ದಿನದ ಸುದ್ದಿ
ತೌಕ್ತೆ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ
ಸುದ್ದಿದಿನ ಡೆಸ್ಕ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಉಸ್ತುವಾರಿ ಕೋಶ ತಿಳಿಸಿದೆ.
ತೌಕ್ತೆ ಚಂಡಮಾರುತದ ಹಿನ್ನೆಲೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಂರೇಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಾಳೆಯ ವೇಳೆಗೆ ಇನ್ನಷ್ಟು ಬೀರುಸುಗೊಳ್ಳಲಿರುವ ಚಂಡಮಾರುತ ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ತೌಕ್ತೆ ಚಂಡಮಾರುತದ ಪರಿಣಾಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿನ್ನೆ ವ್ಯಾಪಕ ಮಳೆಯಾಗಿದೆ. ರಾಜ್ಯಾದ್ಯಂತ ಇದೇ 20ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಆದಾಗ್ಯೂ ಇಂದಿನಿಂದ ಮಳೆಯ ಪ್ರಮಾಣ ತಗ್ಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243