ದಿನದ ಸುದ್ದಿ
ಶಕ್ತಿಯೋಜನೆಗೆ ಚಾಲನೆ ; ಜಿಲ್ಲಾವಾರು ವರದಿ
ಸುದ್ದಿದಿನ ಡೆಸ್ಕ್ : ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಉಚಿತ ಬಸ್ ಪ್ರಯಾಣ ಸೌಲಭ್ಯ ಯೋಜನೆಗೆ ಚಾಲನೆ ನೀಡಿದರು.
ಗದಗದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಯೋಜನೆಗೆ ಚಾಲನೆ ನೀಡಿದರು.
ವಿಜಯಪುರದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಯೋಜನೆಗೆ ಚಾಲನೆ ನೀಡಿ, ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರವಾರದ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ವಾಗ್ದಾನವನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಂದಿನ ದಿನಗಳಲ್ಲಿ ಬಸ್‌ಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಶಕ್ತಿ ಯೋಜನೆಯಿಂದ ಜಿಲ್ಲೆಯಲ್ಲಿ ಲಕ್ಷಾಂತರ ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಚಿಕ್ಕಮಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಯೋಜನೆಗೆ ಚಾಲನೆ ನೀಡಿದರು.
ಚಿತ್ರದುರ್ಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ, ಸಾರಿಗೆ ನಿಗಮದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗಧೂತ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ ಎಂದು ಹೇಳಿದರು.
ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಇದು ಪೂರಕವಾಗಿದೆ. ಬಡವರ ಪರ ಯೋಜನೆಗಳಿಂದ ರಾಜ್ಯದಲ್ಲಿ ಉದ್ಯೋಗ ಮತ್ತು ಆದಾಯ ಹೆಚ್ಚಾಗಲಿದೆ ಎಂದು ಹೇಳಿದರು.
ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಸರ್ಕಾರ ಮಹಿಳೆಯರಿಗಾಗಿ ಇದನ್ನು ಜಾರಿಗೆ ತಂದಿದ್ದು, ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಮಹಿಳೆಯರು ನಗರ ಸಾರಿಗೆ ಸಾಮಾನ್ಯ ಹಾಗೂ ವೇಗಧೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಶಕ್ತಿಯೋಜನೆ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.
ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ್ ಮಾತನಾಡಿ, ಮಹಿಳಾ ಸಶಕ್ತಿಕರಣಕ್ಕೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಇದರಿಂದ ಪ್ರಯೋಜನವಾಗಲಿದೆ ಎಂದರು.
ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿ ಹೊಳಿ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು ಇಂದಿನಿಂದಲೇ ಮಹಿಳೆಯರು, ವಿದ್ಯಾರ್ಥಿನಿಯರು ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದರು.
ಚಾಮರಾಜನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಉಚಿತ ಪ್ರಯಾಣ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪಕ್ಷ ನೀಡಿದ್ದ ವಾಗ್ದಾನದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243