ದಿನದ ಸುದ್ದಿ
ಸಸ್ಯ ಸಂಕುಲ ಇದ್ದರೆ ಮನು ಕುಲಕ್ಕೆ ಒಳಿತು : ಶಾಸಕ ಎಸ್.ಎ.ರವೀಂದ್ರನಾಥ್
- 33 ನೇ ವಾರ್ಡ್‌ನ್ನು ಹಸಿರು, ಸ್ವಚ್ಛಮಯ ಮಾಡುವುದು ನನ್ನ ಗುರಿ.- ಕೆ.ಎಮ್.ವೀರೇಶ್, ಪಾಲಿಕೆ ಸದಸ್ಯ
- 33 ನೇ ವಾರ್ಡ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ.
ಸರಸ್ವತಿ ನಗರದ ಉದ್ಯಾನವನದಲ್ಲಿ ಒಂದು ನೂರು ಗಿಡಗಳನ್ನು ನೆಟ್ಟು ಪರಿಸರ ದಿನದ ಆಚರಣೆ
ಕೋರೋನಾ ವೈರಸ್ ಮನುಷ್ಯನಿಗೆ ಪರಿಸರ ಸಂರಕ್ಷಣೆಯ ಅವಶ್ಯಕತೆಯ ಪಾಠ ಕಲಿಸಿದೆ. ಪರಿಸರ ನಾಶವೇ ಮನುಷ್ಯನ ಇಂದಿನ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಸಸ್ಯ ಸಂಕುಲವಿದ್ದರೆ ಮಾತ್ರ ಮನುಕುಲಕ್ಕೆ ಒಳಿತು ಎಂದು ದಾವಣಗೆರೆ ಉತ್ತರ ಶಾಸಕ ಎಸ್.ಎ.ರವೀಂದ್ರನಾಥ್ ಅಭಿಪ್ರಾಯಪಟ್ಟರು.
33 ನೇ ವಾರ್ಡ್‌ನಲ್ಲಿ ಪಾಲಿಕೆ ಸದಸ್ಯ ಕೆ.ಎಮ್.ವೀರೇಶ್ ಅವರು ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉದ್ಯಾನವನದಲ್ಲಿ ಒಂದು ನೂರು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ನಮಗಿಂದು ಆಮ್ಲಜನಕದ ಮಹತ್ವ ಅರಿವಾಗಿದೆ. ನೈಸರ್ಗಿಕವಾಗಿ ಸಿಗುವ ಆಮ್ಲಜನಕದ ಮೂಲವನ್ನು ನಾಶ ಮಾಡಿ ಕೃತಕ ಆಮ್ಲಜನಕದ ಮೊರೆ ಹೋಗುವ ಪರಿಸ್ಥಿತಿ ಬಂದೊದಗಿದೆ. ಮುಂದಿನ ದಿನಗಳಲ್ಲಿ ಪರಿಸರ ಸ್ನೇಹಿ ವಾತಾವರಣದ ಸೃಷ್ಟಿಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಶಾಸಕರು ಕರೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಿದ್ದ ಪಾಲಿಕೆ ಸದಸ್ಯ ಕೆ.ಎಮ್.ವೀರೇಶ್ ಅವರು ಮಾತನಾಡಿ ವಿಶ್ವ ಸಂಸ್ಥೆಯು ಈ ವರ್ಷ “ಪರಿಸರ ವ್ಯವಸ್ಥೆಯ ಮರು ಸ್ಥಾಪನೆ” ಎಂಬ ಘೋಷವಾಕ್ಯದ ಮೂಲಕ ಪರಿಸರದ ಮೂಲ ವ್ಯವಸ್ಥೆಗೆ ತಕ್ಕನಾಗಿ ಪರಿಸರವನ್ನು ಮರುಸ್ಥಾಪಿಸಬೇಕೆಂದು ಕರೆ ನೀಡಿದೆ. ಈಗಾಗಲೇ ಪರಿಸರ ನಾಶದಿಂದ ಜಾಗತಿಕ ತಾಪಮಾನವು ಸತತವಾಗಿ ಹೆಚ್ಚಾಗುತ್ತಿದೆ. ಅಂತರ್ಜಲ ಹಂತ ಹಂತವಾಗಿ ಕುಸಿಯುತ್ತಿದೆ.
ಜೊತೆಗೆ ಆಮ್ಲಜನಕದ ಕೊರತೆಯಾಗುತ್ತಿರುವುದು ನಮ್ಮ ಅನುಭವಕ್ಕೆ ಬರುತ್ತಿದೆ. ಹಾಗಾಗಿ ನಾವೆಲ್ಲರೂ ಪರಿಸರದ ಸಂರಕ್ಷಣೆಗೆ ಮುಂದಾಗೋಣ. ಗಿಡಗಳನ್ನು ನೆಡುವುದು ಮಾತ್ರವಲ್ಲದೇ ಅವುಗಳನ್ನು ಪೋಷಿಸೋಣ. ಜೊತೆಗೆ ಸ್ವಚ್ಛತೆಯನ್ನು ಕಾಪಾಡಿ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳೋಣ. 33ನೇ ವಾರ್ಡನ್ನು ಹಸಿರು ಮತ್ತು ಸ್ವಚ್ಛಮಯ ಮಾಡೋದು ನನ್ನ ಗುರಿ ಮತ್ತು ಕನಸಾಗಿದೆ. ಹಾಗಾಗಿ ಮಹಾನಗರ ಪಾಲಿಕೆಯ ಜೊತೆಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀ ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಎಮ್.ಸುರೇಶ್, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ಕೆ.ಜಿ.ಯಲ್ಲಪ್ಪ, ಲಿಂಗಪ್ಪ, ಎಲ್‌ಐಸಿ ರುದ್ರೇಶ್, ಕೂಲಂಬಿ ಬಸಣ್ಣ, ಹೆಚ್.ಎಮ್.ಮಲ್ಲಿಕಾರ್ಜುನಪ್ಪ, ವಿ.ಸಿದ್ದೇಶ್ ಮತ್ತಿತರರು ಹಾಜರಿದ್ದರು.
ವರದಿ | ಕೆ.ರಾಘವೇಂದ್ರ ನಾಯರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


