ದಿನದ ಸುದ್ದಿ
ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ
ಸುದ್ದಿದಿನ,ಬೆಳಗಾವಿ :ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.
ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ (ಡಿ.22) ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ವಿವಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ಬದ್ಧತೆ ಸಿಪಾಯಿಯಿಂದ ಹಿಡಿದು ಕುಲಪತಿಗಳವರೆಗೆ ಎಲ್ಲರಿಗೂ ಇರಬೇಕು. ವಿವಿಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಎಲ್ಲ ಕ್ಷೇತ್ರದಲ್ಲಿ ಸಾಧನೆಗೈಯಬೇಕು.
ಹೊಸ ಪ್ರಯೋಗಗಳು ವಿಶ್ವವಿದ್ಯಾಲಯದಲ್ಲಿ ಆಗಬೇಕು. ಊಹೆಗೂ ನಿಲುಕದಂತಹ ತಾಂತ್ರಿಕ ಮತ್ತು ವೈಜ್ಞಾನಿಕ ಬದಲಾವಣೆಗಳಾಗುತ್ತಿವೆ. ಇದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯ ಬದಲಾಗುವ ಮೂಲಕ ಆವಿಷ್ಕಾರದ ಕೇಂದ್ರವಾಗಬೇಕು.
ಶಿಕ್ಷಣ ಕ್ಷೇತ್ರದ ಆಮೂಲಾಗ್ರ ಬದಲಾವಣೆ ತರಬೇಕಾದರೆ ಅದು ವಿಶ್ವವಿದ್ಯಾಲಯದ ಮೂಲಕ ಮಾತ್ ಸಾಧ್ಯವಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ವಿಶ್ವವಿದ್ಯಾಲಯದಲ್ಲಿ ಆವಿಷ್ಕಾರಗಳನ್ನು ಕೈಗೊಳ್ಳಬೇಕು.
ಸತ್ವಯುತ ಸಂಶೋಧನೆಗೆ ಸಿಎಂ ಸಲಹೆ
ಯುವಸಮುದಾಯಕ್ಕೆ ಜ್ಞಾನ ಹಾಗೂ ಆತ್ಮವಿಶ್ವಾಸದ ಬಲ ನೀಡಲು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಪ್ರಾಧ್ಯಾಪಕರು ವಿಶ್ವವಿದ್ಯಾಲಯಗಳ ಕ್ಲಾಸ್ ರೂಮ್ ಗಳಿಂದ ಹೊರಬಂದು ತಮ್ಮ ಸಂಶೋಧನೆಯನ್ನು ಒರೆಗೆ ಹಚ್ಚಬೇಕು. ಸತ್ವಯುತವಾದ ಸಂಶೋಧನೆ ಎಂದಿಗೂ ಉಳಿದುಕೊಳ್ಳುತ್ತದೆ. ಆದ್ದರಿಂದ ಸತ್ವಯುತ ಹಾಗೂ ಜನೋಪಯೋಗಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣದಲ್ಲಿ ಸಮರ್ಥ ನಾಯಕತ್ವ ಅತೀ ಮುಖ್ಯವಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳು ಇಂತಹ ನಾಯಕತ್ವ ವಹಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಸರಕಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಪಿ.ಎಚ್‌ಡಿ ಗಳ ವಿಶ್ಲೇಷಣೆ ಆಗಬೇಕು. ಅವುಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಕೂಡ ಅಧ್ಯಯನ ನಡೆಸಬೇಕು ಎಂದು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ರಾಚವಿ ಆದರ್ಶ ವಿವಿ ಆಗಲಿ; ಸಿಎಂ ಆಶಯ
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆದರ್ಶ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿ ಎಂದು ಆಶಯ ವ್ಯಕ್ತಪಡಿಸಿದರು. ರಸ್ತೆ, ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ. ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು.
ವಿವಿಯ ಪ್ರತಿ ಕೊಠಡಿಯು ಡಿಜಿಟಲೀಕರಣ ಆಗಬೇಕು. ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಕೇಳುವ ಧೈರ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿ ಸ್ಥಾಪನೆಯಿಂದ ಕುಡಿಯುವ ನೀರಿನ ಯೋಜನೆಗೆ ಸ್ವಲ್ಪಮಟ್ಟಿಗೆ ತೊಂದರೆಯಾಗಿದೆ. ಆದ್ದರಿಂದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.
ಉತ್ಕೃಷ್ಟ ಶಿಕ್ಷಣ ಒದಗಿಸಲು ಸರಕಾರ ಬದ್ಧ
ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಅಶ್ವತ್ಥನಾರಾಯಣ ಸಿ.ಎನ್., ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ಧೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ ಎಂದರು.
ಉತ್ತಮ ಶಿಕ್ಷಣ, ಕೌಶಲ್ಯ , ತಂತ್ರಜ್ಞಾನವನ್ನು ಒದಗಿಸುವ ಮೂಲಕ ಯುವ ಸಮುದಾಯವನ್ನು ಸ್ವಾವಲಂಬಿ ಮತ್ತು ಉತ್ತಮ ಬದುಕು ಕಟ್ಟಿಕೊಳ್ಳಲು ಸರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ.ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಸೌಲಭ್ಯ ಒದಗಿಸಲಿದೆ.
ಈ ಭಾಗದ ಸವಾಲು ಮತ್ತು ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ನಿವಾರಣೆಗಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂಬ ನಿರೀಕ್ಷೆಯನ್ನು ಸರಕಾರ ಹೊಂದಿದೆ ಎಂದು ತಿಳಿಸಿದರು.
ಸದ್ಯಕ್ಕೆ ಎಂಟು ಸಾವಿರ ಪೈಕಿ ಈಗಾಗಲೇ ಎರಡು ಸಾವಿರ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಉಳಿದ ಆರು ಸಾವಿರ ಕ್ಲಾಸ್ ಗಳನ್ನು ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸುವ ಕೆಲಸ ಮಾಡಲಾಗುವುದು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸಬಲೀಕರಣ, ಸ್ವಾಯತ್ತತೆಯನ್ನು ಒದಗಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಉತ್ಕೃಷ್ಟ ಮತ್ತು ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಸೂಪರ್ ಥರ್ಟಿ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು. ಸಮಗ್ರ, ಸದೃಢ ಕರ್ನಾಟಕ ಕಟ್ಟಲು ಶಿಕ್ಷಣವೇ ಬುನಾದಿಯಾಗಿದೆ. ಆದ್ದರಿಂದ ಶಿಕ್ಷಣ ಮತ್ತು ಎಲ್ಲರಿಗೂ ಉದ್ಯೋಗ ನೀಡುವ ಪ್ರಯತ್ನವನ್ನು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಜರಾಯಿ, ಹಜ್ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಮನವಿ
ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧ, ವಿಟಿಯು ಹಾಗೂ ಆರ್.ಸಿ.ಯು. ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಳಶಪ್ರಾಯವಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಅಭಿವೃದ್ಧಿಗೆ ಪೂರಕವಾಗಿರುವ ಗ್ರಾಮೀಣ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇದನ್ನು ನಿವಾರಿಸಲು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 300 ಕೋಟಿ ರೂಪಾಯಿಗೂ ಅಧಿಕ ಅನುದಾನವನ್ನು ಮಂಜೂರು ಮಾಡಿಸಲಾಗಿದೆ. ಕೆರೆ ತುಂಬಿಸುವ ಯೋಜನೆ ಮುಂದುವರಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಹಿರೇಬಾಗೇವಾಡಿ ಗ್ರಾಮದ ಕಸ ವಿಲೇವಾರಿಗೆ ಹತ್ತು ಎಕರೆ ಜಮೀನು ಒದಗಿಸಲು ಲಕ್ಷ್ಮೀ ಹೆಬ್ಬಾಳಕರ ಮನವಿ ಮಾಡಿಕೊಂಡರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇಡಿ ಬಳಿ 126 ಎಕರೆ ವಿಶಾಲವಾದ ಜಾಗೆ ದೊರೆತಿದೆ ಎಂದು ತಿಳಿಸಿದರು.
ವಿವಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ಉತ್ಕೃಷ್ಟವಾದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇದಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಡಾ.ತಳವಾರ ಸಾಬಣ್ಣ, ಹನಮಂತ ನಿರಾಣಿ, ಸಿಂಡಿಕೇಟ್ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿನಾಯಕ ಮೋರೆ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಕುಲಪತಿ ಪ್ರೊ.ಬಸವರಾಜ ಪದ್ಮಶಾಲಿ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


