ಭಾವ ಭೈರಾಗಿ

ವಿಶ್ವಮಾನವ ಗೀತೆ | ಅನಿಕೇತನ

Published

on

  • “ನೂರು ಮತದ ಹೊಟ್ಟ ತೂರಿ…. ನಿರ್ದಿಗಂತವಾಗಿ ಏರಿ… ಅನಂತವಾಗು…ಓ ಮಾನವ”, ಎಂದು ವಿಶ್ವಮಾನವ ಸಂದೇಶ ಸಾರಿದ ಡಾ. ಕೆ.ವಿ.ಪುಟ್ಟಪ್ಪ ಅಂದರೆ ಕುವೆಂಪು ಅವರನ್ನು ನೆನೆಯೋಣ. ಅವರ ಈ ಸಂದೇಶ ಇಂದು ಎಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ.

ನನ್ನ ಚೇತನ,
ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಕುವೆಂಪು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version