Connect with us

ದಿನದ ಸುದ್ದಿ

ಸಂಕೇಶ್ವರ್ ಬಸ್ ನಿಲ್ದಾಣ; ಪುರಸಭೆ ಕಟ್ಟಡ ಉದ್ಘಾಟನೆ | ಕನ್ನಡ ನೆಲ-ಜಲ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಬೆಳಗಾವಿ : ರಾಜ್ಯದ ನೆಲ-ಜಲ‌‌ ಹಾಗೂ‌ ಜನರ ರಕ್ಷಣೆಗೆ ಸರಕಾರ ಕಟಿಬದ್ಧವಾಗಿದೆ. ಇದಲ್ಲದೇ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಸಂಕೇಶ್ವರ ಪಟ್ಟಣದಲ್ಲಿ ಶನಿವಾರ (ಸೆ.25) ಸಂಜೆ 4 ಕೋಟಿ ರೂಪಾಯಿ ವೆಚ್ಚದ ನೂತನ ಬಸ್ ನಿಲ್ದಾಣ ಹಾಗೂ ಎಸ್.ಎಫ್.ಸಿ. 3.50 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ನೇಸರಿ ಗಾರ್ಡನ್ ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೂಕ್ತ ವ್ಯವಸ್ಥೆ ಲಭ್ಯವಾದರೆ ರಾಜ್ಯದಲ್ಲಿ ವಿದ್ಯುತ್ ‌ವಿತರಣೆ ವ್ಯವಸ್ಥೆ ವಿಕೇಂದ್ರೀಕರಣಕ್ಕೆ ಸರಕಾರ‌ ಸಿದ್ಧವಿದೆ ಎಂದು ಅವರು ತಿಳಿಸಿದರು.

ಸರಕಾರಿ ಸೇವೆಗಳ ವಿಕೇಂದ್ರೀಕರಣ

ಜನವರಿ 26 ರಿಂದ ಐದು‌ ಜಿಲ್ಲೆಗಳಲ್ಲಿ ಸರಕಾರದ ಪ್ರತಿಯೊಂದು ಸೇವೆಗಳನ್ನು ಗ್ರಾಮ‌ ಪಂಚಾಯಿತಿ ಮೂಲಕ ನೀಡುವ ವ್ಯವಸ್ಥೆ ಮಾಡಲಾಗುವುದು.
ಸರಕಾರಿ ಸೇವೆಗಳ ವಿಕೇಂದ್ರೀಕರಣ ಮಾಡುವ ಮೂಲಕ ಜನರ ಮನೆಬಾಗಿಲಿಗೆ ಸೇವೆ ಒದಗಿಸಲಾಗುವುದು. ಇದಕ್ಕೆ ಸರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ರೈತರ ಮಕ್ಕಳಿಗೆ ಶಿಷ್ಯವೇತನ ಒದಗಿಸುವ ಮೂಲಕ ಅವರ ಬದುಕಿಗೆ ಸರಕಾರ ಆಸರೆ‌ಯಾಗಲಿದೆ. ರೈತರ ಮಕ್ಕಳು ಬೇರೆ‌ಬೇರೆ‌ ರೀತಿಯ ವೃತ್ತಿಶಿಕ್ಷಣ ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಅಮೃತ‌ ಯೋಜನೆಗಳ ಜಾರಿ ಮೂಲಕ ಹಳ್ಳಿಗಳ ಪ್ರಗತಿಗೆ ಸರಕಾರ ಮುಂದಾಗಿದೆ ಎಂದರು.

ಏತ ನೀರಾವರಿ ಯೋಜನೆಗಳಿಗೆ ಶೀಘ್ರ ಚಾಲನೆ

ಶಂಕರಲಿಂಗ ಏತ ನೀರಾವರಿ ಹಾಗೂ ಅಡವಿ ಸಿದ್ಧೇಶ್ವರ ಏತ ನೀರಾವರಿ ಯೋಜನೆಗಳನ್ನು ಶೀಘ್ರ ಆರಂಭಿಸಲಾಗುವುದು. ಅದೇ ರೀತಿ ಆರು ಬ್ಯಾರೇಜ್ ತುಂಬಿಸಲು ಆದಷ್ಟು ಬೇಗನೇ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಪ್ರಧಾನಮಂತ್ರಿಗಳ ದೂರದೃಷ್ಟಿಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಒಟ್ಟಾರೆ ಅಭಿವೃದ್ಧಿ ನಿಟ್ಟಿನಲ್ಲಿ ‌ಸರಕಾರ ಕೆಲಸ ಮಾಡಲಿದೆ ಎಂದು ಹೇಳಿದರು.

ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ

ಸಂಕೇಶ್ವರ ಪಟ್ಟಣಕ್ಕೆ‌ ಸಂಪೂರ್ಣ ಒಳಚರಂಡಿ ವ್ಯವಸ್ಥೆ ಯೋಜನೆಗೆ ವರ್ಷಾಂತ್ಯದ ಲ್ಲಿ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.ವಿಶ್ವನಾಥ್ ಕತ್ತಿ ಹಾಗೂ ತಮ್ಮ ತಂದೆಯವರಾದ ದಿ.ಎಸ್.ಆರ್.ಬೊಮ್ಮಾಯಿ ಅವರ ಆತ್ಮೀಯ ಒಡನಾಟವನ್ನು ಸ್ಮರಿಸಿದರು.

ಅಧಿಕಾರ ಶಾಶ್ವತವಲ್ಲ; ಪ್ರತಿದಿನ ಇದನ್ನು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ. ಜನರ ಮನಸ್ಸಿನಲ್ಲಿ ನಮ್ಮ ಬಗ್ಗೆ ಪ್ರೀತಿ-ವಿಶ್ವಾಸ ಇರುವವರೆಗೆ ನಾವು ಅಧಿಕಾರದಲ್ಲಿರುತ್ತೇವೆ ಎಂದರು. ಜನರ‌ ಸುತ್ತ ಅಭಿವೃದ್ಧಿ ಕೆಲಸಗಳಾಗಬೇಕು; ಸುಸಜ್ಜಿತ ಬಸ್ ನಿಲ್ದಾಣ, ಪುರಸಭೆ ಕಟ್ಟಡಗಳಿಂದ ಇಡೀ ತಾಲ್ಲೂಕಿನ ಹಾಗೂ ‌ಪಟ್ಟಣದ ಜನರಿಗೆ ಅನುಕೂಲವಾಗಲಿದೆ ಎಂದರು.

ವಸತಿ ಕಲ್ಪಿಸಲು 50 ಎಕರೆ ಜಮೀನು ಹಸ್ತಾಂತರ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸಂಕೇಶ್ವರ ಹೋಬಳಿಯ ಹರಗಾಪುರ ಗ್ರಾಮದ ಸರಕಾರಿ ಗಾಯರಾಣದ 50 ಎಕರೆ‌ ಜಮೀನನ್ನು ವಸತಿರಹಿತರಿಗೆ ವಸತಿ ಕಲ್ಪಿಸಲು ಸಂಕೇಶ್ವರ ಪುರಸಭೆಗೆ ಹಸ್ತಾಂತರಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ-ಶ್ರೀರಾಮುಲು

ಮುಖ್ಯ ಅತಿಥಿಯಾಗಿ ಮಾತನಾಡಿದ ಸಾರಿಗೆ ಹಾಗೂ‌ ಪರುಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ಅವರು, ಮುಖ್ಯಮಂತ್ರಿಗಳು ಅಭಿವೃದ್ಧಿಯ ಕಲ್ಪನೆಯನ್ನು ಸಣ್ಣ ಪಟ್ಟಣ ಹಾಗೂ ಗ್ರಾಮಗಳ ಕಡೆಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಬಣ್ಣಿಸಿದರು.

ರಾಜ್ಯದ ನಾಗರಿಕರು ಸರಕಾರಿ‌ ಬಸ್ ಗಳಲ್ಲಿ ಸುರಕ್ಷಿತ ಹಾಗೂ ನೆಮ್ಮದಿಯಿಂದ ಪ್ರಯಾಣ ಕೈಗೊಳ್ಳಲು ಎಲ್ಲ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ರಾಮುಲು ಹೇಳಿದರು. ಕೇಂದ್ರ‌‌ ಹಾಗೂ ರಾಜ್ಯ ಸರಕಾರಗಳಿಂದ ಅಭಿವೃದ್ಧಿ ಕೆಲಸಗಳು ಡಬಲ್ ಎಂಜಿನ್ ‌ಗಾಡಿಯಂತೆ ನಾಗಾಲೋಟದಲ್ಲಿ ಸಾಗಿವೆ ಎಂದು ಹೇಳಿದರು.

ಸಂಪೂರ್ಣ ಒಳಚರಂಡಿ ವ್ಯವಸ್ಥೆ- ಸಚಿವ ಭೈರತಿ ಭರವಸೆ

ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಬಸವರಾಜ ಮಾತನಾಡಿ, ಸರಕಾರ ಜನರ ಮನೆಬಾಗಿಲಿಗೆ ಎಂಬ ಯೋಜನೆಯನ್ನು ಮುಖ್ಯಮಂತ್ರಿಗಳು ಜಾರಿಗೆ ತಂದಿದ್ದಾರೆ. ಇದೇ ರೀತಿ ವಿನೂತನ ಯೋಜನೆಗಳನ್ನು ರೂಪಿಸಲಿದ್ದಾರೆ ಎಂದರು.

ಸಂಕೇಶ್ವರ ಪಟ್ಟಣದಲ್ಲಿ 110 ಕೋಟಿ ವೆಚ್ಚದಲ್ಲಿ ಸಂಪೂರ್ಣ ಒಳಚರಂಡಿ ವ್ಯವಸ್ಥೆಯನ್ನು ನಮ್ಮ ಸರಕಾರದ ಅವಧಿಯಲ್ಲಿ ಮಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಇಡೀ ರಾಜ್ಯದಲ್ಲಿ ಹಂತ ಹಂತವಾಗಿ ಒಳಚರಂಡಿ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವುದು ಸರಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರು, ಸಂಕೇಶ್ವರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಪಟ್ಟಣದ ಸಮಗ್ರ ಅಭಿವೃದ್ಧಿಗೆ ನೆರವು ನೀಡಿದ ಮುಖ್ಯಮಂತ್ರಿಗಳು, ಸಚಿವರು‌ ಹಾಗೂ ಸ್ಥಳೀಯ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.

ಕೃಷ್ಣಾ ಯೋಜನೆಗೆ ಆದ್ಯತೆ ನೀಡಬೇಕು, ಸಂಕೇಶ್ವರ-ಹುಕ್ಕೇರಿ ಪಟ್ಟಣದಲ್ಲಿ ಯು.ಜಿ.ಡಿ. ವ್ಯವಸ್ಥೆ ಕಲ್ಪಿಸುವ ಮೂಲಕ ಸ್ವಚ್ಛ-ಸುಂದರ ನಗರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಹಿರಣ್ಯಕೇಶಿ‌ ನದಿಯ ಮೂಲಕ ಆರು ಬ್ಯಾರೇಜ್ ಗಳಲ್ಲಿ ನೀರು ಸಂಗ್ರಹಿಸಲು, ಹುಕ್ಕೇರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಉಳಿದಿರುವ ಇನ್ನೂ ಹದಿನೇಳು ಕೆರೆಗಳನ್ನು ತುಂಬಿಸಲು ಅವಕಾಶ ಕಲ್ಪಿಸಬೇಕು ಎಂದು ರಮೇಶ್ ಕತ್ತಿ ಒತ್ತಾಯಿಸಿದರು.

ಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಸಚಿವ ಭೈರತಿ‌ ಬಸವರಾಜ್ , ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕರಾದ‌ ಮಹಾಂತೇಶ ಕವಟಗಿಮಠ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ಪರಿಷತ್ ಸದಸ್ಯ ಹಣಮಂತ ನಿರಾಣಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ಪುರಸಭೆಯ ಅಧ್ಯಕ್ಷೆ ಸೀಮಾ ಹತನೂರೆ ಮತ್ತಿತರರು ಉಪಸ್ಥಿತರಿದ್ದರು.

ಸಂಕೇಶ್ವರ ಪುರಸಭೆಗೆ 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಪುರಸಭೆಯ ಅಧ್ಯಕ್ಷರಾದ ಸೀಮಾ ಹತನೂರೆ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ವಾಗತಿಸಿದರು. ಪುರಸಭೆಯ ಸದಸ್ಯರು, ಪಟ್ಟಣದ ಗಣ್ಯರು ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending