹೋರಾಡಿ ಪ್ರಾಣತೆತ್ತ ಅನೇಕ ಪ್ರಾಂತೀಯ ಸಂಸ್ಥಾನಗಳ ಇತಿಹಾಸವನ್ನೂ ದಾಖಲಿಸಲಾಗಿದೆ. ಟಿಪ್ಪುಸುಲ್ತಾನ್, ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ, ಸಂಗೊಳ್ಳಿರಾಯಣ್ಣ ಮುಂತಾದವರು ಹುತಾತ್ಮರಾಗಿದ್ದಾರೆ. ಭಾರತ ಅಹಿಂಸಾ ಮಾರ್ಗದ ಮೂಲಕ ರಕ್ತಪಾತ ಇಲ್ಲದೆ ಸ್ವಾತಂತ್ರ್ಯ ಪಡೆದಿದೆ ಎನ್ನುವುದು ಒಟ್ಟಾರೆ ಸ್ವಾತಂತ್ರ್ಯ ಸಂಗ್ರಾಮದ ದೃಷ್ಟಿಯಿಂದ ಸಮರ್ಥನೀಯವೆನಿಸಿದರೂ, ಬ್ರಿಟೀಷರ ಕೋವಿಗಳು ಸಾವಿರಾರು ಭಾರತೀಯರ ರಕ್ತ ಹರಿಸಿಯೇ ತನ್ನ ಆಳ್ವಿಕೆಯನ್ನು ಕೊನೆಗೊಳಿಸಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. 20ನೆಯ ಶತಮಾನದ ನಂತರದ ರಕ್ತಸಿಕ್ತ ಇತಿಹಾಸದಲ್ಲಿ ಎರಡು ಪ್ರಮುಖ ಘಟನೆಗಳನ್ನು ನೆನೆಯುವುದಾದರೆ ಮೊದಲನೆಯದಾಗಿ ಜಲಿಯನ್‌ವಾಲಾ ಬಾಗ್ ನೆನಪಾದರೆ, ಮತ್ತೊಂದು ಕರ್ನಾಟಕದ ವಿದುರಾಶ್ವತ್ಥ ನೆನಪಾಗುತ್ತದೆ. ಸಹಜವಾಗಿಯೇ ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್‌ವಾಲಾಬಾಗ್ ಎಂದೇ ಕರೆಯಲಾಗುತ್ತದೆ.
ವಿದುರಾಶ್ವತ್ಥದ ಐತಿಹ್ಯ ಮತ್ತು ಇತಿಹಾಸ
ಅವಿಭಜಿತ ಕೋಲಾರ ಜಿಲ್ಲೆಯ, ಈಗಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪ ಪಿನಾಕಿನಿ ನದಿಯ ತೀರದಲ್ಲಿರುವ ಒಂದು ಪುಟ್ಟ ಗ್ರಾಮ ವಿದುರಾಶ್ವತ್ಥ. ಪೌರಾಣಿಕ ಐತಿಹ್ಯಗಳಿಂದ ಇತಿಹಾಸ ಪ್ರಸಿದ್ಧವಾಗಿರುವ ಈ ಗ್ರಾಮ ಆಸ್ತಿಕರಿಗೆ ಒಂದು ಪುಣ್ಯಕ್ಷೇತ್ರ ಮತ್ತು ಯಾತ್ರಾಸ್ಥಳವೂ ಹೌದು. ಇಲ್ಲಿನ ಅಶ್ವತ್ಥಮರದ ಪಾದತಳದಲ್ಲಿ ನಾಗರಪ್ರತಿಷ್ಠೆ ಮಾಡುವ ಮೂಲಕ ತಮ್ಮ ಪಾಪಗಳನ್ನು ನಿವೇದಿಸಿಕೊಂಡು ಬದುಕಿನ ಸಂಕಷ್ಟಗಳಿಂದ ಪರಿಹಾರ ಕೋರುವ ಸಾವಿರಾರು ಭಕ್ತಾದಿಗಳು ಈ ಕ್ಷೇತ್ರಕ್ಕೆ ವರ್ಷವಿಡೀ ಬರುತ್ತಲೇ ಇರುತ್ತಾರೆ. ಮಹಾಭಾರತ ಕಾಲದ ಐತಿಹ್ಯ ಇರುವ ಈ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮಾಡಿದರೆ ತಮ್ಮ ಕಷ್ಟಗಳು ಪರಿಹಾರವಾಗುತ್ತವೆ ಎಂಬ ಬಲವಾದ ನಂಬಿಕೆಯೇ ಈ ಕ್ಷೇತ್ರವನ್ನು ಕರ್ನಾಟಕದ ಯಾತ್ರಾಸ್ಥಳವನ್ನಾಗಿ ಮಾಡಿದೆ. ಪ್ರತಿವರ್ಷ ಏಪ್ರಿಲ್ ಮಾಹೆಯಲ್ಲಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಪಿನಾಕಿನಿ ನದಿಯ ತೀರದಲ್ಲಿರುವ ಈ ಗ್ರಾಮ ಆಸ್ತಿಕ ಹಿಂದೂಗಳಿಗೆ ಒಂದು ಪವಿತ್ರ ಕ್ಷೇತ್ರವೂ ಆಗಿದೆ. ಹಾಗೆಯೇ ಭಾರತದ ಬಹುಸಂಸ್ಕೃತಿಯ ಒಂದು ಪ್ರತೀಕವಾಗಿಯೂ ನಡೆದುಬಂದಿರುವ ವಿದುರಾಶ್ವತ್ಥಕ್ಕೆ ಅನ್ಯ ಧರ್ಮದ ಜನರೂ ಭೇಟಿ ನೀಡುವುದನ್ನು ಕಾಣಬಹುದು.
ಮತಶ್ರದ್ಧೆ, ಜನಸಾಮಾನ್ಯರ ನಂಬಿಕೆ ಮತ್ತು ಪೌರಾಣಿಕ ಐತಿಹ್ಯಗಳ ಹೊರತಾಗಿಯೂ ವಿದುರಾಶ್ವತ್ಥ ಚಾರಿತ್ರಿಕವಾಗಿ ಭಾರತದ ಭೂಪಟದಲ್ಲಿ ಒಂದು ಶಾಶ್ವತ ಸ್ಥಾನ ಗಳಿಸಿರುವುದೂ ಹೌದು. ಭಕ್ತಿ, ನಂಬಿಕೆ, ಶ್ರದ್ಧೆ ಮತ್ತು ಧಾರ್ಮಿಕ ಆಚರಣೆಗಳು ನಿರಂತರವಾಗಿ ಹರಿಯುತ್ತಿದ್ದ ಪಿನಾಕಿನಿ ನದಿ ತೀರದ ಈ ಪುಟ್ಟ ಗ್ರಾಮದಲ್ಲಿ ಬ್ರಿಟೀಷ್ ವಸಾಹತುಶಾಹಿಯು ರಕ್ತದ ಹೊಳೆ ಹರಿಸಿದ ರಕ್ತಸಿಕ್ತ ಚರಿತ್ರೆ ಇಲ್ಲಿ ದಾಖಲಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಈಸೂರು, ಶಿವಪುರ ದಾಖಲಾಗಿರುವಂತೆಯೇ ವಿದುರಾಶ್ವತ್ಥವೂ ಸಹ ಧ್ವಜ ಸತ್ಯಾಗ್ರಹ ಕೇಂದ್ರವಾಗಿ, ಬ್ರಿಟೀಷರ ಕ್ರೌರ್ಯಕ್ಕೆ ಬಲಿಯಾದ ಹುತಾತ್ಮರ ಕತೆಯನ್ನು ಸಾರುತ್ತದೆ. 1938ರ ಏಪ್ರಿಲ್ 25ರಂದು ಇದೇ ಸ್ಥಳದಲ್ಲೇ ಬ್ರಿಟೀಷರ ಗುಂಡೇಟಿಗೆ 32 ಸ್ವಾತಂತ್ರ್ಯ ಸಂಗ್ರಾಮಿಗಳು ಹುತಾತ್ಮರಾಗಿದ್ದರು. ಈ ಹುತಾತ್ಮರನ್ನು ಸಾರ್ವಕಾಲಿಕವಾಗಿ ಸ್ಮರಿಸಲೆಂದೇ ಇಲ್ಲೊಂದು ಸ್ಮಾರಕವನ್ನೂ ನಿರ್ಮಿಸಲಾಗಿದ್ದು, ಸ್ವಾತಂತ್ರ್ಯ ಸಂಗ್ರಾಮದ 200 ವರ್ಷಗಳ ಇತಿಹಾಸವನ್ನು ದಾಖಲಿಸುವ ಒಂದು ಚಿತ್ರ ಗ್ಯಾಲರಿಯನ್ನೂ ನಿರ್ಮಿಸಲಾಗಿದೆ.
1938ರಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಶಿವಪುರದಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನವು ಕರ್ನಾಟಕದ ಸ್ವಾತಂತ್ರ್ಯ ಚಳುವಳಿಗೆ ಚಾಲನೆ ನೀಡಿದ ಒಂದು ಘಟನೆ. ಧ್ವಜಾರೋಹಣೆಯ ಮೂಲಕ ಭಾರತದ ಸಾರ್ವಭೌಮತ್ವವನ್ನು ಸಾರುವ ನಿಟ್ಟಿನಲ್ಲಿ ಸಂಸ್ಥಾನದ ವಿವಿಧೆಡೆಗಳಲ್ಲಿ ಧ್ವಜ ಸತ್ಯಾಗ್ರಹಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಶಿವಪುರದಲ್ಲಿ ನಡೆಯಬೇಕಿದ್ದ ಮೂರು ದಿನದ ಅಧಿವೇಶನಕ್ಕೆ ಮೈಸೂರು ಸರ್ಕಾರ ಅಡ್ಡಿಪಡಿಸಿದ ಕಾರಣ ಈ ಸಂದರ್ಭದಲ್ಲಿ ಶಿವಪುರದಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಸತ್ಯಾಗ್ರಹಿಗಳ ಮೇಲೆ ಗುಂಡಿನ ದಾಳಿ ನಡೆಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆಜ್ಞಾಪಿಸಿದ್ದರೂ, ಶಾಂತಿಯುತವಾಗಿ ನಡೆಯುತ್ತಿರುವ ಸಭೆಯ ಮೇಲೆ ಗುಂಡು ಹಾರಿಸಲು ನಿರಾಕರಿಸಿದ ಜಿಲ್ಲಾಧಿಕಾರಿ ಇನಾಯತ್ ಉಲ್ಲಾ ಮೇಕ್ರಿ ವರ್ಗಾವಣೆಯ ಶಿಕ್ಷೆ ಎದುರಿಸಬೇಕಾಯಿತು. ಮೂರು ದಿನವೂ ಸಭೆ ನಡೆದು ನಂತರ ಹಲವಾರು ನಾಯಕರು ಬಂಧನಕ್ಕೊಳಗಾಗಿದ್ದರು.
ಇದೇ ಸ್ಫೂರ್ತಿಯೊಂದಿಗೆ ವಿದುರಾಶ್ವತ್ಥದಲ್ಲೂ ಧ್ವಜ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ 1938ರ ಏಪ್ರಿಲ್ 18ರಂದು ದೇಶಭಕ್ತರ ದಿನಾಚರಣೆಯನ್ನು ಆಚರಿಸಲು ಸ್ಥಳೀಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಏಪ್ರಿಲ್ 14 ರಿಂದ 29ರವರೆಗೆ ಇಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲೇ ಈ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಲಾಯಿತು. ಏಕೆಂದರೆ ಈ ಜಾತ್ರೆಯಲ್ಲಿ ದನದ ಜಾತ್ರೆಯೂ ನಡೆಯುವುದರಿಂದ ಲಕ್ಷಾಂತರ ಜನರು ಸೇರುತ್ತಿದ್ದರು. ಏಪ್ರಿಲ್ 18ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆಗೇ ಜಿಲ್ಲಾಡಳಿತವು ಇಡೀ ಪ್ರದೇಶದಲ್ಲಿ 15 ದಿನಗಳ ಕಾಲ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನು ಹೇರಿತ್ತು. ಆದರೆ ಇದಾವುದನ್ನೂ ಲೆಕ್ಕಿಸದ ಸ್ಥಳೀಯ ಕಾಂಗ್ರೆಸ್ ನಾಯಕರು ಧ್ವಜಸತ್ಯಾಗ್ರಹದ ಅಧ್ಯಕ್ಷರಾದ ಎನ್ ಸಿ ನಾಗಯ್ಯರೆಡ್ಡಿ ನೇತೃತ್ವದಲ್ಲಿ ಶಾಂತಿಯುತ ಸಭೆ ನಡೆಸಿದ್ದರು. ಏಪ್ರಿಲ್ 22ರಂದು ನಾಗಯ್ಯರೆಡ್ಡಿ ಮುಂದಾಳತ್ವದಲ್ಲಿ ಸತ್ಯಾಗ್ರಹಿಗಳು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಆಗಮಿಸಿ ಅಲ್ಲಿ ಕರಪತ್ರಗಳನ್ನು ಹಂಚುವುದರ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ದಿಟ್ಟ ಹೋರಾಟಕ್ಕೆ ಚಾಲನೆ ನೀಡಿದ್ದರು. ಈ ಘಟನೆಯಲ್ಲಿ ನಾಗಯ್ಯರೆಡ್ಡಿ ಅವರೊಂದಿಗೆ ಶ್ರೀಪಾಲಯ್ಯ, ನಾರಾಯಣಪ್ಪ, ಹೆಚ್ ಎಲ್ ವೆಂಕಟ್ರಾಮರಾವ್ ಮುಂತಾದ ಹಲವು ನಾಯಕರನ್ನು ಬಂಧಿಸಲಾಯಿತು. ಕ್ಷಮೆ ಯಾಚಿಸಲು ನಿರಾಕರಿಸಿದ ಈ ಹೋರಾಟಗಾರರಿಗೆ ಬಿಡುಗಡೆಯೂ ದೊರೆಯಲಿಲ್ಲ.
ಏಪ್ರಿಲ್ 23ರಂದು ಗೌರಿಬಿದನೂರಿನಿಂದ ರಾಮಯ್ಯ ಶೆಟ್ಟಿ ಮತ್ತು ಜ್ವಾಲನಯ್ಯವರ ಮುಂದಾಳತ್ವದಲ್ಲಿ ಮುನ್ನೂರಕ್ಕೂ ಹೆಚ್ಚು ಜನರು ವಿದುರಾಶ್ವತ್ಥಕ್ಕೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಈ ಇಬ್ಬರೂ ನಾಯಕರನ್ನು ಬಂಧಿಸಲಾಯಿತು. ಈ ಬಂಧನಗಳ ಸುದ್ದಿ ವ್ಯಾಪಿಸುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಶಭಕ್ತಿಯ ಅಲೆ ಪ್ರವಹಿಸಲಾರಂಭಿಸಿತ್ತು. ಕೋಲಾರ ಜಿಲ್ಲೆಯ ಹಲವು ಗ್ರಾಮಗಳಿಂದ ಜನರು ತಂಡೋಪತಂಡವಾಗಿ ಧ್ವಜ ಸತ್ಯಾಗ್ರಹ ನಡೆಯಲಿದ್ದ ವಿದುರಾಶ್ವತ್ಥದ ಕಡೆ ಹೆಜ್ಜೆ ಹಾಕತೊಡಗಿದರು. ನೆರೆಯ ಆಂಧ್ರ ಪ್ರದೇಶದ ಹಿಂದೂಪುರದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರು ಕಲ್ಲೂರು ಸುಬ್ಬರಾವ್ ಮುಂದಾಳತ್ವದಲ್ಲಿ ಇಲ್ಲಿಗೆ ಆಗಮಿಸಿದರು. ಇಲ್ಲಿ ನೆರೆದ ಸಾವಿರಾರು ಕಾರ್ಯಕರ್ತರು ತಾವು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಧ್ವಜಸತ್ಯಾಗ್ರಹ ನಡೆಸುವುದಾಗಿ ಪಣತೊಟ್ಟರು. ಏಪ್ರಿಲ್ 25ರಂದು ಗೌರಿಬಿದನೂರು ಮತ್ತು ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಸಾವಿರ ಸಾವಿರ ಸಂಖ್ಯೆಯಲ್ಲಿ ವಿದುರಾಶ್ವತ್ಥದೆಡೆಗೆ ಹೆಜ್ಜೆ ಹಾಕಲಾರಂಭಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಂದು ಧ್ವಜಸತ್ಯಾಗ್ರಹದಲ್ಲಿ ಭಾಗವಹಿಸಲು 25 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು ಎನ್ನಲಾಗುತ್ತದೆ.
ಈ ಸಂದರ್ಭದಲ್ಲಿ ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತಿದ್ದ, ಅಲ್ಲಿ ನೆರೆದಿದ್ದ ಜನರ ಮೇಲೆ ಮ್ಯಾಜಿಸ್ಟ್ರೇಟರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ಚದುರಲಾರಂಭಿಸಿದ ಜನರು ಕಲ್ಲು ತೂರಾಟದಲ್ಲಿ ತೊಡಗಿದ್ದರು. ಈ ಗಲಭೆಯ ನಡುವೆಯೇ ಅಲ್ಲಿ ನೆರೆದಿದ್ದ 80ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ರೈಫಲ್ ಪಡೆಗೆ ಗುಂಡುಹಾರಿಸಲು ಆಜ್ಞಾಪಿಸಲಾಯಿತು. ಮೂರು ಬಾರಿ ನಡೆದ ಈ ಗುಂಡಿನ ದಾಳಿಯಲ್ಲಿ ಪೊಲೀಸರು 96 ಸುತ್ತು ಗುಂಡುಗಳನ್ನು ಹಾರಿಸಿದ್ದರು. ಈ ಗುಂಡಿನ ದಾಳಿಗೆ ಸ್ಥಳದಲ್ಲೇ 32 ಜನರು ಹುತಾತ್ಮರಾದರು. 48 ಮಂದಿ ಗಾಯಗೊಂಡಿದ್ದರು. ಸರ್ಕಾರದ ವರದಿಯ ಪ್ರಕಾರ 15 ಜನರು ಮೃತರಾಗಿರುವುದಾಗಿ ದಾಖಲಾಗಿದ್ದರೂ, ಕೆಲವು ಪತ್ರಿಕಾ ವರದಿಗಳು ಮತ್ತು ಬಿಬಿಸಿ ವರದಿಯ ಪ್ರಕಾರ ಕನಿಷ್ಟ 32 ಜನರು ಹುತಾತ್ಮರಾಗಿದ್ದರು. ಈ ಮಾರಣಹೋಮದಿಂದ ಪುಣ್ಯಕ್ಷೇತ್ರವಾಗಿದ್ದ ವಿದುರಾಶ್ವತ್ಥ ಭೀಕರ ಮಸಣವಾಯಿತು. ಪಿನಾಕಿನಿ ನದಿಯ ನೀರಿನೊಂದಿಗೇ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಹೊಳೆಯೂ ಹರಿದಿತ್ತು. ಪಿನಾಕಿನಿ ನದಿಯು ಸ್ವಾತಂತ್ರ್ಯ ಸಂಗ್ರಾಮಿಗಳ ರಕ್ತದ ಮಡುವಿಗೆ ಸಾಕ್ಷಿಯಾಯಿತು. ಈ ಘಟನೆಯಲ್ಲಿ ಭಾಗಿಯಾಗಿದ್ದ ಪ್ರತ್ಯಕ್ಷದರ್ಶಿಗಳಾಗಿ ಮೂವರು ಮಹನೀಯರು, ಇತ್ತೀಚಿನವರೆಗೂ ಜೀವಂತವಾಗಿದ್ದರು.
ಸ್ಮಾರಕ ಮತ್ತು ಚಾರಿತ್ರಿಕ ಸ್ಮರಣೆ
ಕರ್ನಾಟಕದ ಜಲಿಯನ್‌ವಾಲಾ ಬಾಗ್ ಎಂದೇ ಹೆಸರಾದ ಈ ಚಾರಿತ್ರಿಕ ಘಟನೆಯು 1973ರಲ್ಲಿ ಸ್ಥಾಪಿಸಿದ ಸ್ಮಾರಕ ಶಿಲೆ ಮತ್ತು 2004ರಲ್ಲಿ ಸ್ಥಾಪಿತವಾದ ವೀರಸೌಧದ ಮೂಲಕ ಇಂದಿಗೂ ಅಂದಿನ ಕರಾಳ ಚರಿತ್ರೆಯನ್ನು ನೆನಪಿಸುತ್ತಿವೆ. ಈ ಚರಿತ್ರಾರ್ಹ ಘಟನೆಯನ್ನು ಸಾರ್ವಕಾಲಿಕವಾಗಿ ಸ್ಮರಿಸಲು ನೆರವಾಗುವಂತಹ ಒಂದು ಚಿತ್ರ ಗ್ಯಾಲರಿಯನ್ನು ರೂಪಿಸಲಾಗಿದೆ. ಚರಕದ ಆಕಾರದಲ್ಲಿರುವ ಒಂದು ಸುಂದರ ವಿನ್ಯಾಸದ ಕಟ್ಟಡದಲ್ಲಿ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನೊಳಗೊಂಡ ಗ್ರಂಥಾಲಯವನ್ನೂ ನಿರ್ಮಿಸಲಾಗಿದೆ. ಸ್ಥಳೀಯ ಶಾಸಕರಾದ ಶಿವಶಂಕರ ರೆಡ್ಡಿ ಮತ್ತು ಗೌರಿಬಿದನೂರಿನ ನಿವೃತ್ತ ಪ್ರಾಧ್ಯಾಪಕ, ಲೇಖಕ ಬಿ ಗಂಗಾಧರಮೂರ್ತಿ ಮತ್ತು ಕೆಲವು ಸಮಾನಾಸಕ್ತ ಗೆಳೆಯರ ಪರಿಶ್ರಮದೊಂದಿಗೆ ಈ ಗ್ಯಾಲರಿ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. 1757ರ ಪ್ಲಾಸಿ ಕದನದಿಂದ 1961ರ ಗೋವಾ ವಿಮೋಚನೆಯವರೆಗೆ ಭಾರತದ ವಸಾಹತುವಿರೋಧಿ ಹೋರಾಟದ ವಿವಿಧ ಮಗ್ಗುಲುಗಳನ್ನು ಬಿಂಬಿಸುವ 104 ವರ್ಣಚಿತ್ರ ಫಲಕಗಳನ್ನು ಈ ಗ್ಯಾಲರಿಯಲ್ಲಿ ಕಾಲಾನುಕ್ರಮವಾಗಿ ಜೋಡಿಸಲಾಗಿದೆ.
ಈ ಅವಧಿಯಲ್ಲಿ ನಡೆದ ಹೋರಾಟಗಳು, ದಂಗೆಗಳು, ಆಂದೋಲನಗಳು, ಯುದ್ಧಗಳು ಎಲ್ಲವನ್ನೂ ಈ ವರ್ಣಚಿತ್ರಗಳಲ್ಲಿ ಸಂಕ್ಷಿಪ್ತ ವಿವರಗಳೊಂದಿಗೆ ಬಿಂಬಿಸಲಾಗಿದೆ. ಕಿತ್ತೂರು ರಾಣಿ, ಝಾನ್ಸಿ ರಾಣಿ, 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಟಿಪ್ಪು, ಸಂಗೊಳ್ಳಿ ರಾಯಣ್ಣ, ಬಿರ್ಸಾ ಮುಂಡಾ ಹೀಗೆ ಹಲವು ಮಜಲುಗಳ ಬ್ರಿಟೀಷ್ ವಿರೋಧಿ ಹೋರಾಟಗಾರರನ್ನು ಬಿಂಬಿಸಲಾಗಿದ್ದು ದಾಖಲಿತ ಅಧಿಕೃತ ಇತಿಹಾಸದಲ್ಲಿರುವ ಚಾರಿತ್ರಿಕ ಸಂಗತಿಗಳನ್ನು ಇಲ್ಲಿ ಬಿತ್ತರಿಸಲಾಗಿದೆ. ಸಹಜವಾಗಿಯೇ 20ನೆಯ ಶತಮಾನದಲ್ಲಿ ರೂಪುಗೊಂಡ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಣಬಹುದಾದ ವೈವಿಧ್ಯಮಯ ವಿಚಾರಧಾರೆಗಳು, ಹೋರಾಟದ ಧೋರಣೆಗಳು, ಮಾರ್ಗಗಳು ಇಲ್ಲಿ ಬಿಂಬಿತವಾಗಿವೆ. ಸೈದ್ಧಾಂತಿಕ, ತಾತ್ವಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಐಕಮತ್ಯದೊಂದಿಗೆ, ಐಕ್ಯತೆಯಿಂದ ಬ್ರಿಟೀಷ್ ವಸಾಹತುಶಾಹಿಯ ಸಂಕೋಲೆಗಳನ್ನು ಕಿತ್ತು ಹಾಕಿದ ರಾಷ್ಟ್ರನಾಯಕರ ಸ್ಮರಣೆ ಇಲ್ಲಿ ವಸ್ತುನಿಷ್ಠತೆಯಿಂದ ದಾಖಲಾಗಿದೆ. ಆ ಸಂದರ್ಭದಲ್ಲೇ ಕಂಡುಬಂದಿದ್ದ ಎಡಪಂಥೀಯ, ಬಲಪಂಥೀಯ, ತೀವ್ರಗಾಮಿ, ರಾಷ್ಟ್ರೀಯವಾದಿ ಹೋರಾಟಗಳ ವಿಭಿನ್ನ ಮಜಲುಗಳನ್ನೂ ಪರಿಚಯಿಸಲಾಗಿದೆ.
1905ರಲ್ಲಿ ಕ್ರಾಂತಿಕಾರಿಗಳ ಜೊತೆಗಿದ್ದ ಸಾವರ್ಕರ್ ಅವರ ಚಿತ್ರ ಇರುವಂತೆಯೇ, ಗಾಂಧಿ ಹತ್ಯೆಯ ನಂತರ ನಡೆದ ಬೆಳವಣಿಗೆಗಳಲ್ಲೂ ಅವರ ಚಿತ್ರ ಇಲ್ಲಿ ಕಾಣುತ್ತದೆ. ಹಾಗೆಯೇ ಭಗತ್ ಸಿಂಗ್ ಮುಂತಾದವರ ಎಡಪಂಥೀಯ ಕ್ರಾಂತಿಕಾರಿ ಹೆಜ್ಜೆಗಳ ನಡುವೆಯೇ ಉಗಮಿಸಿದ್ದ ಹಿಂದೂ ಮಹಾಸಭಾ ಮುಂತಾದ ಬಲಪಂಥೀಯ ಸಂಘಟನೆಗಳ ಪ್ರಸ್ತಾಪವನ್ನೂ ಕಾಣಬಹುದು. ಭಾರತದ ಶೋಷಿತ ಜನಸಮುದಾಯಗಳಿಗೆ ಬೆಳಕಿನ ಕಿಂಡಿ ತೋರಿ ಒಂದು ಸಮಸಮಾಜ ನಿರ್ಮಾಣಕ್ಕೆ ಪೂರಕವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರೂ ಇಲ್ಲಿ ಜ್ವಲಿಸುತ್ತಾರೆ. ಗಾಂಧಿ ಮಾರ್ಗವನ್ನು ಒಪ್ಪುವ ಮತ್ತು ಒಪ್ಪದಿರುವ ಎಲ್ಲ ವಿಚಾರಧಾರೆಗಳನ್ನು ಚಾರಿತ್ರಿಕ ಮಾಹಿತಿಯೊಂದಿಗೆ ಸಚಿತ್ರವಾಗಿ ಈ ಗ್ಯಾಲರಿಯಲ್ಲಿ ಬಿಂಬಿಸಲಾಗಿದೆ. 200 ವರ್ಷಗಳ ಸುದೀರ್ಘ ಇತಿಹಾಸವನ್ನು ಮತ್ತು ಈ ಚರಿತ್ರೆಯ ಹಾದಿಯಲ್ಲಿ ಆಗಿಹೋದ ನೂರಾರು ಹುತಾತ್ಮರನ್ನು ಮತ್ತೆ ಮತ್ತೆ ನೆನಪಿಸುವ ರೀತಿಯಲ್ಲಿ ಈ ಗ್ಯಾಲರಿಯನ್ನು ರೂಪಿಸಲಾಗಿದೆ. ದೇಶದ ಹಲವಾರು ರಾಜಕೀಯ ನಾಯಕರು, ಪಕ್ಷಾತೀತವಾಗಿ ಇಲ್ಲಿಗೆ ಭೇಟಿ ನೀಡಿ, ಈ ಗ್ಯಾಲರಿಯನ್ನು ಪ್ರಶಂಸಿಸಿ ದಾಖಲಿಸಿದ್ದಾರೆ.
ಆದರೆ ಇತ್ತೀಚೆಗೆ ಕೆಲವು ಬಲಪಂಥೀಯ ಗುಂಪುಗಳು ಗ್ಯಾಲರಿಯಲ್ಲಿರುವ ಕೆಲವು ವರ್ಣಚಿತ್ರಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದಾಗಿ ತಿಳಿದುಬಂದಿದೆ. ಮಹಾತ್ಮ ಗಾಂಧಿಗೆ ಹೆಚ್ಚು ಪ್ರಾಶಸ್ತ್ಯ ನೀಡಿರುವುದು, ಸಾವರ್ಕರ್‌ಗೆ ಅಪಮಾನವಾಗುವಂತೆ ಚಿತ್ರಿಸಿರುವುದು, ಪ್ರತಿಯೊಂದು ಫಲಕದಲ್ಲೂ ಮುಸ್ಲಿಂ ಸಂಗ್ರಾಮಿಗಳನ್ನು ಬಿಂಬಿಸಿರುವುದು, ಟಿಪ್ಪು ಸುಲ್ತಾನ್‌ನನ್ನು ಬಿತ್ತರಿಸಿರುವುದು, ಹಿಂದೂ ರಾಷ್ಟ್ರೀಯವಾದಿಗಳನ್ನು ಬಲಪಂಥೀಯರು ಎಂದು ಗುರುತಿಸಿರುವುದು ಇವೇ ಮುಂತಾದ ಕೆಲವು ಆಕ್ಷೇಪಗಳು ವ್ಯಕ್ತವಾಗಿದ್ದು, ಕೆಲವು ಗುಂಪುಗಳಿಂದ ಗ್ಯಾಲರಿಗೆ ಹಾನಿ ಉಂಟುಮಾಡುವ ಬೆದರಿಕೆಯೂ ಕೇಳಿಬಂದಿದೆ. ಇತಿಹಾಸ ಎಂದಿಗೂ ಸಾರ್ವತ್ರಿಕ ಸಮ್ಮತಿ ಪಡೆಯುವುದಿಲ್ಲ. ನೋಡುಗರ, ಓದುಗರ ದೃಷ್ಟಿಯೇ ಚರಿತ್ರೆಯ ಸರಿ ತಪ್ಪುಗಳನ್ನು ನಿಷ್ಕರ್ಷೆ ಮಾಡುವುದನ್ನು ಕಾಣುತ್ತಲೇ ಬಂದಿದ್ದೇವೆ. ಆಕ್ಷೇಪಗಳು, ಆರೋಪ ಪ್ರತ್ಯಾರೋಪಗಳ ನಡುವೆಯೇ ಚರಿತ್ರೆಯನ್ನು ನೋಡುತ್ತಾ, ಹೊಸ ಚರಿತ್ರೆಯನ್ನು ಕಟ್ಟುವುದು ನಾಗರಿಕ ಮಾನವ ಸಮಾಜದ ಆದ್ಯತೆಯಾಗಬೇಕು.
ಕೆಲವೇ ವ್ಯಕ್ತಿಗಳ, ಹಲವು ವರ್ಷಗಳ ಪರಿಶ್ರಮದಿಂದ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಿರ್ಮಿಸಲಾಗಿರುವ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಮತ್ತು ನಾಗರಿಕರ ಜವಾಬ್ದಾರಿಯೂ ಹೌದು. ವಿದುರಾಶ್ವತ್ಥ ಬ್ರಿಟೀಷ್ ವಸಾಹತು ಕಾಲದ ರಕ್ತಸಿಕ್ತ ಇತಿಹಾಸವನ್ನು ಸಾರಿ ಸಾರಿ ಹೇಳುತ್ತದೆ. ಸ್ಥಳೀಯರು ಈ ಚರಿತ್ರೆಯ ಪುಟಗಳೊಡನೆಯೇ ಇಲ್ಲಿನ ಸ್ಮಾರಕವನ್ನು ಕಾಪಾಡಿಕೊಂಡು ಬಂದಿದ್ದಾರೆ. 27 ವರ್ಷಗಳ ಕಾಲ ಬತ್ತಿಹೋಗಿದ್ದು ಮರಳುಗಣಿಗಾರಿಕೆಯ ಮಾಫಿಯಾಗಳಿಗೆ ಚಿನ್ನದ ಗಣಿಯಂತಾಗಿದ್ದ ಪಿನಾಕಿನಿ ನದಿ ಈ ವರ್ಷ ತುಂಬಿ ಹರಿಯುತ್ತಿದೆ. ಈ ನದಿಯ ಝುಳುಝಳು ನಾದದೊಂದಿಗೆ , ಅಶ್ವತ್ಥ ವೃಕ್ಷದಲ್ಲಿ ನಲಿಯುವ ಹಕ್ಕಿಗಳ ಕಲರವದೊಂದಿಗೇ, ಕರ್ನಾಟಕದ ಮತ್ತು ನೆರೆ ರಾಜ್ಯಗಳ ಶ್ರದ್ಧಾಭಕ್ತಿಗಳ ಪ್ರಾರ್ಥನೆಯೊಂದಿಗೇ, ಈ ಚಿತ್ರ ಗ್ಯಾಲರಿಯನ್ನು ಜೀವಂತವಾಗಿರಿಸಿ, ಸ್ವಾತಂತ್ರ್ಯ ಸಂಗ್ರಾಮದ ಹೆಜ್ಜೆ ಗುರುತುಗಳನ್ನು ಜೀವಂತಿಕೆಯಿಂದಿರಿಸುವ ಹೊಣೆ ನಮ್ಮದಾಗಿದೆ.
ಕೆಲವೇ ಬಲಪಂಥೀಯ ಸಂಘಟನೆಗಳ ಮತಾಂಧತೆಗೆ ಈ ಗ್ಯಾಲರಿ ಬಲಿಯಾಗದಂತೆ ಜಾಗ್ರತೆ ವಹಿಸುವ ಜವಾಬ್ದಾರಿ ಸರ್ಕಾರ ಮತ್ತು ಜಿಲ್ಲಾಡಳಿತದ ಮೇಲಿದೆ. ಬ್ರಿಟೀಷರು ವಿದುರಾಶ್ವತ್ಥವನ್ನು ಕರ್ನಾಟಕದ ಜಲಿಯನ್‌ವಾಲಾಬಾಗ್ ಮಾಡಿ ಕರಾಳ ಛಾಯೆಯನ್ನು ಹರಡಿ ಹೋಗಿದ್ದಾರೆ. ಭಾರತದ 75ನೆಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವಿದುರಾಶ್ವತ್ಥದ ಸ್ವಾತಂತ್ರ್ಯ ಸಂಗ್ರಾಮದ ಗ್ಯಾಲರಿ ಮತ್ತೊಂದು ಕಂಬಾಲಪಲ್ಲಿ ಆಗುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



