ದಿನದ ಸುದ್ದಿ

ಸಿದ್ದು , ಡಿಕೆ ಪ್ರಮಾಣ ವಚನ ; ಗಣ್ಯಾತಿಗಣ್ಯರ ಉಪಸ್ಥಿತಿ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ಧವಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಸಿದ್ಧತೆಗಳು ಭರದಿಂದ ಸಾಗಿವೆ. ಸಮಾರಂಭಕ್ಕೆ ರಾಜ್ಯದ ಮೂಲೆ – ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಭದ್ರತಾ ಕಾರ್ಯಕ್ಕಾಗಿ ಒಂದು ಸಾವಿರದ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪಶ್ಚಿಮ ಬಂಗಾಳದ ಟಿಎಂಸಿ ಉಪನಾಯಕ ಡಾ.ಕಕೋಲಿ ಘೋಷ್ ದಸ್ತಿದಾರ್, ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್, ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಅಧ್ಯಕ್ಷ ಫಾರುಕ್ ಅಬ್ದುಲ್ಲಾ, ಸಿಪಿಐಎಂ ಮುಖಂಡ ಸೀತಾರಾಮ್ ಯಚೂರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್‌ವೀರ್ ಸಿಂಗ್ ಸುಖು ಅವರನ್ನೂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಈ ನಡುವೆ, ನೂತನ ಸಚಿವ ಸಂಪುಟ ಸೇರ್ಪಡೆಗೆ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಂಭಾವ್ಯ ಸಚಿವರ ಪಟ್ಟಿಗೆ ಕಾಂಗ್ರೆಸ್ ವರಿಷ್ಠರಿಂದ ಅನುಮೋದನೆ ಪಡೆಯಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version