ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243