ದಿನದ ಸುದ್ದಿ
ಸೂಳೆಕೆರೆ ಎಂಬ ಬೃಹತ್ ಸರೋವರದ ಇತಿಹಾಸ
ನೂರಾರು ವರ್ಷಗಳ ಹಿಂದೆ ಕಟ್ಟಿಸಿದ ಕೆರೆಗಳು ಇಂದಿಗೂ ಸಾವಿರಾರು ರೈತ ಕುಟುಂಬಗಳಿಗೆ ಆಸರೆಯಾಗಿವೆ. ಚೆನ್ನಗಿರಿ ತಾಲ್ಲೂಕಿನ ”ಸೂಳೆಕೆರೆ’ ಅಂತಹ ಕೆರೆಗಳಲ್ಲಿ ಒಂದು. ಇದು ಏಷ್ಯಾ ಖಂಡದ ‘ಅತಿ ದೊಡ್ಡ ಕೆರೆ ‘ಎಂಬ ಖ್ಯಾತಿ ಪಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಏಷ್ಯಾಖಂಡದಲ್ಲೇ ಎರಡನೆ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಯಲು ಸೀಮೆಯ ಬಟ್ಟ ಬಯಲುಗಳ ನಡುವೆ ಮೈತಳೆದಿರುವ ಸೂಳೆಕೆರೆ ಈ ಭಾಗದ ಹೆಮ್ಮೆಯ ನಿಸರ್ಗ ತಾಣವೂ ಆಗಿದ್ದು ನೂರಾರು ರೈತ ಕುಟುಂಬಗಳ ಜೀವನಕ್ಕೆ ಆಧಾರವಾಗಿದೆ.
ಈ ಕೆರೆಯ ವಿಸ್ತೀರ್ಣ 4416 ಎಕರೆ 17 ಗುಂಟೆ. ಈ ವಿಸ್ತಾರದ ಕೆರೆ ನೋಡುಗರ ಕಣ್ಣಿಗೆ ಸಾಗರದಂತೆ ಕಾಣುತ್ತದೆ. ಎರಡು ಬೆಟ್ಟಗಳ ನಡುವೆ ಸುಮಾರು 950 ಅಡಿ ಉದ್ದದ ಏರಿಯನ್ನು ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗಿದೆ. ಏರಿಯ ಅಗಲ ಒಂದೆಡೆ 60 ಅಡಿಗಳಾದರೆ, ಇನ್ನೊಂದೆಡೆ 80 ಅಡಿಗಳಷ್ಟಿದೆ.
ಐತಿಹಾಸಿಕ ಹಿನ್ನೆಲೆ: ಈ ಕೆರೆಯ ನಿರ್ಮಾಣದ ಹಿಂದೆ ಅಚ್ಚರಿಯ ಸಂಗತಿಗಳಿವೆ. ಕೆಲವು ಐತಿಹ್ಯದಂತಿವೆ. ಇವು ಇತಿಹಾಸಕ್ತರಿಗೆ ಹೆಚ್ಚಿನ ಸಂಶೋಧನೆಗೆ ಆಕರಗಳನ್ನು ಒದಗಿಸುತ್ತವೆ. ಈ ಕೆರೆ ಪ್ರದೇಶದಲ್ಲಿ ಹಿಂದೆ ಸ್ವರ್ಗವತಿ ಎಂಬ ಪಟ್ಟಣ ಇತ್ತೆಂಬ ಐತಿಹ್ಯವಿದೆ. ವಿಕ್ರಮರಾಯನೆಂಬ ರಾಜ ಸ್ವರ್ಗವತಿಯನ್ನು ಆಳುತ್ತಿದ್ದ. ನೂತನಾ ದೇವಿ ಅವನ ಪತ್ನಿ. ಈ ದಂಪತಿಗೆ ಶಾಂತಲಾದೇವಿ (ಶಾಂತಮ್ಮ ) ಎಂಬ ಒಬ್ಬಳೇ ಮಗಳು. ಅವಳು ಯೌವ್ವನಾವಸ್ಥೆಗೆ ಬಂದಾಗ ಒಮ್ಮೆ ತಂದೆಯ ಅನುಮತಿ ಪಡೆಯದೆ ಕಾರ್ಯ ನಿಮಿತ್ತ ನೆರೆಯ ಊರಿಗೆ ಹೋಗಿ ಅರಮನೆಗೆ ಹಿಂತಿರುಗುತ್ತಾಳೆ. ಆಕೆಯ ನಡವಳಿಕೆಯನ್ನು ತಂದೆ ವಿಕ್ರಮರಾಯ ಆಕ್ಷೇಪಿಸಿ ನಿಂದಿಸುತ್ತಾನೆ. ನಡತೆಗೆಟ್ಟವಳು ಎಂದು ಆರೋಪಿಸುತ್ತಾನೆ.
ತಂದೆಯ ಬೈಗುಳದ ಮಾತುಗಳನ್ನು ಕೇಳಿ ನೊಂದ ಶಾಂತಲಾದೇವಿ ಆರೋಪದಿಂದ ಮುಕ್ತಳಾಗಲು ತಂದೆಯ ನಂತರ ಒಂದು ಕೆರೆಯನ್ನು ನಿರ್ಮಿಸಲು ಸಂಕಲ್ಪ ಮಾಡುತ್ತಾಳೆ. ಸ್ವರ್ಗಾವತಿ ಪಟ್ಟಣದ ವೇಶ್ಯೆಯರು ವಾಸಿಸುತ್ತಿದ್ದ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವೆಂದು ನಿರ್ಧರಿಸುತ್ತಾಳೆ. ಆ ಜಾಗವನ್ನು ಬಿಟ್ಟುಕೊಡುವಂತೆ ವೇಶ್ಯೆಯರನ್ನು ಕೇಳುತ್ತಾಳೆ. ಕೆರೆಗೆ ‘ಸೂಳೆಕೆರೆ’ ಎಂದು ನಾಮಕರಣ ಮಾಡುವುದಾದರೆ ಆ ಪ್ರದೇಶವನ್ನು ಬಿಟ್ಟುಕೊಡುವುದಾಗಿ ಅವರು ಹೇಳುತ್ತಾರೆ.ಆ ಬೇಡಿಕೆಗೆ ಒಪ್ಪಿದ ರಾಜಪುತ್ರಿ ಅಲ್ಲಿ ಕೆರೆ ನಿರ್ಮಾಣ ಮಾಡಿದಳು ಎಂದು ಇತಿಹಾಸ ಹೇಳುತ್ತದೆ.
ಕೆರೆ ವಿಸ್ತಾರವಾದ ಬೆಟ್ಟ ಸಾಲುಗಳ ಪ್ರದೇಶದಲ್ಲಿದೆ. ಸುತ್ತಲಿನ ನೂರಾರು ಹಳ್ಳಿಗಳಲ್ಲಿ ಬೀಳುವ ಮಳೆ ನೀರು ಈ ಕೆರೆಗೆ ಹರಿದು ಬರುತ್ತದೆ. ಹಳೇ ಮೈಸೂರು ರಾಜ್ಯದ ಬ್ರಿಟಿಷ್ ಇಂಜಿನಿಯರ್ ಸ್ಯಾಂಕಿ (ಕೆ) ಅವರು ‘ಈ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವಲ್ಲ. ಹಿಂದಿನ ಕಾಲದ ನೀರಾವರಿ ತಂತ್ರಜ್ಞರ ಚಾಣಾಕ್ಷತೆಯಿಂದ ಈ ಕೆರೆ ನಿರ್ಮಾಣವಾಗಿದೆ. ಅದು ಅಚ್ಚರಿಯ ಸಂಗತಿ’ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.
ಕೆರೆಯ ಉತ್ತರದಲ್ಲಿ ಸಿದ್ಧ ನಾಲೆ ಹಾಗೂ ದಕ್ಷಿಣದಲ್ಲಿ ಬಸವ ನಾಲೆ ಎಂಬ ಎರಡು ನಾಲೆಗಳಿವೆ. ಈ ಕೆರೆ ಸುಮಾರು 15 ರಿಂದ 20 ಹಳ್ಳಿಗಳ ಕೃಷಿ ಭೂಮಿಗೆ (2000 ಎಕರೆ) ನೀರಾವರಿ ಸೌಲಭ್ಯ ಒದಗಿಸಿದೆ. ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರನ್ನೂ ಪೂರೈಸುತ್ತಿದೆ.
ಕೆರೆಯ ಪೂರ್ವ ದಿಕ್ಕಿಗೆ ಹೊಯ್ಸಳ ಮತ್ತು ಕೆಳದಿ ವಾಸ್ತುಶೈಲಿಯ ಸಿದ್ದೇಶ್ವರ ದೇವಾಲಯವಿದೆ. ಕೆರೆಯ ಅಂಚಿನಲ್ಲಿ ಆಕರ್ಷಕ ಕಲ್ಲು ಮಂಟಪವಿದೆ. ಇಲ್ಲಿಂದ ಕೆರೆಯನ್ನು ನೋಡುವುದು ಸೊಗಸಾದ ಅನುಭವ.
ಕೆರೆಗೆ ಸಿದ್ದೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ ಹಾಗೂ ಕತ್ತರಿ ತೂಬು ಎಂಬ ಮೂರು ತೂಬುಗಳಿವೆ. ಗುಡ್ಡಗಳ ಪರಿಸರದಲ್ಲಿ ಇರುವುದರಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳಿವೆ.
ಸುಮಾರು 27 ಅಡಿ ನೀರಿನ ಮಟ್ಟವಿರುವ ಕೆರೆಯಲ್ಲಿ 10 ಅಡಿಗಳಷ್ಟು ಹೂಳು ತುಂಬಿಕೊಂಡಿದೆ. ಈ ಕೆರೆಯು 1992ರಲ್ಲಿ ಕೋಡಿ ಬಿದ್ದಿತ್ತು. ಹದಿನೇಳು ವರ್ಷದ ನಂತರ ಈ ವರ್ಷ (2009) ಮತ್ತೊಮ್ಮೆ ಕೋಡಿ ಬಿತ್ತು. ಇದರಿಂದ ಅಪಾರ ಹಾನಿಯೂ ಆಯಿತು. ಹಿನ್ನೀರಿನಿಂದಾಚೆಯ 3500 ಎಕರೆ ಪ್ರದೇಶ ಜಲಾವೃತ್ತಗೊಂಡಿತ್ತು. ಕೆರೆಯಲ್ಲಿರುವ ಹೂಳನ್ನು ಕಾಲಕಾಲಕ್ಕೆ ಎತ್ತಿದ್ದರೆ ಹಾನಿ ತಪ್ಪಿಸಬಹುದಿತ್ತು.
ಕೆರೆಗಳ ಹೂಳನ್ನು ಕಾಲಕಾಲಕ್ಕೆ ತೆಗೆದು ಕೆರೆಯನ್ನು ಬಲಪಡಿಸುವ ಗ್ರಾಮಗಳಿಗೆ ಹಿಂದಿನ ಕಾಲದಲ್ಲಿ ತೆರಿಗೆ ವಿನಾಯಿತಿ ನೀಡುವ ಪದ್ಧತಿ ಇತ್ತು ಎಂಬುದು ಕೌಟಿಲ್ಯನ ‘ಅರ್ಥಶಾಸ್ತ್ರ’ದಲ್ಲಿ ಉಲ್ಲೇಖವಾಗಿದೆ. ಆದರೆ ಈಗ ಹೂಳು ತೆಗೆಯುವ ವ್ಯವಸ್ಥೆಯೇ ಇಲ್ಲ.
ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಕೆರೆಗಳಲ್ಲಿ ಒಂದು ಎನ್ನಲಾದ ಈ ಕೆರೆಗೆ ಶಾಂತಿಸಾಗರ ಎಂದೂ ಹೆಸರಿದೆ. ಕೆರೆ ನಿರ್ಮಾಣ ಮಾಡಿದ ಶಾಂತಲಾದೇವಿಯನ್ನು ಸ್ಮರಿಸುವುದೂ ಇದರ ಉದ್ದೇಶ. ಸರ್ಕಾರಿ ದಾಖಲೆಗಳಲ್ಲಿ ಶಾಂತಿಸಾಗರ ಎಂದಿದ್ದರೂ ಜನ ಸಾಮಾನ್ಯರ ಬಾಯಲ್ಲಿ ಅದು ಇಂದಿಗೂ ಸೂಳೆಕೆರೆ ಆಗಿ ಉಳಿದಿದೆ.
ಕೆರೆಯ ಹೆಸರು ಬದಲಾವಣೆಗೆ ಇತಿಹಾಸಕ್ತರು, ಚಿಂತಕರು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಸಮದ್ರ ನೋಡಿಲ್ಲದ ಮಕ್ಕಳ ಪಾಲಿಗೆ ಈ ಕೆರೆ ಸಮುದ್ರದಂತೆ ಕಾಣುತ್ತದೆ.
(ಸಂಗ್ರಹ)

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ23 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ




