ದಿನದ ಸುದ್ದಿ
ಪಿ. ಚಿದಂಬರಂ ಐದು ದಿನಗಳ ವಶಕ್ಕೆ ಸಿಬಿಐ ಮನವಿ
ಸುದ್ದಿದಿನ,ದೆಹಲಿ: ನಿನ್ನೆ ಐಎನ್ಎಕ್ಸ್ ಹಗಣದ ಆರೋಪದಲ್ಲಿ ಬಂಧಿಸಲಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಇಂದು ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು. ಚಿದಂಬರಂ ಅವರನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಬಿಐ ಪರ ವಾದ ಮಂಡಿಸಿ, ಪಿ. ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಯಾವುದೇ ತನಿಖೆಗೂ ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ. ಮೌನ ಅವರ ಸಾಂವಿಧಾನಿಕ ಹಕ್ಕು, ಆದರೆ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ ಎಂದರು.
ಇತರ ಆರೋಪಿಗಳೊಂದಿಗೆ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ಅವರನ್ನು ಸಿಬಿಐ ವಶಕ್ಕೆ ನೀಡುವಂತೆ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಇಂದಿನ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿಯ ಸಿಬಿಐ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.