ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version