ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ: ಫಾರೀಹ ತಬಸುಮ್ ಎಲ್ ಶಾಲೆಗೆ ಪ್ರಥಮ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ನವಿಲೇಹಾಳು ಗ್ರಾಮದ ನಿವಾಸಿಯಾದ ಲಿಯಾಕತ್ ಅಲಿ ಮತ್ತು ಕೌಸರ್ ಬಾನು. ದಂಪತಿಯ ಪುತ್ರಿ ಫಾರೀಹಾ ತಬಸುಮ್ ಎಲ್. ಅವರ ಎಸ್ ಎಸ್ ಎಲ್ ಸಿ ಸಾಧನೆಯು ಗಮನ ಸೆಳೆದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 592 (94.72%) ಅಂಕಗಳನ್ನು ಗಳಿಸುವ ಮೂಲಕ ಕೆರೆಬಿಳಚಿಯ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫಾರೀಹಾ ತಬಸುಮ್ ಅವರು ಕನ್ನಡದಲ್ಲಿ 125/120, ಇಂಗ್ಲೀಷ್ ವಿಷಯದಲ್ಲಿ 100/100 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯ ಜೊತೆಗೆ ಶಾಲೆಗೆ ಪ್ರಥಮ ಸ್ಥಾನದಲ್ಲಿ ಹೊರಹೊಮ್ಮಿದ್ದಾರೆ.
ಮಗಳ ಶೈಕ್ಷಣಿಕ ಸಾಧನೆಗೆ ಪ್ರೇರಣೆ ನೀಡುವ ಮೂಲಕ ತರಬೇತಿ ನೀಡಿದ ಕೆರೆಬಿಳಚಿಯ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ವಿರೇಶ್, ಕನ್ನಡ ಶಿಕ್ಷಕರಾದ ಅಮೃತ್ ಕೆ ಪಿ.
ಉರ್ದು ಶಿಕ್ಷಕರಾದ ಅಸಾದುಲ್ಲಾ ಖಾನ್., ಹಿಂದಿ ಶಿಕ್ಷಕರಾದ ಮಾರುತಿ ನಾಯಕ್., ವಿಜ್ಞಾನ ಶಿಕ್ಷಕರಾದ ಪರ್ವಿಜಾ಼ ಜಹಾನುಮ., ಸಮಾಜ ಶಿಕ್ಷಕರಾದ ರಂಜಿತ್., ಇಂಗ್ಲೀಷ್ ಶಿಕ್ಷಕರಾದ ವಿಶ್ವನಾಥ್., ಕಂಪ್ಯೂಟರ್ ಶಿಕ್ಷಕರಾದ ಮಂಜುನಾಥ್., ದೈಹಿಕ ಶಿಕ್ಷಕರಾದ ಮಮತ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಶಿಸ್ತು, ಶ್ರದ್ದೆ, ಪರಿಶ್ರಮದಿಂದ ಓದಿ ಶಾಲೆಗೆ, ತನ್ನ ಊರಿಗೆ. ಗುರುಗಳಿಗೆ ಮತ್ತು ತಂದೆ ತಾಯಿಗೆ ಕೀರ್ತಿಯನ್ನು ತಂದಿದ್ದಾರೆ. ಪೋಷಕರು. ಶಾಲೆಯ ಶಿಕ್ಷಕ ವೃಂದದವರು ಮತ್ತು ಊರಿನ ಜನ ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ದಿನದ ಸುದ್ದಿ
ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34 ಕ್ಯಾಂಟೀನ್‌ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಹೈಲೈಟ್ಸ್ |
|
http://Visit : www.suddidina.com
ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತೆಗೆ ಒತ್ತು
ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಕ್ಯಾಂಟೀನ್ ಆಹಾರವನ್ನೇ ಅವಲಂಬಿಸಿರುತ್ತಾರೆ. ಹೀಗಾಗಿ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಆಹಾರ ಪದಾರ್ಥಗಳ ಸಂಗ್ರಹಣೆ, ಲೇಬಲಿಂಗ್ ಹಾಗೂ ಅವಧಿ ಪರಿಶೀಲನೆ ಅತ್ಯಂತ ಮಹತ್ವದ್ದಾಗಿದೆ.
ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ವಿವಿಧ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳನ್ನು ಪರಿಶೀಲಿಸಿ, ಆಹಾರ ತಯಾರಿಕೆಯಿಂದ ಹಿಡಿದು ಪದಾರ್ಥಗಳ ಸಂಗ್ರಹಣೆವರೆಗೆ ಹಲವು ಅಂಶಗಳನ್ನು ಪರಿಶೀಲಿಸಿದ್ದಾರೆ. ನಿಯಮ ಪಾಲನೆಯಲ್ಲಿ ವ್ಯತ್ಯಾಸ ಕಂಡುಬಂದ ಕ್ಯಾಂಟೀನ್‌ಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಅವಧಿ ಮೀರಿದ ರವೆ, ಹಾಲು ಪತ್ತೆ
ಪರಿಶೀಲನೆ ವೇಳೆ ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಇದೇ ವೇಳೆ ಅಡುಗೆ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ 07 ಕೆ.ಜಿ. ಅವಧಿ ಮೀರಿದ ರವೆ ಹಾಗೂ 08 ಲೀಟರ್ ಅವಧಿ ಮೀರಿದ ಹಾಲು ಪತ್ತೆಯಾಗಿದೆ.
ವಿದ್ಯಾರ್ಥಿಗಳ ಸೇವನೆಗೆ ಬಳಸುವ ಆಹಾರ ಪದಾರ್ಥಗಳು ಅವಧಿ ಮೀರಿದ ಬಳಿಕವೂ ಅಡುಗೆಮನೆಯಲ್ಲಿ ಸಂಗ್ರಹಿಸಿರುವುದು ಗಂಭೀರ ಲೋಪವಾಗಿದೆ. ಅಧಿಕಾರಿಗಳು ಈ ಪದಾರ್ಥಗಳನ್ನು ತಕ್ಷಣ ಜಪ್ತಿ ಮಾಡಿಕೊಂಡಿದ್ದು, ಸಂಬಂಧಿತ ಕ್ಯಾಂಟೀನ್ ವಿರುದ್ಧ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಸಂಬಂಧಿತ ಆಹಾರ ಉದ್ದಿಮೆದಾರರ ವಿರುದ್ಧ ಅನ್ವಯವಾಗುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಪ್ರಕರಣಗಳನ್ನು ಸಕ್ಷಮ ಪ್ರಾಧಿಕಾರವಾದ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯಕ್ಕೆ ಆದ್ಯತೆ
ವೈದ್ಯಕೀಯ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ಭವಿಷ್ಯದ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಅವರ ಹಾಸ್ಟೆಲ್ ಆಹಾರದ ಗುಣಮಟ್ಟದ ಬಗ್ಗೆ ಇಲಾಖೆ ಹೆಚ್ಚಿನ ನಿಗಾ ವಹಿಸಿರುವುದು ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲೂ ಇಂತಹ ಪರಿಶೀಲನೆಗಳು ಮುಂದುವರಿಯುವ ಸಾಧ್ಯತೆ ಇದ್ದು, ಕ್ಯಾಂಟೀನ್ ನಿರ್ವಹಣೆ ಮಾಡುವವರು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ.

ದಿನದ ಸುದ್ದಿ
ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ
ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ3 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ4 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ4 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ4 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ4 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


