ದಿನದ ಸುದ್ದಿ
ಸಮಾಜ ಮುಖಿ ಕಲ್ಯಾಣ ಸೇವೆಯಲ್ಲಿ ತರಳಬಾಳು ಮಠಕ್ಕೆ ಅಗ್ರಸ್ಥಾನ : ಸಭಾಪತಿ ಬಸವರಾಜ ಹೊರಟ್ಟಿ
ಸುದ್ದಿದಿನ, ಸಿರಿಗೆರೆ: ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೆ ಒಂದಿಲ್ಲೊಂದು ಒತ್ತಡದ ನಡುವೆ ಜೀವಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿ ಸಾಂಸ್ಕೃತಿಕ ಬದುಕನ್ನು ಜೀವಂತವಾಗಿರಿಸಲು ಹಲವು ಮಠಮಾನ್ಯಗಳು ನಾಡಿನಲ್ಲಿ ಶ್ರಮಿಸುತ್ತಿವೆ. ಅಂಥದ್ದರಲ್ಲಿ ತರಳಬಾಳು ಗುರು ಪರಂಪರೆ ಅಗ್ರಗಣ್ಯ ಸ್ಥಾನದಲ್ಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.
ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀಗಳಾದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಶ್ರದ್ಧಾಂಜಲಿ ಸಮಾರಂಭದ ಎರಡನೇ ದಿನವಾದ ಶುಕ್ರವಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೋಟಿ ಹಣ ಕೊಟ್ಟರೂ ನೆಮ್ಮದಿಯ ಬದುಕು ಲಭ್ಯವಾಗುತ್ತಿಲ್ಲ. ಆದರೆ ಮಠಗಳು ಇಂದಿಗೂ ನೆಮ್ಮದಿಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು. ಮಠಗಳು ಉತ್ತಮವಾಗಿದ್ದರೆ ಸಮಾಜವೂ ಉತ್ತಮವಾಗಿರುತ್ತದೆ. 26 ವರ್ಷಗಳ ಹಿಂದೆ ಲಿಂಗೈಕ್ಯರಾದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರು ಇಂದಿಗೂ ಜೀವಂತವಾಗಿದ್ದಾರೆಂಬ ಭಾವ ಎಲ್ಲರಲ್ಲೂ ಮೂಡಿದೆ. ಸತ್ತರೂ ಬದುಕಿರುವಂತಹ ಹಾಗೂ ಬದುಕಿದ್ದರೂ ಸತ್ತಂತೆ ಇರುವ ಎರಡು ಬಗೆಯ ಜನರನ್ನು ನಾವು ಸಮಾಜದಲ್ಲಿ ಕಾಣುತ್ತೇವೆ. ಶಿವಕುಮಾರ ಮಹಾಸ್ವಾಮಿಗಳು ಶ್ರೇಷ್ಠ ಪರಂಪರೆಯನ್ನು ಹುಟ್ಟು ಹಾಕಿ ಭಕ್ತರು ಹಸನಾದ ಬದುಕನ್ನು ಸಾಗಿಸುವಂತೆ ಜೀವನ ಭದ್ರತೆ ನೀಡಿದರು ಎಂದು ಸ್ಮರಿಸಿದರು.
ತರಳಬಾಳು ಸ್ವಾಮಿಗಳೆಂದರೆ ನೇರ ನಡೆ ಮತ್ತು ನೇರ ನುಡಿಯ ಗುರುಗಳು. ಅವರು ಸಮಾಜದ ಆಸ್ತಿಯಂತಿದ್ದಾರೆ. ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿಯೂ ಸೇರಿದಂತೆ ಯಾರಿಗೂ ಹೆದರುವುದಿಲ್ಲ. ಆದರೆ ಕಾಲಪ್ರಜ್ಞೆಯ ವಿಚಾರ
ಬಂದ ಕೂಡಲೇ ತರಳಬಾಳು ಸ್ವಾಮಿಗಳಿಗೆ ನಾನು ಹೆದರುತ್ತೇನೆ. ಅಂತಹ ಕಾಲಪ್ರಜ್ಞೆಯ ಶಕ್ತಿ ಅವರಿಗಿದೆ ಎಂದರು. ಸಿರಿಗೆರೆಯ ವೇದಿಕೆಯಲ್ಲಿ ಹಲವು ಮಕ್ಕಳು ನೀಡಿದಂತಹ ಸಾಂಸ್ಕೃತಿಕ ಚಟುವಟಿಕೆಗಳಿಂದ ನನ್ನ ಮನಸ್ಸು ಮುದಗೊಂಡಿದೆ. ಇಂತಹ ಅಪರೂಪದ ಕಾರ್ಯಕ್ರಮಗಳನ್ನು ನಾನು ಎಲ್ಲಿಯೂ ನೋಡಿರಲಿಲ್ಲ.
ಬಸವಣ್ಣನವರ ವಚನಗಳನ್ನು ಆಧರಿಸಿ ಪ್ರದರ್ಶನಗೊಂಡ ನೃತ್ಯಗಳು ಆಕರ್ಷಕವಾಗಿದ್ದವು. ಅದನ್ನು ನೋಡುತ್ತಾ ಕುಳಿತರೆ ಮನಸ್ಸಿನಲ್ಲಿನ ಎಲ್ಲ ಒತ್ತಡಗಳು ನಿವಾರಣೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಮಾಧ್ಯಮಗಳು ಮತ್ತು ಮೊಬೈಲ್‌ಗಳಿಂದ ಮಕ್ಕಳು ಹಾಳಾಗುತ್ತಿದ್ದಾರೆ. ಮಕ್ಕಳನ್ನು ವೈದ್ಯರು ಮತ್ತು ಇಂಜಿನಿಯರ್‌ಗಳನ್ನು ಮಾಡುವ ತವಕ ಬಿಟ್ಟು ಅವರಲ್ಲಿ ಮಾನವೀಯ ಅಂಶಗಳನ್ನು ಬೆಳೆಸುವತ್ತ ಪೋಷಕರು ಗಮನ ನೀಡಬೇಕು. ವಿದ್ಯಾವಂತ ಮಕ್ಕಳು ತಮ್ಮ ತಂದೆ-ತಾಯಿಗಳನ್ನು ವೃದ್ಧಾಶ್ರಮದಲ್ಲಿ ಇರಿಸಿರುವ ಹಲವಾರು ಮನಕಲಕುವ ಸನ್ನಿವೇಶಗಳನ್ನು ಗಮನಿಸಿದ್ದೇವೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕಾಗಿರುವುದು ಪೋಷಕರ ಹೊಣೆ ಎಂದು ತಿಳಿಸಿದರು.
ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಡೂರು ಶಾಸಕ ಬೆಳ್ಳಿ ಪ್ರಕಾಶ್, ದಾವಣಗೆರೆ ಮೇಯರ್ ಪಲ್ಲಾಗಟ್ಟೆ ಶೋಭಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮಾತನಾಡಿದರು. ದಾವಣಗೆರೆ ಎಪಿಎಂಸಿ ಅಧ್ಯಕ್ಷ ಪರಮೇಶ್ವರಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


