ದಿನದ ಸುದ್ದಿ
KEA | ನಾಳೆ ಪಿಎಸ್‍ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯಲ್ಲಿ ಕಟ್ಟೆಚ್ಚರವಹಿಸಿ ಯಾವುದೇ ದೂರು, ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಅ.1 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 3 ರಂದು ಪಿಎಸ್‍ಐ ಹುದ್ದೆಗಳ ಆಯ್ಕೆಗೆ 2 ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ನಂತರ ಮಧ್ಯಾಹ್ನ 12-30 ರಿಂದ 2ಗಂಟೆವರೆಗೆ 2 ನೇ ಅವಧಿಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಲ್ಲದೇ ಬೆಳಿಗ್ಗೆ 9-45ರ ನಂತರ ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಆವರಣವನ್ನು ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.
ಮೊದಲನೆ ಪತ್ರಿಕೆಯ ನಂತರ ಎರಡನೇ ಪತ್ರಿಕೆ ಪ್ರಾರಂಭ ಅಗುವ ಮೊದಲು ಇರುವ ಮೂವತ್ತು ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಹೋಗಲು ಅನುಮತಿಸುವುದಿಲ್ಲ. ಅಭ್ಯರ್ಥಿಗಳು ತಮ್ಮೊಡನೆ ವೈದ್ಯಕೀಯ ಔಷಧಿ, ಮಾತ್ರೆಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕೆಂದು ಮಾಹಿತಿ ನೀಡಿದರು.
ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮೊದಲ ತಪಾಸಣೆಗೆ ಒಳಗಾಗಬೇಕು, ಅಭ್ಯರ್ಥಿಯು ಕೇಂದ್ರದ ಆವರಣವನ್ನು ಪ್ರವೇಶಿಸಿದ ತಕ್ಷಣ, ಪೆಂಡಾಲಿನಲ್ಲಿ ಅವರು ತರುವ ವಸ್ತುಗಳನ್ನು ಇರಿಸಿಕೊಳ್ಳಲು ಮತ್ತು ತಪಾಸಣೆಗೆ ಒಳಗಾಗಲು ವ್ಯವಸ್ಥೆ ಮಾಡಬೇಕು, ಯಾವುದೇ ಕಾರಣಕ್ಕೆ ಪರೀಕ್ಷಾರ್ಥಿಗಳು ಒಮ್ಮೆ ಪೆಂಡಾಲ್‍ನೊಳಗೆ ತಮ್ಮ ವಸ್ತುಗಳನ್ನು ನೀಡಿದ ನಂತರ ಮತ್ತೆ ಮರಳಿ ಪಡೆಯಲು ಅನುಮತಿಸಬಾರದು. ಅಲ್ಲದೇ ಪರೀಕ್ಷೆ ಮುಗಿದ ನಂತರವೇ ಅವರ ವಸ್ತುಗಳನ್ನು ಮರಳಿ ಪಡೆಯಬೇಕು ಎಂದು ಹೇಳಿದರು.
ಅದರಲ್ಲೂ ಮುಖ್ಯವಾಗಿ ವಿರಾಮದ ಸಮಯದಲ್ಲಿ ಅವರಿಗೆ ಪ್ರತಿ ಅಭ್ಯರ್ಥಿಗಳಿಗೆ ಬಾಳೆಹಣ್ಣು ಮತ್ತು ಬಿಸ್ಕತ್ತು ಪ್ಯಾಕನ್ನು ಸರಬರಾಜು ಮಾಡಬೇಕು. ಪರೀಕ್ಷೆಯ ಕರ್ತವ್ಯಕ್ಕಾಗಿ ಒಬ್ಬ ಸ್ಕ್ವಾಡ್, ಒಬ್ಬ ವೀಕ್ಷಕ ಮತ್ತು ಒಬ್ಬ ಕಸ್ಟೋಡಿಯನ್‍ರನ್ನು ಗೊತ್ತುಪಡಿಸಲಾಗಿದೆ. ವಿರಾಮದ ವೇಳೆಯಲ್ಲಿಯೂ ಕೊಠಡಿ ಮೇಲ್ವಿಚಾರಕರು ಕೊಠಡಿಯಲ್ಲಿರಬೇಕು, ಯಾವುದೇ ಕಾರಣಕ್ಕೂ ರಿಲೀವರ್ ಇಲ್ಲದೇ ಕೊಠಡಿ ಬಿಡುವಂತಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಪರೀಕ್ಷಾರ್ಥಿಯ ಕಿವಿಗಳನ್ನು ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಇ.ಎನ್.ಟಿ.ತಜ್ಞರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಲ್ಲದೇ ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದರು.
ಯಾವುದೇ ಅಭ್ಯರ್ಥಿ ಒಮ್ಮೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದ ನಂತರ ಮತ್ತೆ ಹೊರಗೆ ಹೋಗುವಂತಿಲ್ಲ. ಯಾವುದೇ ಎಲೆಕ್ಟ್ರಾನಿಕ್ ಡಿವೈಸ್ ಇರುವ ಬಗ್ಗೆ ಅಭ್ಯರ್ಥಿಯ ಮೇಲೆ ಅನುಮಾನ ಕಂಡು ಬಂದರೆ ಪೊಲೀಸ್ ಅಧಿಕಾರಿಗಳ ಸಹಾಯದೊಂದಿಗೆ ಚೆಕ್ ಮಾಡಬೇಕು. ಅಲ್ಲದೇ ಪರೀಕ್ಷಾ ಕೇಂದ್ರದ ಒಳಗೆ ನಕಲು ಮಾಡುತ್ತಿರುವ ಬಗ್ಗೆ ಅನುಮಾನ ಬಂದರೆ ತಕ್ಷಣವೇ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಕರೆ ತಂದು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತಪಾಸಣೆ ಮಾಡಬೇಕು ಎಂದು ಹೇಳಿದರು.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್‍ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಡಿಮೆ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ.
ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್‍ಕೋಡನ್ನು ಅನುಸರಿಸುವುದರ ಜೊತೆಗೆ, ಪರೀಕ್ಷಾ ಕೇಂದ್ರಕ್ಕೆ ಇಲ್ಲಿ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‍ಗಳು, ಪೆನ್‍ಡ್ರೈವ್‍ಗಳು, ಇಯರ್ ಫೋನ್‍ಗಳು, ಮೈಕ್ರೋಫೋನ್‍ಗಳು, ಬ್ಲೂಟೂಥ್ ಸಾಧನಗಳು, ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.
ಅನುಮತಿಸಲಾದ ಕೆಲ ವಸ್ತುಗಳ ವಿವರ;ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಅವುಗಳಲ್ಲಿ ಪಾಸ್‍ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗಿ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ಬ್ಯಾಂಕುಗಳು, ಅಂಚೆ ಕಚೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ.ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆ ಪತ್ರ ಅಥವಾ ಪಟ್ಟಾ ಪುಸ್ತಕ, ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ, ಪಿಂಚಣಿ ಮಂಜೂರಾತಿ ಆಗಿರುವ ಆದೇಶ, ಎನ್‍ಆರ್‍ಇಜಿಎಸ್‍ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ, ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ, ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


