ದಿನದ ಸುದ್ದಿ
ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಬೆಂಗಳೂರು : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಸಮಾಜ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಭಾರತದಲ್ಲಿ ಶೇಕಡ 24 ರಷ್ಟು ಮಹಿಳೆಯರು ಮಾತ್ರ ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂದುವರೆದ ದೇಶಗಳಿಗೆ ಹೋಲಿಕೆ ಮಾಡಿದರೆ ಇದು ಕಡಿಮೆಯಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಎಲ್ಲ ರಂಗಗಳಲ್ಲೂ ಮಹಿಳೆಯರೂ ಸಕ್ರಿಯವಾಗಿ ಭಾಗವಹಿಸಬೇಕು.
ಮಹಿಳೆಯರಿಗೆ ಶಕ್ತಿ ತುಂಬಿದಾಗ ಮಾತ್ರ ಸಮಾಜದಲ್ಲಿ ಬೇರೂರಿರುವ ಸಾಮಾಜಿಕ, ಆರ್ಥಿಕ ಅಸಮಾನತೆ ನಿವಾರಣೆ ಸಾಧ್ಯ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದಕ್ಕೂ ಮುನ್ನ ವಿಧಾನಸೌಧದ ಮುಂಭಾಗದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐವರು ಮಹಿಳೆಯರಿಗೆ ಮುಖ್ಯಮಂತ್ರಿ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಿಸಿದರು.
ಶಕ್ತಿ ಯೋಜನೆ ಜಾರಿಯಿಂದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಧಾರವಾಡದ ಯುವತಿ ದೀಪಾ ಕೋಟಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243