ದಿನದ ಸುದ್ದಿ
ಬಹುನಿರೀಕ್ಷಿತ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ : ಸರಕಾರದಿಂದ ಅಧಿಕೃತ ಆದೇಶ
ಸುದ್ದಿದಿನ,ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಸೋಮವಾರ ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು.
ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾನ್ಯ ಸಚಿವರು ಹೇಳಿದ್ದಾರೆ.
ಮಾರ್ಗಸೂಚಿಯ ಅಂಶಗಳು
1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ಐದು ಸಾವಿರ ರೂಗಳನ್ನು ಸಹಾಯ ಧನವಾಗಿ ನೀಡಲಾಗುವುದು.
2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.
• ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ
• ಆಧಾರ್ ಗುರುತಿನ ಚೀಟಿ ಅಥವಾ
• ರೇಷನ್ ಕಾರ್ಡ್
3. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸುವುದು.
4. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.
5. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್ ಆಗಿರತಕ್ಕದ್ದು,
6. ಸದರಿ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.
ಸದರಿ ಯೋಜನೆಯ ಜೊತೆಯಲ್ಲಿ “ಭಾರತ್ ಗೌರವ್” ಯೋಜನೆ ಅಡಿಯಲ್ಲಿ ಕಾಶಿ ಯಾತ್ರೆಗೆ ವಿಶೇಷ ರೈಲು
30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.
ಕೇಂದ್ರ ಸರಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೊಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


