ದಿನದ ಸುದ್ದಿ
ದಾವಣಗೆರೆ | ಸತತ 11 ಗಂಟೆಗಳ ಶಸ್ತ್ರಚಿಕಿತ್ಸೆ ; ಯುವಕನ ಬಾಳಿಗೆ ಬೆಳಕಾದ ಎಸ್‌ಎಸ್ ನಾರಾಯಣ ಆಸ್ಪತ್ರೆ ವೈದ್ಯರು
ಸುದ್ದಿದಿನ,ದಾವಣಗೆರೆ: ನಾಲ್ಕು ವರ್ಷಗಳ ಕಾಲ ಪದೇ ಪದೇ ತೀವ್ರವಾದ ಹೊಟ್ಟೆನೋವು, ಜ್ವರ, ಬಳಲಿಕೆಯಿಂದ ನರಳಿದ 26 ವರ್ಷದ ಯುವಕನಿಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವೈದ್ಯರು ಅಕ್ಷರಶಃ ಜೀವದಾನ ಮಾಡಿದ್ದಾರೆ!
ಅಪರೂಪವಾದ, ಅತ್ಯಂತ ಸಂಕೀರ್ಣವಾದ ಲೀವರ್ (ಯಕೃತ್ತ)ನ ರಕ್ತದ ಹರಿವಿನ ಸಮಸ್ಯೆಯಾದ ಎಕ್ಸ್‌ಟ್ರಾಹೆಪಾಟಿಕ್ ಪೋರ್ಟಲ್ ವೀನಸ್ ಅಬ್ಸ್ಟ್ರಕ್ಷನ್ (EHPVO) ನಿಂದ ಬಳಲುತ್ತಿದ್ದ ಈ ರೋಗಿಯ ಪ್ರಾಣ ಉಳಿಸಲು, ವೈದ್ಯರು ಬರೋಬ್ಬರಿ 11 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಈ ಯುವಕನಿಗೆ ಹೊಟ್ಟೆ ನೋವು, ಪದೇ ಪದೇ ಬರುವ ಜ್ವರ, ದೇಹದ ನಿಶ್ಶಕ್ತಿ, ಮತ್ತು ಏನನ್ನೂ ತಿನ್ನಲು ಆಗದಿರುವ ಸಮಸ್ಯೆಗಳು ದಿನನಿತ್ಯದ ಸಂಗತಿಯಾಗಿದ್ದವು. ತನ್ನ ರೋಗಕ್ಕೆ ಚಿಕಿತ್ಸೆ ಹುಡುಕಿಕೊಂಡು ಅದೆಷ್ಟೋ ಆಸ್ಪತ್ರೆಗಳಿಗೆ ಅಲೆದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ, ಅವನಿಗೆ ಜಾಂಡೀಸ್ ಕಾಣಿಸಿಕೊಂಡು, ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿ, ಮೈ ನಡುಗುವಿಕೆ ಶುರುವಾಗಿತ್ತು. ಬದುಕಿನ ಆಸೆಯೇ ದೂರವಾಗಿ, ನಿರಂತರ ಆಸ್ಪತ್ರೆ ಭೇಟಿಗಳಿಂದ ಹತಾಶನಾಗಿದ್ದ ಆ ಯುವಕ, ಕೊನೆಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ತನ್ನ ಭರವಸೆಯನ್ನು ಕಂಡುಕೊಂಡ.
ಅವರು ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ಗೆ ಭೇಟಿ ನೀಡಿದಾಗ, ಸರ್ಜಿಕಲ್ ಗ್ಯಾಸ್ಟ್ರೋಎಂಟರೋಲಾಜಿಸ್ಟ್ ಡಾ. ಆರ್.ಕೆ. ಹನುಮಂತ್ ನಾಯ್ಕ್ ನೇತೃತ್ವದ ವೈದ್ಯರ ತಂಡವು ರೋಗಿಯ ಪೋರ್ಟಲ್ ವೇನ್ (ಕರುಳಿನಿಂದ ಯಕೃತ್ತಿಗೆ ರಕ್ತವನ್ನು ಕೊಂಡೊಯ್ಯುವ ಮುಖ್ಯ ರಕ್ತನಾಳ) ಹಳೆಯ ರಕ್ತ ಹೆಪ್ಪುಗಟ್ಟುವಿಕೆಯಿಂದ ರಕ್ತ ಸಂಚಾರ ನಿರ್ಬಂಧವಾಗಿರುವದನ್ನು ಪತ್ತೆಹಚ್ಚಿತು. ಇದರಿಂದಾಗಿ, ರಕ್ತದ ಹರಿವನ್ನು ಮುಂದುವರೆಸಲು ದೇಹವು ಸಣ್ಣ ಬೈಪಾಸ್ ರಕ್ತನಾಳಗಳನ್ನು (ಕಾವರ್ನಸ್ ಟ್ರಾನ್ಸ್‌ಫಾರ್ಮೇಶನ್ ಎಂದು ಕರೆಯಲ್ಪಡುವ ಸ್ಥಿತಿ) ಸೃಷ್ಟಿಸಿತ್ತು. ಆದಾಗ್ಯೂ, ಇದು ಗುಲ್ಮ(Spleen)ದ ಊತ (ಸ್ಪ್ಲೆನೋಮೆಗಾಲಿ), ಪಿತ್ತನಾಳಗಳ ಹಿಗ್ಗುವಿಕೆ ಮತ್ತು ಯಕೃತ್ತಿನ ರಕ್ತನಾಳಗಳಲ್ಲಿ ಅಧಿಕ ಒತ್ತಡಕ್ಕೆ (ಪೋರ್ಟಲ್ ಹೈಪರ್ಟೆನ್ಷನ್) ಕಾರಣವಾಗಿತ್ತು. ಇದು ಹೊಟ್ಟೆ ಮತ್ತು ಪಿತ್ತ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿ, ರಕ್ತಸ್ರಾವದ ಅಪಾಯಗಳು ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಕಾರಣವಾಗಿತ್ತು.
ಇದಕ್ಕೆ ಚಿಕಿತ್ಸೆ ನೀಡಲು, ವೈದ್ಯಕೀಯ ತಂಡವು “ಪ್ರಾಕ್ಸಿಮಲ್ ಸ್ಪ್ಲೆನೋರೆನಲ್ ಶಂಟ್” ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಸರಳವಾಗಿ ಹೇಳುವುದಾದರೆ, ಶಸ್ತ್ರಚಿಕಿತ್ಸಕರು ಸ್ಪ್ಲೆನಿಕ್ ವೇನ್ (ಗುಲ್ಮದಿಂದ) ಅನ್ನು ಎಡ ಮೂತ್ರಪಿಂಡದಿಂದ ಸಂಪರ್ಕಿಸಿ, ನಿರ್ಬಂಧಿತ ಪೋರ್ಟಲ್ ವೇನ್ ಅನ್ನು ಬೈಪಾಸ್ ಮಾಡಲು ರಕ್ತಕ್ಕೆ ಹೊಸ ಮಾರ್ಗವನ್ನು ಸೃಷ್ಟಿಸಿದರು. ಇದು ಯಕೃತ್ತಿನ ರಕ್ತನಾಳಗಳಲ್ಲಿನ ಒತ್ತಡವನ್ನು ಕಡಿಮೆ ಮಾಡಿ ಮತ್ತು ಮುಂದಿನ ತೊಡಕುಗಳನ್ನು ನಿವಾರಿಸುತ್ತದೆ.
ರೋಗಿಯ ಬಗ್ಗೆ ಮಾತನಾಡಿದ ಡಾ. ನಾಯ್ಕ, ರೋಗಿಯನ್ನು ದಾಖಲಿಸಿದಾಗ ಅವರ ಹಿಮೋಗ್ಲೋಬಿನ್ ಮಟ್ಟ, ಡಬ್ಲ್ಯೂಬಿಸಿ, ಪ್ಲೇಟ್‌ಲೆಟ್ ಸಂಖ್ಯೆಗಳು ತುಂಬಾ ಕಡಿಮೆ ಇದ್ದವು ಇದರಿಂದಾಗಿ ಅವರಿಗೆ ಆಗಾಗ್ಗೆ ಸೋಂಕು ತಗುಲುತ್ತಿತ್ತು, ಅವರ ರಕ್ತನಾಳಗಳು, ಪಿತ್ತನಾಳಗಳು ಹಿಗ್ಗಿದ್ದವು. ಶಸ್ತ್ರಚಿಕಿತ್ಸೆ ಮಾಡದಿದ್ದರೆ ರಕ್ತನಾಳಗಳು ಛಿದ್ರಗೊಂಡು ಮಾರಣಾಂತಿಕವಾಗುವ ಸಾಧ್ಯತೆ ಇತ್ತು ಎಂದರು.
ಶಸ್ತ್ರಚಿಕಿತ್ಸೆಯ ನಂತರ, ರೋಗಿಯು ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಶಕ್ತಿ ಮತ್ತು ಸಾಮಾನ್ಯ ಹಸಿವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ರೋಗಿಯು ಆಸ್ಪತ್ರೆಯಿಂದ ಗುಣಮುಖರಾಗಿ ಇತ್ತೀಚೆಗೆ ಮನೆಗೆ ಹಿಂತಿರುಗಿದ್ದಾರೆ ಎಂದರು..
ಡಾ. ನಾಯ್ಕ್ ಅವರು, ಆರಂಭಿಕ ರೋಗನಿರ್ಣಯ ಮತ್ತು ವಿಶೇಷ ಚಿಕಿತ್ಸೆಯು ರೋಗಿಯ ಜೀವವನ್ನು ಉಳಿಸಿದೆ ಮತ್ತು ಅವರ ಜೀವನದ ಗುಣಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿದೆ ಎಂದು ಹೇಳಿದರು.
ಈ ಪ್ರಕರಣವು ದೀರ್ಘಕಾಲದ ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಗಮನ ಕೊಡುವುದು ಮತ್ತು ತಜ್ಞ ವೈದ್ಯರ ಸಹಾಯ ಪಡೆಯುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಶಸ್ತ್ರಚಿಕಿತ್ಸಾ ತಂತ್ರಗಳು ಮತ್ತು ಇಮೇಜಿಂಗ್‌ನಲ್ಲಿನ ಪ್ರಗತಿಯೊಂದಿಗೆ, EHPVO ನಂತಹ ಅಪರೂಪದ ಯಕೃತ್ತಿನ ಅಸ್ವಸ್ಥತೆಗಳಿಗೂ ಈಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.
ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಸೆಂಟರ್ ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸುನೀಲ್ ಭಂಡಾರಿಗಲ್ ಅವರು ಅತಿ ಕ್ಲೀಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ವೈದ್ಯಕೀಯ ತಂಡವನ್ನು ಅಭಿನಂದಿಸಿದ್ದು. ಇದು ನಾರಾಯಣ ಹೆಲ್ತ್‌ನಲ್ಲಿ ಅತಿ ಕ್ಲೀಷ್ಟಕರವಾದ ಆರೋಗ್ಯ ಸಮಸ್ಯೆಗಳಿಗೆ ಆಧುನಿಕ ಚಿಕಿತ್ಸೆ ಲಭ್ಯವಿದೆ ಎಂಬುದನ್ನು ಸಾರುತ್ತದೆ ಎಂದರು.
ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದ ವೈದ್ಯರ ತಂಡದಲ್ಲಿ ಅರಿವಳಿಕೆ ತಜ್ಞರಾದ ಡಾ. ಸಾಗರ್ ಎಸ್ ಎಂ ಮತ್ತು ಡಾ. ಜಯಶ್ರೀ ಪಾಟೀಲ, ಇಂಟೆನ್ಸಿವಿಸ್ಟ್ ಡಾ. ವಿಶ್ವಾಸ್ ಜಿಕೆ ಮತ್ತು ಡಾ. ಕಿರಣ್ ಬಿಆರ್ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




