ದಿನದ ಸುದ್ದಿ

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯನ್ನು ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್, ಸಿಸಿಟಿವಿ ಲೈವ್ ವೆಬ್‌ಕಾಸ್ಟಿಂಗ್ ಮೂಲಕ ನಡೆಸಲಾಗುತ್ತದೆ. ಜಿಲ್ಲೆಯಲ್ಲಿರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷಿತವಾಗಿ ಇರಿಸಲು ಸಿಸಿಟಿವಿ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷಾ ಚಟುವಟಿಕೆಗಳ ಲೈವ್ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಸೆಂಟರ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಚಟುವಟಿಕೆಗಳನ್ನು ನೇರವಾಗಿ ವೀಕ್ಷಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version