ದಿನದ ಸುದ್ದಿ
ಬಹಿರಂಗ ಪ್ರಚಾರ ; ಸೋಮವಾರ ಅಂತ್ಯ
ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ನಾಲ್ಕು ದಿನ ಬಾಕಿಯಿದ್ದು ಪ್ರಚಾರಕಾರ್ಯ ಪರಾಕಾಷ್ಠೆ ತಲುಪಿದೆ.
ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ. ನಂತರ ಮನೆ-ಮನೆಗೆ ತೆರಳಿ ಮತ ಯಾಚಿಸಲು ಅವಕಾಶವಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿವಿಧ ಪಕ್ಷಗಳ ತಾರಾ ಪ್ರಚಾರಕರು ರಾಜ್ಯದ ಉದ್ದಗಲಕ್ಕೂ ಬಿರುಸಿನ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಳ್ಳಾರಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.
ಸಂಜೆ ತುಮಕೂರಿನಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗದಗ – ಬೆಟಗೇರಿ ಅವಳಿ ನಗರದಲ್ಲಿ ಗದಗ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಮೈಸೂರಿನ ವರುಣ ಕ್ಷೇತ್ರದ ಅಭ್ಯರ್ಥಿ ಹಾಗೂ ಟಿ ನರಸಿಪುರ ಕ್ಷೇತ್ರದ ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿದರು.
ಮತ್ತೊಬ್ಬ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ರೋಡ್ ಷೋ ನಡೆಸಿ ಪಕ್ಷದ ಪರವಾಗಿ ಮತಯಾಚಿದರು. ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರುಗಳು ಕಳೆದ ಕೆಲ ದಿನಗಳಿಂದ ರಾಜ್ಯದ ಉದ್ದಗಲಕ್ಕೂ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿವಾಜಿನಗರದಲ್ಲಿ ನಾಳೆ ರ್‍ಯಾಲಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೆಡಿಎಸ್ ಪಕ್ಷದ ವತಿಯಿಂದ ಪಕ್ಷದ ಹಿರಿಯ ಧುರೀಣ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗಾರರ ಜೊತೆ ಮಾತನಾಡಿ, ನಾಳೆ ಮತ್ತು ನಾಡಿದ್ದು ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಿದರು.
ಭಾನುವಾರ ನೀಟ್ ಪರೀಕ್ಷೆ ಇರುವುದರಿಂದ ಪ್ರಧಾನಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಭಾನುವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರೇ ತಲುಪಿಸುತ್ತಾರೆ. ಈ ಕುರಿತಂತೆ ಪೊಲೀಸ್ ಮತ್ತು ಎಸ್‌ಪಿಜಿ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಇಂದು 10 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್‌ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ವರೆಗೆ ಸುಮಾರು 26 ಕಿಲೋಮೀಟರ್ ಹಾಗೂ ನಾಳೆ ಭಾನುವಾರ ಕೂಡ ರೋಡ್ ಶೋ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಒಂದೇ ದಿನ ರೋಡ್ ಶೋ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆಯಾದ ಕಾರಣ ಎರಡು ದಿನ ರೋಡ್ ಶೋ ನಡೆಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243