ದಿನದ ಸುದ್ದಿ

ಕವಿತೆ | ಉಸಿರು

Published

on

ಮೂಲ : ಜಲಾಲುದ್ದೀನ್ ರೂಮಿ, ಕನ್ನಡಕ್ಕೆ : ಡಾ.ಎಚ್.ಎಸ್.ಅನುಪಮಾ

ನಾ ಕ್ರೈಸ್ತನಲ್ಲ, ಯಹೂದಿ, ಮುಸಲ್ಮಾನ, ಹಿಂದುವೂ ಅಲ್ಲ ಬೌದ್ಧ, ಸೂಫಿ, ಝೆನ್ ಧರ್ಮದವನೂ ಅಲ್ಲ

ಪಂಥ ಪರಂಪರೆಯವನಲ್ಲ, ಮೂಡಲದವನಲ್ಲ ಪಡುವಣದವನಲ್ಲ, ಕಡಲೊಳಗಿನಿಂದೆದ್ದು ಬಂದವನಲ್ಲ

ನೆಲದಿಂದುದ್ಭವಿಸಲಿಲ್ಲ, ಸಹಜ ಸೃಷ್ಟಿಯಲ್ಲ, ದೈವಿಕವಲ್ಲ ಪಂಚಭೂತಗಳಿಂದಾದವನಲ್ಲ, ನಾ ಎಂಬುದೇ ಇಲ್ಲ

ಇಹದಲೂ ಪರದಲ್ಲೂ ನನ್ನ ಕುರುಹಿಲ್ಲ ಆಡಂ ಈವರ ವಂಶದ ಕುಡಿಯಲ್ಲ

ಯಾವ ವಂಶಾವಳಿಯೂ ನನಗಿಲ್ಲ, ನೆಲೆಯಿರದವ ಕಾಯವಲ್ಲ, ಆತ್ಮವೂ ಅಲ್ಲ, ನಿಶ್ಲೇಷದ ಶೇಷ

ನಾ ಪ್ರೇಮಿಯವ, ಲೋಕವೆರೆಡನೊಂದೇ ಆಗಿ ಕಂಡವ ಕರೆವುದು ಪ್ರೇಮ ನನ್ನ, ಅರಿತುಕೊಳುವುದು ತನ್ನ ತಾ..

ಮೊದಲ, ಕೊನೆಯ, ಹೊರ, ಒಳ
ಎಲ್ಲವೂ ಪ್ರೇಮ, ಪ್ರೇಮ, ಬರೀ ಪ್ರೇಮ
ಅದು ಪ್ರಾಣ, ಅದೇ ಉಸಿರು.

ಉಸಿರಾಡು ಮನುಜ.

(ಈ ಕವಿತೆಯನ್ನು ಲಡಾಯಿ ಪ್ರಕಾಶನ ಗದಗ ಇವರು ಪ್ರಕಟಿಸಿರುವ ‘ಉರಿಯ ಕುಡಿಯ ನಟ್ಟ ನಡುವೆ‘ ಕೃತಿಯಿಂದ ಆಯ್ದುಕೊಳ್ಳಲಾಗಿದೆ. ಜಲಾಲುದ್ದೀನ್ ರೂಮಿಯ ಕವಿತೆಗಳನ್ನು ಕನ್ನಡಕ್ಕೆ ಡಾ.ಎಚ್.ಎಸ್. ಅನುಪಮ ಅವರು ಅನುವಾದಿಸಿರುವ ಕೃತಿ ಇದಾಗಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version