Connect with us

ಬಹಿರಂಗ

ಪ್ರಜಾಸತ್ತೆಯ ಮೌಲ್ಯಗಳನ್ನೇ ಮರೆವುದಾದರೂ ಏಕೆ..?

Published

on

  • ನಾ ದಿವಾಕರ

ಪ್ರಜಾಪ್ರಭುತ್ವದ ಉಸಿರು ಭಿನ್ನಮತ ಮತ್ತು ಪ್ರತಿರೋಧ. ಇವೆರಡೂ ಇಲ್ಲದ ರಾಜಕೀಯ ವ್ಯವಸ್ಥೆ ಸರ್ವಾಧಿಕಾರಕ್ಕೆ ಎಡೆಮಾಡಿಕೊಡುತ್ತದೆ. ರಾಜಕೀಯ ವಿರೋಧ ಮತ್ತು ಪ್ರತಿರೋಧಗಳಿಗೆ ಮನ್ನಣೆ ನೀಡದ ಸಮಾಜ ಅರಾಜಕತೆಯತ್ತ ಸಾಗುತ್ತದೆ. ಇಂತಹ ಸಮಾಜವನ್ನು ನಿರ್ವಹಿಸುವ ರಾಜಕಾರಣ ನಿರಂಕುಶಾಧಿಕಾರದತ್ತ ಸಾಗುತ್ತದೆ.

ರಾಜಕೀಯ ಪರಿಜ್ಞಾನ ಇರುವ, ರಾಜಕೀಯ ಶಾಸ್ತ್ರವನ್ನು ಅರಿತಿರುವ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷಗಳಿಗೆ ಈ ವಾಸ್ತವದ ಅರಿವು ಇರಲೇಬೇಕು. ಪ್ರಜಾತಂತ್ರ ವ್ಯವಸ್ಥೆಯನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತ “ಜನಪ್ರತಿನಿಧಿಗಳಿಗೆ” ಈ ಕನಿಷ್ಠ ಪ್ರಜ್ಞೆ ಅತ್ಯವಶ್ಯವಾಗಿ ಇರಲೇಬೇಕು. ಇಲ್ಲವಾದರೆ ಸರ್ಕಾರೇತರ, ಅಸಾಂವಿಧಾನಿಕ ಗುಂಪುಗಳು, ಶಕ್ತಿಗಳು ರಾಜ್ಯಭಾರ ನಡೆಸಲಾರಂಭಿಸುತ್ತವೆ. ಕರ್ನಾಟಕ ಬಹುಶಃ ಇಂತಹ ವಿಷಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದನ್ನೇ ಪ್ರಾಯಶಃ ದೇವನೂರು ಮಹದೇವ ಅವರು ” ನಾಡಿಗೆ ಕೇಡಿನ ಲಕ್ಷಣಗಳು ” ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಈಗ ಎದುರಿಸುತ್ತಿರುವ ವಿವಾದ ಯಾವುದೇ ಜಾತಿ, ಮತ, ಸಮುದಾಯ, ಧರ್ಮಗಳಿಗಿಂತಲೂ‌ ಮುಖ್ಯವಾಗಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಸಂಬಂಧಿಸಿದೆ. ಈ ಸ್ವಾಸ್ಥ್ಯವನ್ನು ಈ ಹೊತ್ತಿಗೆ ಮಾತ್ರವಲ್ಲದೆ ಭವಿಷ್ಯದ ಹಲವು ಪೀಳಿಗೆಗಳವರೆಗೆ ಕಾಪಾಡುವ ನೈತಿಕ ಹೊರೆ ಶಿಕ್ಷಣ ವ್ಯವಸ್ಥೆಯ ಮೇಲಿರುತ್ತದೆ.

ಶೈಕ್ಷಣಿಕ ವಲಯದಲ್ಲಿ ಕೈಗೊಳ್ಳಲಾಗುವ ಯಾವುದೇ ಬೌದ್ಧಿಕ ಬದಲಾವಣೆಗಳಿಗೆ ಸಾರ್ವಜನಿಕ‌ ಮನ್ನಣೆ , ಸಮ್ಮತಿ ಮತ್ತು ಸಾರ್ವತ್ರಿಕ ಲಕ್ಷಣಗಳು ಅಗತ್ಯವಾಗಿ ಇರಬೇಕಾಗುತ್ತದೆ. ವಿಶೇಷವಾಗಿ ಪ್ರಾಥಮಿಕ ಮತ್ತು‌ ಮಾಧ್ಯಮಿಕ ಶಿಕ್ಷಣದ ಪಠ್ಯಕ್ರಮಗಳನ್ನು ರೂಪಿಸುವಾಗ, ತಿದ್ದುಪಡಿ , ಪರಿಷ್ಕರಣೆಮಾಡುವಾಗ ಈ ಲಕ್ಷಣಗಳು ಪ್ರದಾನ ಅಂಶಗಳಾಗುತ್ತವೆ.

ರಾಜ್ಯ ಬಿಜೆಪಿ ಸರ್ಕಾರ ಈಗ ಕೈಗೊಂಡಿರುವ ಪಠ್ಯಕ್ರಮ ಪರಿಷ್ಕರಣೆ ಹಲವು ಕಾರಣಗಳಿಗಾಗಿ ವಿವಾದಾಸ್ಪದವಾಗಿದೆ. ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಅರ್ಹತೆಯೇ ಪ್ರಶ್ನಾರ್ಹವಾಗಿದೆ. ಒಂದು ಪೀಳಿಗೆಯ ಭವಿಷ್ಯ ರೂಪಿಸುವ ಶಾಲಾಪಠ್ಯಕ್ರಮವನ್ನು ರೂಪಿಸಲು ಶಿಕ್ಷಣ ತಜ್ಞರ ಅವಶ್ಯಕತೆ ಇದೆ ಎಂಬ ಸಾಮಾನ್ಯ ಗ್ರಹಿಕೆಯಾದರೂ ಸರ್ಕಾರ ಮತ್ತು ಶಿಕ್ಷಣ ಸಚಿವರಿಗೆ ಇರಬೇಕಿತ್ತು. ತಮ್ಮ ಪಕ್ಷ ರಾಜಕಾರಣದ ಸೈದ್ಧಾಂತಿಕ ನಿಲುಮೆಗಳಿಗೆ ಶಾಲಾ ಶಿಕ್ಷಣವನ್ನು ಗುರಾಣಿಯಾಗಿ ಬಳಸುವುದೇ ಅಕ್ಷಮ್ಯ ಮತ್ತು ಅಪ್ರಜಾತಾಂತ್ರಿಕ ಲಕ್ಷಣ. ಆದರೆ ರಾಜ್ಯ ಶಿಕ್ಷಣ ಸಚಿವರ ಈ ಪ್ರಮಾದ ಇಂದು ಕನ್ನಡ ಸಾಹಿತ್ಯವಲಯವನ್ನೇ ಪ್ರಕ್ಷುಬ್ಧಗೊಳಿಸಿದೆ.

ಪರ-ವಿರೋಧಗಳೇನೇ ಇರಲಿ , ಪ್ರಜಾಸತ್ತೆಯನ್ನು ಗೌರವಿಸುವ, ಸಂವಿಧಾನ ಬದ್ಧತೆ ಇರುವ ಯಾವುದೇ ಸರ್ಕಾರ ಸಾರ್ವಜನಿಕ ಪ್ರತಿರೋಧ ಮತ್ತು ಭಿನ್ನಮತಗಳನ್ನು ಗೌರವಿಸಬೇಕಾದ್ದು ನೈತಿಕವಾಗಿ ಅತ್ಯವಶ್ಯ. ಇಂತಹ ಸಂದಿಗ್ಧ ಸಂದರ್ಭಗಳಲ್ಲಿ ವಿವೇಕ, ವಿವೇಚನೆ ಇರುವ ಯಾವುದೇ ಸರ್ಕಾರ ತನ್ನ ಪ್ರತಿಷ್ಠೆ, ಅಹಮಿಕೆ ಬದಿಗಿಟ್ಟು ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡುತ್ತದೆ, ಮಾಡಬೇಕು.

ಏಕೆಂದರೆ ಇದು ಒಂದು ಪಕ್ಷ ಅಥವಾ ಸಿದ್ಧಾಂತದ ಪ್ರಶ್ನೆ ಅಲ್ಲ ಕೋಟ್ಯಂತರ ಮಕ್ಕಳ ಭವಿಷ್ಯದ ಪ್ರಶ್ನೆ. ಬಿಜೆಪಿ ನಾಯಕರ ಹೇಳಿಕೆ , ಪ್ರತಿಕ್ರಿಯೆ ಮತ್ತು ದೋಷಾರೋಪಣೆಗಳನ್ನು ಗಮನಿಸಿದರೆ ಈ ಅರಿವು ಇದ್ದಂತೆ ತೋರುವುದಿಲ್ಲ. ಪ್ರಜಾತಂತ್ರ ವ್ಯವಸ್ತೆಯಲ್ಲಿ ಸಂವಾದ, ಸಮಾಲೋಚನೆ, ಸಂಕಥನಗಳೇ‌ ನಿರ್ಣಾಯಕವಾದರೆ ಮಾತ್ರ ಒಂದು ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ. ಪ್ರಾಯಶಃ ಪ್ರಜಾಸತ್ತೆಯ ಈ ಮೌಲಿಕ ಅಂಶಗಳಿಗೆ ರಾಜ್ಯ ಸರ್ಕಾರ ವಿಮುಖವಾದಂತಿದೆ.

ಇದು ರಾಜ್ಯ ಶಿಕ್ಷಣ ಸಚಿವರ ಪ್ರತಿಷ್ಠೆಯ ಪ್ರಶ್ನೆಯಲ್ಲ. ಅಥವಾ ಈ ಹೊತ್ತಿನ ಸರ್ಕಾರದ ಪ್ರಶ್ನೆಯೂ ಅಲ್ಲ. ಇದೊಂದು ಸಾಮಾಜಿಕ-ಸಾಂಸ್ಕೃತಿಕ ಪ್ರಶ್ನೆ. ಇಡೀ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿ, ಸಾಹಿತ್ಯ ವಲಯವನ್ನೂ ಕದಡಿ ರಾಡಿ ಮಾಡಿರುವ ಈ ವಿವಾದವನ್ನು ಸೌಹಾರ್ದಯುತವಾಗಿ ನಿವಾರಿಸುವುದು ಮುಖ್ಯಮಂತ್ರಿಯಾದವರ ನೈತಿಕ ಹೊಣೆ. ರಾಜ್ಯದಲ್ಲಿ ಶಿಕ್ಷಣ ತಜ್ಞರ ಕೊರತೆಯೇನೂ ಇಲ್ಲ, ಸಾಹಿತಿಗಳ ಕೊರತೆಯೂ ಇಲ್ಲ.

ಮುಖ್ಯಮಂತ್ರಿ ಬೊಮ್ಮಾಯಿ, ವಿವಾದಾಸ್ಪದ ನಿರ್ಣಯವನ್ನು ಅಮಾನತಿನಲ್ಲಿಟ್ಟು, ಎಲ್ಲ ಭಾಗಿದಾರರೊಡನೆ ಸಮಾಲೋಚನೆ ನಡೆಸುವ ವ್ಯವಧಾನವನ್ನಾದರೂ ತೋರಬೇಕಲ್ಲವೇ ? ಸರ್ವಪಕ್ಷ ಸಭೆ ಕರೆದು, ಸಾರ್ವಜನಿಕ ವಲಯದ ಚಿಂತಕರನ್ನು, ಸಾಹಿತಿಗಳನ್ಮು, ಶೈಕ್ಷಣಿಕ ವಲಯದ ವಿಶೇಷಜ್ಞರನ್ನು ಸಂಪರ್ಕಿಸಿ, ಸಮಾಲೋಚನೆ ನಡೆಸಿ ರಾಜಕೀಯವಾಗಿ ಒಂದು ಪ್ರಜಾಸತ್ತಾತ್ಮಕ ನಿರ್ಧಾರ ಕೈಗೊಳ್ಳಬೇಕಲ್ಲವೇ ?

ಇಲ್ಲಿ ಎರಡು ಸಂಗತಿಗಳು ಢಾಳಾಗಿ ಕಾಣುತ್ತವೆ. ಹಾಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರ ಶಾಶ್ವತ ಎಂಬ ಭ್ರಮೆಗೊಳಗಾದಂತಿದೆ. ಅಥವಾ ಮರು ಆಯ್ಕೆಯಾಗುವ ಭರವಸೆ ಕಳೆದುಕೊಂಡು ತನ್ನ ಸೈದ್ಧಾಂತಿಕ ಕಾರ್ಯಸೂಚಿಯನ್ನು ಹೇಗಾದರೂ ಮಾಡಿ ಜಾರಿಗೊಳಿಸುವ ಅವಸರ ತೋರುತ್ತಿದೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಶಾಶ್ವತವಲ್ಲ ಎಂಬ ಸಾಮಾನ್ಯ ಅರಿವು ಜನಪ್ರತಿನಿಧಿಗಳಲ್ಲಿ ಇಲ್ಲದೆ ಹೋದರೆ ಏನಾಗಬಹುದು ಎನ್ನುವ ಪ್ರಶ್ನೆಗೆ ಕರ್ನಾಟಕದ ಇಂದಿನ ರಾಜಕೀಯ ಬೆಳವಣಿಗೆಗಳು ಉತ್ತರ ನೀಡುತ್ತವೆ.

ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮನಗಂಡು ಈ ವಿವಾದವನ್ನು ಬಗೆಹರಿಸಲು ಮುಂದಾಗಬೇಕಿದೆ. ಏಕೆಂದರೆ ಈ ರಾಜಕೀಯ-ಸೈದ್ಧಾಂತಿಕ ಮೇಲಾಟದಲ್ಲಿ ಬಲಿಯಾಗುತ್ತಿರುವುದು ಇಂದಿನ ಶಾಲಾ ಮಕ್ಕಳು, ಬಲಿಯಾಗುವುದು ಭವಿಷ್ಯದ ಪೀಳಿಗೆಯ ಮಕ್ಕಳು. ಈ ಸೂಕ್ಷ್ಮವನ್ನು ಮರೆತರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

Trending