ದಿನದ ಸುದ್ದಿ
ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಮಧ್ಯಾಹ್ನದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.
ಭಯೋತ್ಪಾದಕ ದಾಳಿಯಂತಹ ಹೀನ ಕೃತ್ಯದಲ್ಲಿ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಈ ದಾಳಿಯಲ್ಲಿ ಮಡಿದ ಕನ್ನಡಿಗರ ಅಂತ್ಯಸಂಸ್ಕಾರವನ್ನು ಗೌರವದಿಂದ ನೆರವೇರಿಸಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯವೆಂದು ಭಾವಿಸಿ, ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243