ದಿನದ ಸುದ್ದಿ

ಹುಬ್ಬಳ್ಳಿ-ಧಾರವಾಡದಿಂದ, ಬೆಂಗಳೂರುವರೆಗಿನ ಜೋಡಿ ರೈಲು ಮಾರ್ಗ ನಾಲ್ಕೂವರೆ ವರ್ಷದಲ್ಲಿ ಪೂರ್ಣ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗ ನಿರ್ಮಾಣ, ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯದಿಂದ ಒಪ್ಪಿಗೆ ಪಡೆಯುವ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಅನುಧಾನದಡಿ ಸುಮಾರು 34 ಕೋಟಿ ರೂಪಾಯಿ ವೆಚ್ಚದ ವಿವಿಧ ಮೂಲಸೌಕರ್ಯ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು.

ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ 555 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ. ಮುಂದಿನ 1 ವರ್ಷದೊಳಗೆ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸಮಯ ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜೀ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

300 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಕೇಂದ್ರ ಸ್ಥಾಪನೆಗೆ ಆಗಸ್ಟ್ ತಿಂಗಳಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ ದೇಶಾದ್ಯಂತ ಎಲ್ಲ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ 3 ಲಕ್ಷ 60 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ ಎಂದರು.

ಹುಬ್ಬಳ್ಳಿ-ಧಾರವಾಡದಿಂದ ಬೆಂಗಳೂರು ನಗರದವರೆಗಿನ ಜೋಡಿ ರೈಲು ಮಾರ್ಗ ನಿರ್ಮಾಣವನ್ನು ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುತ್ತಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version