ದಿನದ ಸುದ್ದಿ

ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.

ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.

ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.

ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version