ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿತ ; ಪರಿಶೀಲನೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವೋಸ್‌ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.
ಈ ಹಿಂದೆ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಅದೇ ರೀತಿ ಈ ಬಾರಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗವುದು ಎಂದು ಮುಖ್ಯಮಂತ್ರಿ ಹೇಳಿದರು.
ಸ್ವಿಟ್ಜರ್ಲೆಂಡ್‌ನ ದಾವೋಸ್‌ಗೆ ತೆರಳುತ್ತಿದ್ದು ನಾಳೆ ಮತ್ತು ನಾಡಿದ್ದು ನಡೆಯಲಿರುವ ’ವಿಶ್ವ ಆರ್ಥಿಕ ಶೃಂಗ’ ಸಭೆಯಲ್ಲಿ ಭಾಗಿಯಾಗುತ್ತಿರುವುದಾಗಿ ಅವರು ತಿಳಿಸಿದರು.
ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.
ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದುಬಂದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಬಂಡವಾಳ ಹರಿದು ಬಂದಿದೆ. ಮುಂದೆಯೂ ರಾಜ್ಯಕ್ಕೆ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದು ಬರಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243