ದಿನದ ಸುದ್ದಿ
ಸೂಳೆಕೆರೆ ಎಂಬ ಬೃಹತ್ ಸರೋವರದ ಇತಿಹಾಸ
ನೂರಾರು ವರ್ಷಗಳ ಹಿಂದೆ ಕಟ್ಟಿಸಿದ ಕೆರೆಗಳು ಇಂದಿಗೂ ಸಾವಿರಾರು ರೈತ ಕುಟುಂಬಗಳಿಗೆ ಆಸರೆಯಾಗಿವೆ. ಚೆನ್ನಗಿರಿ ತಾಲ್ಲೂಕಿನ ”ಸೂಳೆಕೆರೆ’ ಅಂತಹ ಕೆರೆಗಳಲ್ಲಿ ಒಂದು. ಇದು ಏಷ್ಯಾ ಖಂಡದ ‘ಅತಿ ದೊಡ್ಡ ಕೆರೆ ‘ಎಂಬ ಖ್ಯಾತಿ ಪಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಏಷ್ಯಾಖಂಡದಲ್ಲೇ ಎರಡನೆ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಯಲು ಸೀಮೆಯ ಬಟ್ಟ ಬಯಲುಗಳ ನಡುವೆ ಮೈತಳೆದಿರುವ ಸೂಳೆಕೆರೆ ಈ ಭಾಗದ ಹೆಮ್ಮೆಯ ನಿಸರ್ಗ ತಾಣವೂ ಆಗಿದ್ದು ನೂರಾರು ರೈತ ಕುಟುಂಬಗಳ ಜೀವನಕ್ಕೆ ಆಧಾರವಾಗಿದೆ.
ಈ ಕೆರೆಯ ವಿಸ್ತೀರ್ಣ 4416 ಎಕರೆ 17 ಗುಂಟೆ. ಈ ವಿಸ್ತಾರದ ಕೆರೆ ನೋಡುಗರ ಕಣ್ಣಿಗೆ ಸಾಗರದಂತೆ ಕಾಣುತ್ತದೆ. ಎರಡು ಬೆಟ್ಟಗಳ ನಡುವೆ ಸುಮಾರು 950 ಅಡಿ ಉದ್ದದ ಏರಿಯನ್ನು ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗಿದೆ. ಏರಿಯ ಅಗಲ ಒಂದೆಡೆ 60 ಅಡಿಗಳಾದರೆ, ಇನ್ನೊಂದೆಡೆ 80 ಅಡಿಗಳಷ್ಟಿದೆ.
ಐತಿಹಾಸಿಕ ಹಿನ್ನೆಲೆ: ಈ ಕೆರೆಯ ನಿರ್ಮಾಣದ ಹಿಂದೆ ಅಚ್ಚರಿಯ ಸಂಗತಿಗಳಿವೆ. ಕೆಲವು ಐತಿಹ್ಯದಂತಿವೆ. ಇವು ಇತಿಹಾಸಕ್ತರಿಗೆ ಹೆಚ್ಚಿನ ಸಂಶೋಧನೆಗೆ ಆಕರಗಳನ್ನು ಒದಗಿಸುತ್ತವೆ. ಈ ಕೆರೆ ಪ್ರದೇಶದಲ್ಲಿ ಹಿಂದೆ ಸ್ವರ್ಗವತಿ ಎಂಬ ಪಟ್ಟಣ ಇತ್ತೆಂಬ ಐತಿಹ್ಯವಿದೆ. ವಿಕ್ರಮರಾಯನೆಂಬ ರಾಜ ಸ್ವರ್ಗವತಿಯನ್ನು ಆಳುತ್ತಿದ್ದ. ನೂತನಾ ದೇವಿ ಅವನ ಪತ್ನಿ. ಈ ದಂಪತಿಗೆ ಶಾಂತಲಾದೇವಿ (ಶಾಂತಮ್ಮ ) ಎಂಬ ಒಬ್ಬಳೇ ಮಗಳು. ಅವಳು ಯೌವ್ವನಾವಸ್ಥೆಗೆ ಬಂದಾಗ ಒಮ್ಮೆ ತಂದೆಯ ಅನುಮತಿ ಪಡೆಯದೆ ಕಾರ್ಯ ನಿಮಿತ್ತ ನೆರೆಯ ಊರಿಗೆ ಹೋಗಿ ಅರಮನೆಗೆ ಹಿಂತಿರುಗುತ್ತಾಳೆ. ಆಕೆಯ ನಡವಳಿಕೆಯನ್ನು ತಂದೆ ವಿಕ್ರಮರಾಯ ಆಕ್ಷೇಪಿಸಿ ನಿಂದಿಸುತ್ತಾನೆ. ನಡತೆಗೆಟ್ಟವಳು ಎಂದು ಆರೋಪಿಸುತ್ತಾನೆ.
ತಂದೆಯ ಬೈಗುಳದ ಮಾತುಗಳನ್ನು ಕೇಳಿ ನೊಂದ ಶಾಂತಲಾದೇವಿ ಆರೋಪದಿಂದ ಮುಕ್ತಳಾಗಲು ತಂದೆಯ ನಂತರ ಒಂದು ಕೆರೆಯನ್ನು ನಿರ್ಮಿಸಲು ಸಂಕಲ್ಪ ಮಾಡುತ್ತಾಳೆ. ಸ್ವರ್ಗಾವತಿ ಪಟ್ಟಣದ ವೇಶ್ಯೆಯರು ವಾಸಿಸುತ್ತಿದ್ದ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವೆಂದು ನಿರ್ಧರಿಸುತ್ತಾಳೆ. ಆ ಜಾಗವನ್ನು ಬಿಟ್ಟುಕೊಡುವಂತೆ ವೇಶ್ಯೆಯರನ್ನು ಕೇಳುತ್ತಾಳೆ. ಕೆರೆಗೆ ‘ಸೂಳೆಕೆರೆ’ ಎಂದು ನಾಮಕರಣ ಮಾಡುವುದಾದರೆ ಆ ಪ್ರದೇಶವನ್ನು ಬಿಟ್ಟುಕೊಡುವುದಾಗಿ ಅವರು ಹೇಳುತ್ತಾರೆ.ಆ ಬೇಡಿಕೆಗೆ ಒಪ್ಪಿದ ರಾಜಪುತ್ರಿ ಅಲ್ಲಿ ಕೆರೆ ನಿರ್ಮಾಣ ಮಾಡಿದಳು ಎಂದು ಇತಿಹಾಸ ಹೇಳುತ್ತದೆ.
ಕೆರೆ ವಿಸ್ತಾರವಾದ ಬೆಟ್ಟ ಸಾಲುಗಳ ಪ್ರದೇಶದಲ್ಲಿದೆ. ಸುತ್ತಲಿನ ನೂರಾರು ಹಳ್ಳಿಗಳಲ್ಲಿ ಬೀಳುವ ಮಳೆ ನೀರು ಈ ಕೆರೆಗೆ ಹರಿದು ಬರುತ್ತದೆ. ಹಳೇ ಮೈಸೂರು ರಾಜ್ಯದ ಬ್ರಿಟಿಷ್ ಇಂಜಿನಿಯರ್ ಸ್ಯಾಂಕಿ (ಕೆ) ಅವರು ‘ಈ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವಲ್ಲ. ಹಿಂದಿನ ಕಾಲದ ನೀರಾವರಿ ತಂತ್ರಜ್ಞರ ಚಾಣಾಕ್ಷತೆಯಿಂದ ಈ ಕೆರೆ ನಿರ್ಮಾಣವಾಗಿದೆ. ಅದು ಅಚ್ಚರಿಯ ಸಂಗತಿ’ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.
ಕೆರೆಯ ಉತ್ತರದಲ್ಲಿ ಸಿದ್ಧ ನಾಲೆ ಹಾಗೂ ದಕ್ಷಿಣದಲ್ಲಿ ಬಸವ ನಾಲೆ ಎಂಬ ಎರಡು ನಾಲೆಗಳಿವೆ. ಈ ಕೆರೆ ಸುಮಾರು 15 ರಿಂದ 20 ಹಳ್ಳಿಗಳ ಕೃಷಿ ಭೂಮಿಗೆ (2000 ಎಕರೆ) ನೀರಾವರಿ ಸೌಲಭ್ಯ ಒದಗಿಸಿದೆ. ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರನ್ನೂ ಪೂರೈಸುತ್ತಿದೆ.
ಕೆರೆಯ ಪೂರ್ವ ದಿಕ್ಕಿಗೆ ಹೊಯ್ಸಳ ಮತ್ತು ಕೆಳದಿ ವಾಸ್ತುಶೈಲಿಯ ಸಿದ್ದೇಶ್ವರ ದೇವಾಲಯವಿದೆ. ಕೆರೆಯ ಅಂಚಿನಲ್ಲಿ ಆಕರ್ಷಕ ಕಲ್ಲು ಮಂಟಪವಿದೆ. ಇಲ್ಲಿಂದ ಕೆರೆಯನ್ನು ನೋಡುವುದು ಸೊಗಸಾದ ಅನುಭವ.
ಕೆರೆಗೆ ಸಿದ್ದೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ ಹಾಗೂ ಕತ್ತರಿ ತೂಬು ಎಂಬ ಮೂರು ತೂಬುಗಳಿವೆ. ಗುಡ್ಡಗಳ ಪರಿಸರದಲ್ಲಿ ಇರುವುದರಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳಿವೆ.
ಸುಮಾರು 27 ಅಡಿ ನೀರಿನ ಮಟ್ಟವಿರುವ ಕೆರೆಯಲ್ಲಿ 10 ಅಡಿಗಳಷ್ಟು ಹೂಳು ತುಂಬಿಕೊಂಡಿದೆ. ಈ ಕೆರೆಯು 1992ರಲ್ಲಿ ಕೋಡಿ ಬಿದ್ದಿತ್ತು. ಹದಿನೇಳು ವರ್ಷದ ನಂತರ ಈ ವರ್ಷ (2009) ಮತ್ತೊಮ್ಮೆ ಕೋಡಿ ಬಿತ್ತು. ಇದರಿಂದ ಅಪಾರ ಹಾನಿಯೂ ಆಯಿತು. ಹಿನ್ನೀರಿನಿಂದಾಚೆಯ 3500 ಎಕರೆ ಪ್ರದೇಶ ಜಲಾವೃತ್ತಗೊಂಡಿತ್ತು. ಕೆರೆಯಲ್ಲಿರುವ ಹೂಳನ್ನು ಕಾಲಕಾಲಕ್ಕೆ ಎತ್ತಿದ್ದರೆ ಹಾನಿ ತಪ್ಪಿಸಬಹುದಿತ್ತು.
ಕೆರೆಗಳ ಹೂಳನ್ನು ಕಾಲಕಾಲಕ್ಕೆ ತೆಗೆದು ಕೆರೆಯನ್ನು ಬಲಪಡಿಸುವ ಗ್ರಾಮಗಳಿಗೆ ಹಿಂದಿನ ಕಾಲದಲ್ಲಿ ತೆರಿಗೆ ವಿನಾಯಿತಿ ನೀಡುವ ಪದ್ಧತಿ ಇತ್ತು ಎಂಬುದು ಕೌಟಿಲ್ಯನ ‘ಅರ್ಥಶಾಸ್ತ್ರ’ದಲ್ಲಿ ಉಲ್ಲೇಖವಾಗಿದೆ. ಆದರೆ ಈಗ ಹೂಳು ತೆಗೆಯುವ ವ್ಯವಸ್ಥೆಯೇ ಇಲ್ಲ.
ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಕೆರೆಗಳಲ್ಲಿ ಒಂದು ಎನ್ನಲಾದ ಈ ಕೆರೆಗೆ ಶಾಂತಿಸಾಗರ ಎಂದೂ ಹೆಸರಿದೆ. ಕೆರೆ ನಿರ್ಮಾಣ ಮಾಡಿದ ಶಾಂತಲಾದೇವಿಯನ್ನು ಸ್ಮರಿಸುವುದೂ ಇದರ ಉದ್ದೇಶ. ಸರ್ಕಾರಿ ದಾಖಲೆಗಳಲ್ಲಿ ಶಾಂತಿಸಾಗರ ಎಂದಿದ್ದರೂ ಜನ ಸಾಮಾನ್ಯರ ಬಾಯಲ್ಲಿ ಅದು ಇಂದಿಗೂ ಸೂಳೆಕೆರೆ ಆಗಿ ಉಳಿದಿದೆ.
ಕೆರೆಯ ಹೆಸರು ಬದಲಾವಣೆಗೆ ಇತಿಹಾಸಕ್ತರು, ಚಿಂತಕರು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಸಮದ್ರ ನೋಡಿಲ್ಲದ ಮಕ್ಕಳ ಪಾಲಿಗೆ ಈ ಕೆರೆ ಸಮುದ್ರದಂತೆ ಕಾಣುತ್ತದೆ.
(ಸಂಗ್ರಹ)

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ




