ದಿನದ ಸುದ್ದಿ
ಶಿವಮೊಗ್ಗ ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ ; ಅರ್ಹ ಪಿಂಚಣಿದಾರರಿಗೆ ಪಿಂಚಣಿ ಒದಗಿಸಲು ಕ್ರಮ: ಐವನ್ ಡಿಸೋಜಾ
ಸುದ್ದಿದಿನ,ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ಮಂದಿಗೆ ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ. ಪಿಂಚಣಿಯನ್ನೆ ಅವಲಂಬಿಸಿರುವ ಇಂತಹ ಫಲಾನುಭವಿಗಳಿಗೆ ಆದಷ್ಟು ಬೇಗನೆ ಸೌಲಭ್ಯ ಒದಗಿಸಲು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ತಿಳಿಸಿದರು.
ಅಂತ್ಯಸಂಸ್ಕಾರ ಯೋಜನೆ ಅಡಿ ಅನುದಾನ ಕೊರತೆಯಿಂದ ಸಕಾಲದಲ್ಲಿ ಸೌಲಭ್ಯ ಒದಗಿಸಲು ಸಾಧ್ಯವಾಗದೇ 4591 ಅರ್ಜಿಗಳು ಜಿಲ್ಲೆಯಲ್ಲಿ ಬಾಕಿ ಇದೆ. ಇದನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಕಾಲ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ನಿರಂತರವಾಗಿ ಪ್ರಥಮ ಸ್ಥಾನ ಉಳಿಸಿಕೊಂಡು ಬಂದಿದೆ. ನಿಗದಿತ ವೇಳೆಯಲ್ಲಿ ಸರ್ಕಾರಿ ಸೇವೆ ಒದಗಿಸಲಾಗುತ್ತಿರುವುದಕ್ಕೆ ಇದು ಸಾಕ್ಷಿ. ಇದನ್ನು ಉಳಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ 73960 ಫಲಾನುಭವಿಗಳಿಗೆ, ವೃದ್ಧಾಪ್ಯ ವೇತನ ಯೋಜನೆಯಡಿ 20864, ಅಂಗವಿಕಲ ಯೋಜನೆಯಡಿ 28333, ವಿಧವಾ ವೇತನ ಯೋಜನೆಯಡಿ 51794, ಮನಸ್ವಿನಿ ಯೋಜನೆಯಡಿ 3504, ಮೈತ್ರಿ ಯೋಜನೆಯಡಿ 22, ರಾಷ್ಟಿಯ ಕುಟುಂಬ ನೆರವು ಯೋಜನೆಯಡಿ 10744, ಅಂತ್ಯಸಂಸ್ಕಾರ ಯೋಜನೆಯಡಿ 30259, ಆದರ್ಶ ವಿವಾಹ ಯೋಜನೆಯಡಿ 314 ಮಂದಿಗೆ ನೆರವು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.
ಪಿಂಚಣಿ ಅದಾಲತ್
ಮುಂದಿನ ತಿಂಗಳು ಜಿಲ್ಲಾ ಮಟ್ಟದ ಪಿಂಚಣಿ ಅದಾಲತ್ ಆಯೋಜಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 442ಕಂದಾಯ ಅದಾಲತ್‌ಗಳನ್ನು ಮಾಡಲಾಗಿದ್ದು, 54910 ಅರ್ಜಿಗಳ ಪೈಕಿ 54818 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕಂದಾಯ ಅದಾಲತ್‌ಗಳನ್ನು ನಿರಂತರವಾಗಿ ಆಯೋಜಿಸಲು ಸೂಚಿಸಲಾಗಿದೆ ಎಂದು ಅವರು ಬಳಿಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರೈತರ ಸಾಲಮನ್ನಾ
ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಡಿ ವಾಣಿಜ್ಯ ಬ್ಯಾಂಕುಗಳಲ್ಲಿ ಬೆಳೆಸಾಲ ಪಡೆದ 55171 ರೈತರ 943.49ಕೋಟಿ ರೂ. ಸಾಲದ ಪೈಕಿ ಈಗಾಗಲೇ 130.31ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ. ಇನ್ನು 812.83ಕೋಟಿ ರೂ. ಬಿಡುಗಡೆಗೆ ಬಾಕಿಯಿದ್ದು, ಪಾವತಿಗೆ ಕ್ರಮ ಕೈಗೊಳ್ಳಲಾಗುವುದು.
ಸಹಕಾರ ವಲಯದಲ್ಲಿ 33947 ರೈತರ 139.39ಕೋಟಿ ರೂ. ಸಾಲದ ಪೈಕಿ 77.56ಕೋಟಿ ರೂ. ಸಾಲಮನ್ನಾ ಮಾಡಲಾಗಿದ್ದು, 61.83ಕೋಟಿ ರೂ. ಬಿಡುಗಡೆಗೆ ಬಾಕಿಯಿದೆ ಎಂದು ಅವರು ಹೇಳಿದರು.
ಬಗರ್‌ಹುಕುಂ ಭೂಮಿ ಮಂಜೂರು: ಜಿಲ್ಲೆಯಲ್ಲಿ ಬಗರ್‌ಹುಕುಂ ಯೋಜನೆಯಡಿ ರಿಯಾಯಿತಿ ದರದಲ್ಲಿ ಅರ್ಹರಿಗೆ 4.38 ಎಕ್ರೆವರೆಗೆ ಒಟ್ಟು 78ಸಾವಿರ ಎಕ್ರೆ ಭೂಮಿ ಮಂಜೂರು ಮಾಡಿರುವುದು ದಾಖಲೆಯಾಗಿದೆ. ಅರಣ್ಯ ಭೂಮಿ ಸಮಸ್ಯೆಯಿಂದಾಗಿ 942 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಇದನ್ನು ಬಗೆಹರಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಜಾರಿಯಲ್ಲಿರುವ ಪ್ರಾಪರ್ಟಿ ಕಾರ್ಡ್ ಯೋಜನೆಯಿಂದ ಸಮಸ್ಯೆಗಳು ಉಂಟಾಗಿದ್ದು, ಈ ಯೋಜನೆಯನ್ನು ಕಡ್ಡಾಯಗೊಳಿಸದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ.ಅನುರಾಧ, ಶಿವಮೊಗ್ಗ ಎಸಿ ಪ್ರಕಾಶ್, ಸಾಗರ ಎಸಿ ದರ್ಶನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


