Connect with us

ರಾಜಕೀಯ

ಶಿವಮೊಗ್ಗ | 144 ಸೆಕ್ಷನ್ ಉಲಂಘನೆ ; ಇದು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಹರ್ಷ ಅವರ ಕೊಲೆಯಾದದ್ದು ಭಾನುವಾರ. ಮುಂಜಾಗ್ರತಾ ಕ್ರಮವಾಗಿ ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿಯ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ ಎಂದರು

ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಮತ್ತು ಏಕೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ. ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ, ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ, ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡುತ್ತಾರೆ, ಈ ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆ.

ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ಅದಕ್ಕೆ ನನ್ನ ತಕರಾರು ಇಲ್ಲ. ಅದರ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ.

ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಉಂಟಾ? ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.

ಸಚಿವ ಈಶ್ವರಪ್ಪ ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಕಾನೂನು, ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending