ದಿನದ ಸುದ್ದಿ
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕ ಹಾಗೂ ಜವಾಬ್ದಾರಿಯುತ ಸಮಾಜದ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದರು.
http://Visit : www.suddidina.com
ತಾಲ್ಲೂಕು ನಿವೃತ್ತ ನೌಕರರ ಸಂಘ ಹಾಗೂ ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದವತಿಯಿಂದ ನಗರದ ಮಾಳಪ್ಪನಹಟ್ಟಿ ರಸ್ತೆಯಲ್ಲಿನ ತೀಕ್ಷ್ಣ ಅಂಧ ಮಕ್ಕಳ ಪುನಶ್ಚೇತನ ವಸತಿಯುತ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಸಂಗೀತ ವಾಧೋಪಕರಣಗಳ ಕೂಡುಗೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಸಂಗೀತ ಶಿಕ್ಷಣ ನೀಡಿ ಅವರ ಬದುಕಿಗೆ ಬೆಳಕಾಗುವ ಉದ್ದೇಶದಿಂದ ವಾದ್ಯೋಪಕರಣಗಳನ್ನು ವಿತರಿಸಲಾಗುತ್ತಿದೆ. ನೌಕರಿಯಿಂದ ನಿವೃತ್ತರಾದ ನಂತರ ಕೇವಲ ವೈಯಕ್ತಿಕ ಜೀವನಕ್ಕೆ ಸೀಮಿತವಾಗದೆ, ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ನಿವೃತ್ತ ನೌಕರರ ಸಂಘದ ಶ್ರಮವನ್ನು ಕೆ.ಎಸ್.ನವೀನ್ ಮುಕ್ತಕಂಠದಿಂದ ಶ್ಲಾಘಿಸಿದರು.
ಅಂಧರಾಗಿದ್ದರೂ ತಮ್ಮ ಅಸಾಧಾರಣ ಗಾಯನ ಹಾಗೂ ಸಂಗೀತ ಸಾಧನೆಯಿಂದ ಜಗತ್ತಿಗೇ ಮಾದರಿಯಾದ ಪಂಡಿತ ಪುಟ್ಟರಾಜ ಗವಾಯಿಗಳ ಉದಾಹರಣೆಯನ್ನು ನೀಡಿದ ಕಲೆ ಎಂಬುದು ಯಾರದ್ದೂ ವೈಯಕ್ತಿಕ ಸ್ವತ್ತಲ್ಲ. ಇಂದು ಮಕ್ಕಳಿಗೆ ನೀಡಲಾಗುತ್ತಿರುವ ಹಾರ್ಮೋನಿಯಂ, ತಬಲಾ ಹಾಗೂ ಕೀಬೋರ್ಡ್ಗಳಂತಹ ವಾದ್ಯೋಪಕರಣಗಳ ಮೂಲಕ ಸೂಕ್ತ ತರಬೇತಿ ನೀಡಿದರೆ, ಈ ಮಕ್ಕಳೂ ಸಹ ಭವಿಷ್ಯದಲ್ಲಿ ಉನ್ನತ ಮಟ್ಟದ ಸಂಗೀತಗಾರರಾಗಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಕೀರ್ತಿ ತರಬಲ್ಲರು ಎಂದು ವಿಶ್ವಾಸ ವ್ಯಕ್ತಪಡಿಸಿ ಈ ಮಕ್ಕಳಿಗೆ ಪ್ರತಿದಿನ ನಿಯಮಿತವಾಗಿ ಸಂಗೀತ ಶಿಕ್ಷಕರ ಮೂಲಕ 2 ರಿಂದ 3 ಗಂಟೆಗಳ ಕಾಲ ತರಬೇತಿ ನೀಡಿ, ಅವರಲ್ಲಿರುವ ಪ್ರತಿಭೆಯನ್ನು ಹೊರತರಬೇಕು ಎಂದು ಸಂಸ್ಥೆಯ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.
ವಿಶೇಷ ಚೇತನ ಮಕ್ಕಳನ್ನು ಭಿಕ್ಷಾಟನೆ ಅಥವಾ ಸಮಾಜದ ಕೀಳರಿಮೆಯಿಂದ ದೂರವಿಟ್ಟು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ಇಂತಹ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ. ತಾಲೂಕು ನಿವೃತ್ತ ನೌಕರರ ಸಂಘ ಹಾಗೂ ಪುನಶ್ಚೇತನ ಸಂಸ್ಥೆಯ ಈ ಮಾನವೀಯ ಕಳಕಳಿಯ ಕಾರ್ಯವು ಸಮಾಜಕ್ಕೆ ಮಾದರಿಯಾಗಿದೆ ಎಂದ ಅವರು ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕ ಹಾಗೂ ಜವಾಬ್ದಾರಿಯುತ ಸಮಾಜದ ಕರ್ತವ್ಯವಾಗಿದೆ ಎಂದು ಕೆ.ಎಸ್.ನವೀನ್ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಸಂಘ ಹಾಗೂ ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದವ ಅಧ್ಯಕ್ಷರಾದ ಬಿ.ಕೆ.ಹನುಮಂತಪ್ಪ ಮಾತನಾಡಿ, ಸಂಘದ ನಿವೃತ್ತ ನೌಕರರು ಕೇವಲ ದಿನನಿತ್ಯದ ಚಟುವಟಿಕೆಗಳಿಗೆ ಸೀಮಿತವಾಗದೆ ಇಂತಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ. ತಾಲೂಕಿನ ನಿವೃತ್ತ ನೌಕರರ ಸಂಘವು ಹಮ್ಮಿಕೊಳ್ಳುತ್ತಿರುವ ಉತ್ತಮ ಕಾರ್ಯ ಯೋಜನೆಗಳಿಗೆ ಸಾರ್ವಜನಿಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿ ಈ ಹಿಂದೆ ಗೋನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರಾಶ್ರಿತರಿಗೆ ವೈದ್ಯಕೀಯ ಕಿಟ್‌ಗಳನ್ನು ವಿತರಿಸಲಾಗಿತ್ತು. ಅದೇ ರೀತಿಯಲ್ಲಿ ಈ ಶಾಲೆಯ ಮಕ್ಕಳಿಗೆ ಶಾಶ್ವತವಾಗಿ ಉಪಯೋಗವಾಗಲಿ ಎಂಬ ಉದ್ದೇಶದಿಂದ ಸಂಗೀತೋಪಕರಣಗಳ ಪರಿಕರಗಳನ್ನು ವಿತರಿಸಲಾಗಿದೆ ಎಂದರು.
ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಸಹಕರಿಸಬೇಕು ಪ್ರಸ್ತುತ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಅವರ ಕುಟುಂಬದವರಿಗೆ ಸಂಘದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿ ನಿವೃತ್ತ ನೌಕರರ ಸಂಘವು ಮುಂದೆಯೂ ಇಂತಹ ಹಲವಾರು ನಿಸ್ವಾರ್ಥ ಸಾಮಾಜಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಿದೆ ಎಂದು ಹನುಮಂತಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ತೀಕ್ಷ್ಣ ಅಂಧ ಮಕ್ಕಳ ಪುನಶ್ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಕೆ.ಎಸ್.ಕೌಶಲ್ಯ ಕಾರ್ಯದರ್ಶಿ ಕೆ.ಎಸ್.ಕಾರ್ತಿಕ್, ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಪರಮೇಶ್ವರಪ್ಪ ಉಪಾಧ್ಯಕ್ಷರಾದ ಪಿ.ಎಸ್.ಶಿವಕುಮಾರ್, ಸಹ ಕಾರ್ಯದರ್ಶಿ ಎ.ಜಿ.ದೇವೇಂದ್ರಪ್ಪ, ಖಂಜಾಚಿ ಎಸ್.ಹಾಲಾನಾಯ್ಕ್, ನಿರ್ದೆಶಕರಾದ ಇ.ನಾಗರಾಜ್, ಟಿ.ಉಮಾಶಂಕರ್, ಚಿತ್ರದುರ್ಗ ತಾಲ್ಲೂಕು ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾದ ಮಾದಯ್ಯ, ಶ್ರೀಮತಿ ಪ್ರೇಮಾರಾಜಾರಾಮ್, ಖಂಜಾಚಿ ಚಿನ್ನಪ್ಪ ಕೃಷ್ಣಮೂರ್ತಿ, ಜಿ.ವಿ.ನಾಗರಾಜ್, ಕೆ.ನಾಗರಾಜ್ ಸಲಹಾ ಸಮಿತಿ ಸದಸ್ಯರಾದ ವಿ.ಬಿ.ತಿಮ್ಮಾರೆಡ್ಡಿ, ಬಿಎಸ್.ಚಂದ್ರಶೇಖರಪ್ಪ, ಎಂ.ಶ್ರೀನಿವಾಸ್ ಮೂರ್ತಿ, ಕೆ.ರವಿಶಂಕರ್ ಭಾಗವಹಿಸಿದ್ದರು.

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ1 day agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ1 day ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ1 day agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ1 day agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ13 hours agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ1 day agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ13 hours agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ1 day agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ



