ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್‌ಎನ್‌ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ‌್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್‌ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್‌ಎಸ್‌ಎಲ್‌ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

