ದಿನದ ಸುದ್ದಿ
ಜಾಗತಿಕ ಶಾಂತಿಗೆ ಯೋಗದ ಕೊಡುಗೆ ಅನನ್ಯ : ಪ್ರಧಾನಮಂತ್ರಿ ನರೇಂದ್ರ ಮೋದಿ
ಸುದ್ದಿದಿನ ಡೆಸ್ಕ್ : ಜಾಗತಿಕ ಶಾಂತಿಗೆ ಯೋಗದ ಕೊಡುಗೆ ಅನನ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಮೈಸೂರಿನ ಅರಮನೆಯ ಅವರಣದಲ್ಲಿಂದು ನಡೆದ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯೋಗದಿಂದ ಸಮಾಜ, ದೇಶ ಮತ್ತು ವಿಶ್ವಕ್ಕೆ ಶಾಂತಿ ದೊರೆಯುತ್ತದೆ ಯೋಗ ಇಡಿ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಭಾರತ ಸದಾ ಕಾಲ ವಿಶ್ವದ ಒಳಿತನ್ನು ಬಯಸುತ್ತದೆ. ಈ ಬಾರಿ ವಿಶ್ವ ಯೋಗ ದಿನಾಚರಣೆಯ ಆಶಯ ಇದಕ್ಕೆ ಪೂರಕವಾಗಿದೆ. ಮಾನವೀಯತೆಗಾಗಿ ಯೋಗ ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ ಎಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ 75ವಿವಿಧ ನಗರಗಳಲ್ಲಿನ ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನಾಚರಣೆ ನಡೆಯುತ್ತಿದೆ ಎಂದರು. ನಂತರ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಬಳಿಕ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಯೋಗದ ಪ್ರಯೋಜನ ಕುರಿತು ಅರಿವು ಮೂಡಿಸಲು ಆಧುನಿಕ ಸಂವಹನ ತಂತ್ರಗಳ ಬಳಕೆಯ ಮೂಲಕ ಡಿಜಿಟಲ್ ಪ್ರದರ್ಶನ, ಯೋಗದ ಭವ್ಯತೆ, ಇತರ ಆಯುಷ್ ಪದ್ಧತಿಗಳು ಹಾಗೂ ಯೋಗ ನವೋದ್ಯಮಗಳ ಕುರಿತು ತಿಳುವಳಿಕೆ ನೀಡುವ ಪ್ರದರ್ಶನಕ್ಕೆ ಪ್ರಧಾನಿ ಚಾಲನೆ ನೀಡಿದರು.
We are greatly inspired by the thoughts and ideals of Jagadguru Basaveshwara, particularly the emphasis on serving others and acquiring knowledge. pic.twitter.com/HVOfV6b7FL
— Narendra Modi (@narendramodi) June 21, 2022
ರಾಜ್ಯದ ಹಲವೆಡೆ ಯೋಗ ದಿನಾಚರಣೆ
ಕಾರವಾರ ನೌಕಾನೆಲೆಯಲ್ಲಿ ಯೋಗದಿನ ಆಚರಿಸಲಾಯಿತು. ದೇಶದ ಅತಿ ದೊಡ್ಡ ಏರ್ ಕ್ರಾಫ್ಟ್ ಕ್ಯಾರಿಯರ್ ಐ.ಎನ್.ಎಸ್ ವಿಕ್ರಮಾಧಿತ್ಯ ಸೇರಿದಂತೆ ನೌಕಾನೆಲೆಯ ವಿವಿಧ ಕಡಲತಾಣಗಳಲ್ಲಿ ಒಟ್ಟು ೩ ಸಾವಿರ ಮಂದಿ ಏಕಕಾಲಕ್ಕೆ ಯೋಗಾಭ್ಯಾಸ ಮಾಡಿದರು. ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಅತುಲ್ ಆನಂದ, ನೌಕಾದಳದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ಚಿತ್ರಕಲೆ, ರಸಪ್ರಶ್ನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನೌಕಾನೆಲೆಯಲ್ಲಿ ಹಮ್ಮಿಕೊಂಡಿದ್ದು ವಿಶೇಷವಾಗಿತ್ತು. ಹಂಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಯೋಗ ಜೀವನದ ಒಂದು ಭಾಗವಾಗಬೇಕು ಎಂದು ಹೇಳಿದರು.
ಇಂದು ವಿಶ್ವ ಯೋಗ ದಿನಾಚರಣೆ ಅಂಗವಾಗಿ ವಿಶ್ವ ಪರಂಪರೆಯ ತಾಣ ಹಂಪಿಯ ವಿರುಪಾಕ್ಷೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಆಯುಷ್ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ೮ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ಮತ್ತಿತರರು ಪಾಲ್ಗೊಂಡಿದ್ದರು. ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲು ದೇವಾಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯೋಗಭ್ಯಾಸ ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ಕರೆ ನೀಡಿದರು. ವಿಜಯಪುರದ ಐತಿಹಾಸಿಕ ಗೋಲಗುಮ್ಮಟದ ಆವರಣದಲ್ಲಿ ೮ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಯೋಗದ ಮಹತ್ವವನ್ನು ಪ್ರದಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ ೨೧ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದ ೧೯೦ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಇದು ಭಾರತೀಯರಿಗೆ ಅಭಿಮಾನದ ಸಂಗತಿ ಎಂದು ಹೇಳಿದರು.
ದಾವಣಗೆರೆ ಜಿಲ್ಲೆಯ 3 ಪಾರಂಪರಿಕ ತಾಣಗಳಲ್ಲಿ ಜಿಲ್ಲಾಡಳಿತದ ವತಿಯಿಂದ ಏಕಕಾಲಕ್ಕೆ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ತಾಲ್ಲೂಕು ಸಂತೆ ಬೆನ್ನೂರಿನ ಐತಿಹಾಸಿಕ ಪುಷ್ಕರಣಿ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚಾಲನೆ ನೀಡಿದರು.
ಹರಿಹರೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಎಸ್.ರಾಮಪ್ಪ ಉದ್ಘಾಟಿಸಿದರು. ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮೈದಾನದಲ್ಲಿ ಯೋಗ ದಿನಾಚರಣೆ ನಡೆಯಿತು.
ಯಾದಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಮಾತನಾಡಿ, ನಿತ್ಯ ಯೋಗ ಮಾಡುವುದರಿಂದ ಉತ್ತಮ ಜೀವನ ನಡೆಸಬಹುದು ಎಂದು ಹೇಳಿದರು.
ರಾಯಚೂರು ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ಮೊದಲಾದವರು ಭಾಗಿಯಾಗಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳಲ್ಲಿ ಸ್ಥಳೀಯ ಆಡಳಿತದ ವತಿಯಿಂದ ಯೋಗ ದಿನಾಚರಣೆ ನಡೆಯಿತು. ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ವರದಾನವಾಗಿದೆ ಎಂದು ಹೇಳಿದರು.
ಕೊಡಗು ಜಿಲ್ಲಾಡಳಿತದ ವತಿಯಿಂದ ಮಡಿಕೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್, ಸೇರಿಂದಂತೆ ನೂರಾರು ಯೋಗಪಟುಗಳು ಭಾಗವಹಿಸಿದ್ದರು. ಮಂಗಳೂರಿನ ಪುರಭವನದಲ್ಲಿ ಆಯುಷ್ ಇಲಾಖೆ, ನೆಹರೂ ಯುವಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಯನ್ನು ಶಾಸಕ ಸಿ.ಟಿ ರವಿ ಉದ್ಘಾಟಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


