ದಿನದ ಸುದ್ದಿ
ಭಾರೀ ಮಳೆ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸುದ್ದಿದಿನ, ಬೆಂಗಳೂರು : ಕರ್ನಾಟಕ, ಗುಜರಾತ್, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುನ್ನೆಚರಿಕೆ ಕ್ರಮವಾಗಿ ನಾಳೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭದ್ರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಕ್ಕೆ 59 ಸಾವಿರದ 500 ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 1 ಸಾವಿರದ633 ಅಡಿ ಇದ್ದು, ಇಂದಿನ ಮಟ್ಟ 1 ಸಾವಿರದ 600 ಅಡಿಗೆ ತಲುಪಿದೆ. ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಅದರ ಉಪನದಿ ಗುಂಡಬಾಳ ನದಿಯೂ ಉಕ್ಕಿ ಹರಿಯುತ್ತಿದ್ದು ನದಿಪಾತ್ರದ ಮನೆಗಳು ಜಲಾವೃತವಾಗಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾವೇರಿ, ತುಂಗಭದ್ರ, ವರದಾ, ಕುಮದ್ವತಿ, ಧರ್ಮಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ನದಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳ ಮಟ್ಟ ತಾಲೂಕಿನಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ರಾಜಾಪುರ್ ಬ್ಯಾರೆಜ್‌ನಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ 7 ಸೇತುವೆಗಳು ಮುಳುಗಡೆಯಾಗಿವೆ. ಗುಜರಾತ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಅಲ್ಲಿನ ಪರಿಸ್ಥಿತಿ ಕುರಿತು ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ನಿಯೋಜಿಸುವ ಭರವಸೆ ನೀಡಿದರು.
ಉತ್ತರಪ್ರದೇಶದ ವಾರಾಣಸಿಯಲ್ಲಿ ಗಂಗಾನದಿ ನೀರಿನ ಮಟ್ಟ ಹೆಚ್ಚುತ್ತಿದ್ದು, ಮುಂದಿನ ಆದೇಶದವರೆಗೆ ನದಿಯಲ್ಲಿ ದೋಣಿಗಳ ಕಾರ್ಯಾಚರಣೆಗೆ ಅಲ್ಲಿನ ಆಡಳಿತ ನಿರ್ಬಂಧ ವಿಧಿಸಿದೆ. ರಾಜ್ಯದ ಇತರ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದ ಇರ್ಸಾಲ್ವಾಡಿ ಗ್ರಾಮದಲ್ಲಿ ಶೋಧ ಮತ್ತು ಪರಿಹಾರ ಕಾರ್ಯದಲ್ಲಿ 27ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ 57 ಜನರು ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಮಧ್ಯೆ ಮುಂಬೈ ಮತ್ತು ಸುತ್ತಮುತ್ತಲ ಭಾಗಗಳಲ್ಲಿ ಮೂರನೇ ದಿನವಾದ ಇಂದೂ ಕೂಡ ಭಾರಿ ಮಳೆಯಾಗಿದೆ. ಪಾಲ್ಗರ್, ರಾಯ್‌ಗಢ್, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಮುಂಬೈನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಏಳು ಜಲಾಶಯಗಳಲ್ಲಿ ನೀರಿನ ಮಟ್ಟ ಶೇಕಡ 50 ರಷ್ಟು ತುಂಬಿದೆ. ಇನ್ನು ಕೆಲವು ದಿನಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ನಿರೀಕ್ಷೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

