ದಿನದ ಸುದ್ದಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243