Connect with us

ಅಂತರಂಗ

ಒಲವೇ ಜೀವನ ಸಾಕ್ಷಾತ್ಕಾರ..!

Published

on

sakshtkara_suddidina
  • ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು

ನ್ನಡ ಚಲನಚಿತ್ರ ಲೋಕದ ದಿಗ್ಗಜ ನಿರ್ದೇಶಕರಲ್ಲೊಬ್ಬರಾದ ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಅದ್ಬುತ ಚಿತ್ರಗಳಲ್ಲಿ “ಸಾಕ್ಷಾತ್ಕಾರ” ಹಲವರಿಗೆ ಬಹಳ ಇಷ್ಟವಾಗುವ ಚಿತ್ರ. ಈ ಚಿತ್ರದಲ್ಲಿ, ನಾಯಕ ಡಾ ರಾಜಕುಮಾರ್ ಅವರ ತಂದೆ ಪಾತ್ರ ನಿರ್ವಹಿಸಿರುವ ಪೃಥ್ವಿರಾಜ್ ಕಪೂರ್ ಅವರು ಚಿತ್ರದಲ್ಲಿ ಹಲವು ಬಾರಿ ಹೇಳುವ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ”. ಈ ಘೋಷವಾಕ್ಯಕ್ಕೆ ಹೇಳಿ ಮಾಡಿಸಿದ ಹಾಗೆ ನಾಯಕ ರಾಜಕುಮಾರ್ ಅವರ ಪಾತ್ರ.

ಸೋದರ ಮಾವನ ಮಗಳನ್ನೇ ಮದುವೆ ಮಾಡಿಕೊಳ್ಳಬೇಕೆಂಬ ಷರತ್ತು ಹಾಕುವ ತಾಯಿ ಹಾಗೂ ಅದರಂತೆ ಒತ್ತಡದ ವಾತಾವರಣ ನಿರ್ಮಾಣ ಮಾಡುವ ಮನೆಯವರ ಮಾತನ್ನು ದಿಕ್ಕರಿಸಿ, ರಾಜಕುಮಾರ್ ಅವರು ತಂದೆಯ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ’ ದಂತೆ ತಾನು ಪ್ರೀತಿಸಿದ ಹುಡುಗಿ ಮೂಲ ನಕ್ಷತ್ರದವಳಾದರೂ, ಅವಳನ್ನೇ ವರಿಸಬೇಕೆಂದು ನಿರ್ದರಿಸಿದರೂ, ಅವರಿಬ್ಬರ ಮದುವೆ ಸಾಧ್ಯವಾಗದೇ, ಚಿತ್ರದ ನಾಯಕನ ಮನೆಯ ಜನರ ಕ್ರೂರತ್ವದಿಂದ ಸಾವಿಗೀಡಾಗುವ ನಾಯಕಿಯ ಮೃತದೇಹದ ಬಳಿ ಕುಳಿತು ಕಣ್ಣೀರಿಡುವ ನಾಯಕ ರಾಜಕುಮಾರ್, ಶವವಾಗಿ ಮಲಗಿರುವ ನಾಯಕಿಯ ಕೊರಳಿಗೆ ತಾಳಿಯನ್ನು ಕಟ್ಟಿ “ಒಲವೇ ಜೀವನ ಸಾಕ್ಷಾತ್ಕಾರ” ಎಂದು ಹೇಳುವ ದೃಶ್ಯ ಎಲ್ಲರ ಮನಕಲಕುವಂತೆ ಮಾಡುವುದರ ಜೊತೆಗೆ ಪ್ರೀತಿ, ಸಂಬಂಧ ಹಾಗೂ ವಿಶ್ವಾಸ ಎಂಬ ಪದಗಳ ಆದರ್ಶದ ಫಿಲಾಸಫಿಯನ್ನೇ ಹೇಳುತ್ತದೆ.

ಈ ಚಿತ್ರದಲ್ಲಿ ತೋರಿಸಿರುವ ಹಾಗೆ ಆದರ್ಶಮಯ ಪ್ರೀತಿಯನ್ನು ಒಂದು ಗಂಡಾಗಲಿ ಅಥವಾ ಹೆಣ್ಣಾಗಲಿ ಕಾಪಾಡಿಕೊಳ್ಳಲು ಸಾಧ್ಯವೇ ಎಂದು ಅವಲೋಕಿಸಿದಾಗ, ಇತಿಹಾಸದಲ್ಲಿ ಹಾಗೂ ವರ್ತಮಾನದಲ್ಲಿ ಕೆಲವು ಉದಾಹರಣೆಗಳು ಸಿಗಬಹುದು. ಆದರೆ ಮನುಷ್ಯರ ಸೈಕಾಲಜಿ ಇದರ ವಿರುದ್ಧವಾದ ದಿಕ್ಕಿನಲ್ಲಿ ಚಲಿಸುತ್ತದೆ. ಅದಕ್ಕಾಗಿಯೇ ಏನೋ ಒಂದು ಗಂಡು ಹೆಣ್ಣಿನ ಸಂಬಂಧದಲ್ಲಿ ವೈಮನಸ್ಸು, ಜಗಳ ಹಾಗೂ ದೋಷಾರೋಪದಿಂದ ಪ್ರಾರಂಭವಾಗಿ ಕೆಲವರ ಜೀವನದಲ್ಲಿ ವಿವಾಹೇತರ ಸಂಬಂಧಗಳು ಬೆಸೆದುಕೊಳ್ಳುವುದಲ್ಲದೇ, ಹಲವರ ಸಂಬಂಧಗಳು ವಿವಾಹ ವಿಚ್ಚೇದನದಲ್ಲಿ ಕೊನೆಗೊಳ್ಳುತ್ತವೆ.

ಇದು ಒಂಥರಾ “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ನೆಡೆಯುವುದೇ ಜೀವನ” ಎಂಬ ನಾಣ್ಣುಡಿಗೆ ಪೂರಕವಾದಂತೆ. ಒಟ್ಟಿನಲ್ಲಿ ಹೇಳುವುದಾದರೆ, ಒಂದು ಗಂಡು ಮತ್ತು ಹೆಣ್ಣಿನ ನಡುವಿನ ಆದರ್ಶಮಯ ಪ್ರೀತಿ ಅಥವಾ ಸಂಬಂಧ ಮನುಷ್ಯರ ಸೈಕಾಲಜಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸಬೇಕಾಗಿದ್ದು, ಅದಕ್ಕೆ ಬಹಳ ಸದೃಢ ಮನಸ್ಸು ಒಂದು ಗಂಡು ಹಾಗೂ ಹೆಣ್ಣು ಇಬ್ಬರಲ್ಲೂ ಇರಬೇಕಾಗುತ್ತದೆ. ಇಂತಹ ಸದೃಢ ಮನಸ್ಸುಗಳು ಇರಲು ಸಾಧ್ಯವೇ ಎಂದು ನನ್ನನ್ನೂ ಒಳಗೊಂಡಂತೆ ನನ್ನ ಸುತ್ತಲಿರುವ ವ್ಯಕ್ತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಮನುಷ್ಯರ ಜೀವನದ ಕೆಲವು ಸತ್ಯಗಳು ಅನಾವರಣಗೊಳ್ಳುತ್ತಾ ಹೋದವು.

ಎರಡು ದಿನಗಳ ಹಿಂದೆ, ನಾನು ಮತ್ತು ನನ್ನ ಮಡದಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ, ಆ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನಿಂದ ಒಬ್ಬ ಮಹಿಳೆ ಡೋರ್ ತೆಗೆದು ಹೊರ ಬರಲಾಗಿ, “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಸೆಳೆಯುವುದು ಮನಸ್ಸು” ಎಂಬ ಮನುಷ್ಯನ ಸೈಕಾಲಜಿ ಪ್ರಕಾರ ಕಾರಿನಿಂದ ಇಳಿಯುವ ಆ ಮಹಿಳೆಯತ್ತ ನೆಟ್ಟ ನನ್ನ ಕಣ್ಣುಗಳನ್ನು ಗಮನಿಸಿದ ನನ್ನ ಮಡದಿ, “ದಾರಿ ಮುಂದೆ ಇದೆ. ಸರಿಗೇ ನೋಡ್ಕಂಡು ಗಾಡಿ ಓಡ್ಸಿ” ಎಂದು ನನಗೆ ಹೇಳಲಾಗಿ, “ಚೆನ್ನಾಗಿದಾರಲ್ವ ನೋಡಕೆ” ಎಂದು ನಾನು ಮಡದಿಗೆ ಉತ್ತರ ಕೊಡಲಾಗಿ, ಇಬ್ಬರೂ ಆ ಸಂದರ್ಭದಲ್ಲಿ ನಕ್ಕು, ಮನೆಗೆ ತೆರಳಿದ ಮೇಲೂ ಆ ಸಂದರ್ಭವನ್ನು ನೆನೆದು ನನ್ನ ಮಡದಿ ನನ್ನನ್ನು ಕಿಚಾಯಿಸಿದ್ದೂ ಇದೆ. ನಮ್ಮಿಬ್ಬರ ನಡುವೆ ಇಂತಹ ಸಂದರ್ಭಗಳು ಬಂದಿರುವುದು ಹಲವಾರು.

ಕನ್ನಡ ಚಲನ ಚಿತ್ರದ ಮಾಜಿ ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನನಗೆ ಬಹಳ ಇಷ್ಟ ಎಂದು ತಿಳಿದಿರುವ ನನ್ನ ಮಡದಿ, ರಮ್ಯಾ ಅವರ ಯಾವುದೇ ಚೆಂದದ ಚಿತ್ರ ಸಿಕ್ಕರೆ ನನಗೆ ಫೋನಿನ ಮೂಲಕ ಕಳುಹಿಸುತ್ತಾರೆ. ಹಾಗೆಯೇ ನನ್ನ ಮಡದಿಗೆ ನಟ ದರ್ಶನ್ ತೂಗುದೀಪ ಎಂದರೆ ನನಗಿಂತ ಇಷ್ಟ. ದರ್ಶನ್ ರ ಚೆಂದದ ಚಿತ್ರ ಹಾಗೂ ಅವರು ನಟಿಸಿರುವ ಚಲನ ಚಿತ್ರದ ತುಣುಕುಗಳನ್ನು ನನ್ನ ಮಡದಿಗೆ ನಾನು ಕಳುಹಿಸುತ್ತೇನೆ.

ಅಷ್ಟೇ ಅಲ್ಲದೇ, ಅವರು ನನ್ನ ಜೊತೆ ಇರುವಾಗ ನಮ್ಮ ಕಣ್ಣಿಗೆ ಕಾಣುವ ಚೆಂದದ ಪುರುಷರನ್ನು ನೋಡಿ ಪ್ರಶಂಸಿಸುವಾಗ, ನಾನು ಕೂಡ ಅವರೊಡನೆ ದನಿಗೂಡಿಸುತ್ತೇನೆ. ಇಷ್ಟಿದ್ದರೂ ನಮ್ಮಿಬ್ಬರಲ್ಲಿ ಯಾವತ್ತೂ ಕೂಡ “ಜೆಲಸಿ” ಎಂಬುದನ್ನು ನಾನು ಕಂಡಿಲ್ಲ. ನಾವಿಬ್ಬರೂ ಮನುಷ್ಯರ ಸೈಕಾಲಜಿ ಅನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದು, ಕ್ಷಣ ಮಾತ್ರಕ್ಕೆ ಬೇರೆಡೆ ಆಕರ್ಷಿತರಾದರೂ, ನಮ್ಮಲ್ಲಿರುವ ಸತ್ಯವನ್ನು ಅರಗಿಸಿಕೊಳ್ಳುವ ಗುಣ ಹಾಗೂ ಸಾಕ್ಷಾತ್ಕಾರ ಚಿತ್ರದಲ್ಲಿ ಡಾ ರಾಜಕುಮಾರ್ ಅವರು ಹೇಳುವ “ಒಲವು” ಎಂಬ ಭಾವನೆ ವಿಸ್ತಾರವಾದ ಜೀವನದಲ್ಲಿ ನಮ್ಮಿಬ್ಬರನ್ನು ಮನುಷ್ಯರ ಸೈಕಾಲಜಿ ಗೆ ವಿರುದ್ಧವಾಗಿ ನೆಡೆಯುವಂತೆ ಮಾಡುತ್ತಿದೆಯೇನೋ ಎಂಬುದು ನನ್ನ ಅನಿಸಿಕೆ.

ಒಂದು ಗಂಡು ಮತ್ತು ಹೆಣ್ಣಿನ ನಡುವೆ ಉಂಟಾಗುವ “ಒಲವು” ಎಂಬ ಭಾವನೆಗೆ ಮನುಷ್ಯರ ಸೈಕಾಲಜಿ ಪ್ರಚೋದಿಸುವ “ಜೀವನದ ತಾತ್ಕಾಲಿಕ ಆಕರ್ಷಣೆ” ಯನ್ನು ಮೀರಿಸುವ ಶಕ್ತಿ ಇದೆ ಎಂಬುದು ನನ್ನ ಅನುಭವದ ಅನಿಸಿಕೆ. ಈ “ಒಲವು” ಉಂಟಾಗಲು ಒಂದು ಗಂಡು ಹಾಗೂ ಹೆಣ್ಣಿನ ಆಸೆ ಮತ್ತು ಆದ್ಯತೆಗಳಲ್ಲಿ ಸಾಮ್ಯತೆ, ಇಬ್ಬರ ಜೀವನದ ಉದ್ದೇಶ ಹಾಗೂ ಗುರಿ ಸಾದಿಸಲು ಒಬ್ಬರಿಗೊಬ್ಬರು ಒತ್ತಾಸೆಯಾಗಿ ನಿಲ್ಲುವ ಮನೋಭಾವ, ಸ್ವಾತಂತ್ರ್ಯ ಹಾಗೂ ಸಮಾನತೆ, ಸ್ನೇಹಿತರ ಭಾವನೆ ಇವೆಲ್ಲದರಿಂದ ಕೂಡಿರುವ ವಾತಾವರಣ ಬಹಳ ಮುಖ್ಯ ಎಂದು ನನ್ನ ಅಭಿಪ್ರಾಯ.

ನನ್ನ ಕೆಲವು ಸ್ನೇಹಿತರು ಹಾಗೂ ಸಂಬಂಧಿಕರನ್ನೂ ನೋಡಿದ್ದೇನೆ. ಅದರಲ್ಲಿ ಕೆಲವರು ತಮ್ಮ ಕುಟುಂಬದ ಯಾರನ್ನೋ ಖುಷಿಪಡಿಸಲು, ಅವರ ಪೋಷಕರು ಗುರುತು ಪಡಿಸಿದವರನ್ನ ಮದುವೆ ಮಾಡಿಕೊಂಡು, ಮಡದಿಗಳಿಬ್ಬರ ನಡುವಿನ ಆಸೆ, ಗುರಿ, ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ ಹಾಗೂ ಹವ್ಯಾಸಗಳಲ್ಲಿ ಅಜಗಜಾಂತರ ವ್ಯತ್ಯಾಸಗಳಿದ್ದು, ಒಬ್ಬರ ಒಟ್ಟಾರೆ ಜೀವನ ಶೈಲಿ ಕಂಡರೆ ಮತ್ತೊಬ್ಬರಿಗೆ ಕೋಪ. ಒಬ್ಬರ ಮೇಲೊಬ್ಬರು ದೋಷಾರೋಪ ಮಾಡಿಕೊಂಡು, ತಮ್ಮ ನಿಕಟವರ್ತಿಗಳೊಂದಿಗೆ ಮಡದಿಯ ಬಗೆಗೆ ದೂರನ್ನ ಹೇಳಿ, ತಾವಿರುವ ಪರಿಸ್ಥಿತಿಯ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ಇವರದು.

ಇದರ ಪರಿಣಾಮವಾಗಿ, ಇಬ್ಬರ ನಡುವಿನ ಮುಖಾಮುಖಿ ತಪ್ಪಿಸಲು ಏನೇನೋ ಕಾರಣಗಳನ್ನು ಹೇಳಿ ಮನೆಗೆ ತಡವಾಗಿ ಬರುವುದೋ, ಬರೀ ಔಪಚಾರಿಕ ಮಾತುಗಳನ್ನಷ್ಟೇ ಆಡಿ ಬೇರೆ ಕೆಲಸಗಳಲ್ಲಿ ಪಾಲ್ಗೊಳ್ಳುವುದೋ, ಯಾವುದಾದರೊಂದು ಕಾರಣಗಳನ್ನು ಹೇಳಿ ಎಷ್ಟು ಸಮಯ ಅಥವಾ ದಿನಗಳು ಸಾಧ್ಯವೂ ಅಷ್ಟು ದೂರ ಉಳಿಯುವುದನ್ನು ಮೊದಲಿಸಿ ವಿವಾಹೇತರ ಸಂಬಂಧಗಳಿಗೆ ಕೆಲವರು ಒಳಗಾಗಿದ್ದರೆ, ಕೆಲವರು ಈ ಅನ್ಯೋನ್ಯತೆ ಇಲ್ಲದ ಸಂಬಂಧ ಸಾಕೆಂದು ವಿವಾಹ ವಿಚ್ಚೇದನ ಪಡೆದು ತಮ್ಮ ಕಲ್ಪನೆಯ ಜೀವನವನ್ನು ನೆಡೆಸುತ್ತಿದ್ದಾರೆ. ಇನ್ನೂ ಹಲವರು ಸಮಾಜದ ಕಟ್ಟುಪಾಡುಗಳಿಗೆ ಹೆದರಿ ಕಷ್ಟವೋ ಸುಖವೋ “ಕಟ್ಟುಕೊಂಡಿದದ್ದರ ಜೊತೆ ಕೊನೆವರೆಗೂ ಸಾಯಬೇಕು” ಎಂದು ನಿಶ್ಚಯಿಸಿ ಜೀವನವನ್ನ ದೂಡುತ್ತಿದ್ದಾರೆ.

ಇನ್ನು ಈ ಯುವಕ ಯುವತಿಯರ ನಡುವಿನ “ಪ್ರೀತಿ” ಎಂಬ ಸಂಬಂದದ್ದು ಇನ್ನೊಂದು ವಿಚಿತ್ರ. ಇವರಿಗೆ ಮನುಷ್ಯರ ಸಹಜ ಸೈಕಾಲಜಿ ಸತ್ಯಗಳು ಆರ್ಥವಾಗದೇ, ಅಥವಾ ಅರ್ಥವಾದರೂ ಅದನ್ನು ಜೀರ್ಣಿಸಿಕೊಳ್ಳಲಾಗದೇ ಕೆಲವರು ತಮ್ಮ ಪ್ರೇಯಸಿ ಅಥವಾ ಪ್ರಿಯತಮನನ್ನು ದೂಷಿಸಿ, ದ್ವೇಷಿಸಿ , ತಮ್ಮ ನಡವಳಿಕೆಯಲ್ಲಿ ಬಾರೀ ಬದಲಾವಣೆ ಮಾಡಿಕೊಂಡು, ಅಡ್ಡ ದಾರಿಯನ್ನು ಹಿಡಿದಿದ್ದರೆ, ಇನ್ನು ಕೆಲವು ಮುಗ್ಧ ಮನಸ್ಸುಗಳು ತಮ್ಮ ಜೀವನದಲ್ಲಾದ ಕಹಿ ಘಟನೆಯಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿರುವುದನ್ನು ನಾನು ನೋಡಿದ್ದೇನೆ.

ಸಮಾಜದ ಎಲ್ಲ ವ್ಯಕ್ತಿಗಳ ಹಿತಬಯಸುವವನಾಗಿ ಹೇಳುವುದಾದರೆ, ಒಂದು ಗಂಡು ಅಥವಾ ಹೆಣ್ಣು, ಯುವ ವಯಸ್ಸಿನಲ್ಲಿ ಪ್ರೀತಿ ಎಂಬ ಸಂಕೋಲೆಯಲ್ಲಿ ಬೀಳುವ ಹಾಗೂ ಮದುವೆ ಎಂಬ ಸಂಬಂಧದಲ್ಲಿ ಬೆಸೆದುಕೊಳ್ಳುವ ಮೊದಲು ಈ “ಒಲವು” ಎಂಬ ಪದದ ಅಂಶಗಳಾದ ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ, ಗೆಳೆತನ, ಹವ್ಯಾಸಗಳು ಹಾಗೂ ಇತ್ಯಾದಿಗಳಲ್ಲಿ ತಮ್ಮದೇ ಆಲೋಚನೆಯುಳ್ಳ ಜತೆಗಾರರನ್ನ ಹುಡುಕಿಕೊಳ್ಳುವ ಮೂಲಕ ಸಾಯುವವರೆಗೂ ಸಂತೋಷವಾಗಿ ಬದುಕಿ ತಮ್ಮ ಜೀವನದ ಉದ್ದೇಶವನ್ನು ಸಾರ್ಥಕಗೊಳಿಸಬಹುದು.

ಒಂದು ವೇಳೆ ಅನಿರೀಕ್ಷಿತವಾಗಿಯೋ ಅಥವಾ ಪೋಷಕರು ನಿಶ್ಚಯಿಸುವ ಒಪ್ಪಂದದ ಮದುವೆಗಳಿಂದ ಬೆಸೆದುಕೊಳ್ಳುವ ಸಂಬಂಧದಿಂದ “ಒಲವಿನ” ಅಂಶಗಳನ್ನ ನಿರೀಕ್ಷಿಸಲು ಆರಂಭದಲ್ಲಿ ಸಾಧ್ಯವಾಗದಿದ್ದರೂ, ಒಂದು ಗಂಡು ಹಾಗೂ ಹೆಣ್ಣಿನಲ್ಲಿ ಇರುವ ಮೆಚುರಿಟಿ ಹಾಗೂ ಪರಸ್ಪರ ತಿಳುವಳಿಕೆಯ ಗುಣಗಳಿದ್ದರೆ ಈ ಮನುಷ್ಯರ ಸಹಜ ಸೈಕಾಲಜಿ “ಇರುವುದೆಲ್ಲವ ಬಿಟ್ಟು ಇರುದುದರೆಡೆಗೆ ಜೀವನ” ಎಂಬ ಮಾತನ್ನು ಒಂದು ಗಂಡು ಮತ್ತು ಹೆಣ್ಣಿನ ವಿಸ್ತಾರ ಸಂಬಂಧದ ಪರಿಕಲ್ಪನೆಯಲ್ಲಿ ಸುಳ್ಳು ಮಾಡಿ, ಸಾಕ್ಷಾತ್ಕಾರ ಚಿತ್ರದ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ” ವನ್ನು ಸತ್ಯವಾಗಿಸಬಹುದು ಎಂಬ ಅನಿಸಿಕೆ ನನ್ನದು.

ಸುದ್ದಿದಿನ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending